Asianet Suvarna News Asianet Suvarna News

ಸರ್ಕಾರದ ನೀತಿ ವಿರೋಧಿಸಿ ರಾಜ್ಯಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ: ಡಿಕೆಶಿ

ಲಾಕ್‌ಡೌನ್‌ ಪರಿಹಾರ ಇನ್ನೂ ಸಂಕಷ್ಟದಲ್ಲಿರುವವರಿಗೆ ತಲುಪಿಲ್ಲ: ಡಿಕೆಶಿ ಆರೋಪ| ಇಂಧನ ಬೆಲೆ ಏರಿಕೆಗೆ ವಿರೋಧ| ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಕಷ್ಟಕ್ಕೆ ಹಾಗೂ ಕುಂದು ಕೊರತೆಗಳಿಗೆ ಧ್ವನಿಯಾಗಲು ವೃತ್ತಿಪರ ಚಾಲಕರ ನೇತೃತ್ವದಲ್ಲಿ ಬ್ಲಾಕ್‌ ಮಟ್ಟದಿಂದ ರಾಜ್ಯಮಟ್ಟದವರೆಗೂ ಕಾಂಗ್ರೆಸ್‌ ಪಕ್ಷದಿಂದ ವಿಶೇಷ ಘಟಕ ಆರಂಭ| ಶ್ರಮಿಕರ ಧ್ವನಿಯಾಗಿ ಈ ಘಟಕ ಕಾರ್ಯ ನಿರ್ವಹಣೆ| 

KPCC President D K Shivakumar says Congress Will be Protest Against State Government
Author
Bengaluru, First Published Jun 26, 2020, 8:41 AM IST

ಬೆಂಗಳೂರು(ಜೂ.26): ಇಂಧನ ಬೆಲೆ ಏರಿಕೆ ಮತ್ತು ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಶ್ರೀಸಾಮಾನ್ಯನಿಗೆ ಸ್ಪಂದಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ನಿರ್ಮಾಣ ಮಾಡಲು ಜೂನ್‌ 29ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ನಗರದ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲದ ಬೆಲೆ ಬ್ಯಾರಲ್‌ಗೆ 39 ಡಾಲರಿದ್ದರೂ ಸಹ ಕಳೆದ 19 ದಿನಗಳಿಂದ ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇದರಿಂದ ಜನ-ಸಾಮಾನ್ಯರು ಜೀವನ ನಡೆಸುವುದೇ ಕಷ್ಟವಾಗಲಿದೆ. ಜತೆಗೆ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿದ ಜನರಿಗೆ ಸರ್ಕಾರ ಘೋಷಿಸಿದ ಪರಿಹಾರ ಇನ್ನೂ ಕೈಸೇರಿಲ್ಲ. ಆದ್ದರಿಂದ ಕೂಡಲೇ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಡಿ.ಕೆ ಶಿವಕುಮಾರ್ ಪದಗ್ರಹಣ: ಕೈ ಮುಖಂಡರಿಗೆ ಎಚ್ಚರಿಕೆ ನೀಡಿದ ಡಿಕೆಶಿ

ಕಾಂಗ್ರೆಸ್‌ ಪಕ್ಷದ ಮಾಜಿ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಬುಧವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರಾಷ್ಟ್ರಾದ್ಯಂತ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ ಕಾರ್ಯಕ್ರಮ ಆಯೋಜಿಸುವಂತೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿ ಹುತಾತ್ಮರಾದ ಯೋಧರಿಗೆ ಗೌರವ ಸಲ್ಲಿಸಲು ಜೂನ್‌ 26ರಂದು ಬೆಳಗ್ಗೆ 11ಕ್ಕೆ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಮೌನಾಚರಣೆ ಮಾಡಲಾಗುವುದು. ಅದೇ ರೀತಿ ಜಿಲ್ಲಾ ಕೇಂದ್ರಗಳಲ್ಲೂ ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಎಲ್ಲರಿಗೂ ಉಚಿತ ಚಿಕಿತ್ಸೆ ನೀಡಿ:

ರಾಜ್ಯದಲ್ಲಿ ಎಲ್ಲರಿಗೂ ಆರೋಗ್ಯ ಸೇವೆ ಸಿಗಬೇಕು ಎಂಬ ದೃಷ್ಟಿಯಿಂದ ಕಾಂಗ್ರೆಸ್‌ ಸರ್ಕಾರ ‘ಆರೋಗ್ಯ ಕರ್ನಾಟಕ’ ಯೋಜನೆ ಜಾರಿಗೆ ತಂದಿತ್ತು. ಕೇಂದ್ರ ಸರ್ಕಾರ ‘ಆಯುಷ್ಮಾನ್‌ ಭಾರತ’ ಯೋಜನೆ ತಂದಿದೆ. ಈ ಎಲ್ಲ ಯೋಜನೆ ಇದ್ದರೂ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ದರ ನಿಗದಿ ಮಾಡಿರುವುದು ಖಂಡನೀಯ. ಸರ್ಕಾರ ಜನರ ಪ್ರಾಣದ ಜತೆ ಚೆಲ್ಲಾಟವಾಡದೆ ಬಡವರು, ಶ್ರೀಮಂತರು, ಅಧಿಕಾರಿಗಳೆಂದು ಭೇದ-ಭಾವವಿಲ್ಲದಂತೆ ಎಲ್ಲರಿಗೂ ಸಮಾನವಾಗಿ ಉಚಿತ ಚಿಕಿತ್ಸೆ ನೀಡಬೇಕು ಎಂದು ಒತ್ತಾಯಿಸಿದರು.

ಆಟೋ, ಟ್ಯಾಕ್ಸಿ ಚಾಲಕರಿಗೆ ನೆರವು:

ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಕಷ್ಟಕ್ಕೆ ಹಾಗೂ ಕುಂದು ಕೊರತೆಗಳಿಗೆ ಧ್ವನಿಯಾಗಲು ವೃತ್ತಿಪರ ಚಾಲಕರ ನೇತೃತ್ವದಲ್ಲಿ ಬ್ಲಾಕ್‌ ಮಟ್ಟದಿಂದ ರಾಜ್ಯಮಟ್ಟದವರೆಗೂ ಕಾಂಗ್ರೆಸ್‌ ಪಕ್ಷದಿಂದ ವಿಶೇಷ ಘಟಕ ಆರಂಭಿಸಲಾಗುವುದು. ಶ್ರಮಿಕರ ಧ್ವನಿಯಾಗಿ ಈ ಘಟಕ ಕಾರ್ಯ ನಿರ್ವಹಿಸಲಿದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.
 

Follow Us:
Download App:
  • android
  • ios