ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ವಸತಿ ನಿಲಯವೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು,. ವಾರ್ಡನ್ ಅಮಾನತು ಆರೋಪಿ ಬಂಧನ

ಕೊಪ್ಪಳ (ನ.26): ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮೆಟ್ರಿಕ್ ಪೂರ್ವ ವಸತಿ ನಿಲಯವೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಪ್ರಕರಣವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (KSCPCR) ಗಂಭೀರವಾಗಿ ಪರಿಗಣಿಸಿದೆ. ಘಟನೆಯಲ್ಲಿ ವಸತಿ ನಿಲಯದ ಸಿಬ್ಬಂದಿಯ ನಿರ್ಲಕ್ಷ್ಯ ಎದ್ದು ಕಾಣುತ್ತಿರುವ ಹಿನ್ನೆಲೆಯಲ್ಲಿ, ಆಯೋಗವು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಆಯೋಗದ ಅಧ್ಯಕ್ಷರು ಘಟನೆ ಕುರಿತು ಸಂಪೂರ್ಣ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿದ್ದು, ಮೂರು ದಿನಗಳ ಒಳಗಾಗಿ ಆಯೋಗಕ್ಕೆ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.

ಕುಕನೂರು ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲು:

ಈ ಘಟನೆಯು ವಸತಿ ನಿಲಯದ ಆವರಣದಲ್ಲಿಯೇ ನಡೆದಿದ್ದು, ಹೆರಿಗೆಯಾದ ಬಳಿಕ ತಾಯಿ ಮತ್ತು ನವಜಾತ ಶಿಶುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕುಕನೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿ ಹೆರಿಗೆ ಪ್ರಕರಣ: ಬಸವರಾಜ ರಾಯರೆಡ್ಡಿ ಹೇಳಿಕೆ:

ಇದೇ ಪ್ರಕರಣ ಕುರಿತು ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ಅವರು ಕೊಪ್ಪಳದಲ್ಲಿ ಪ್ರತಿಕ್ರಿಯಿಸಿದ್ದು, ಇದು ಕಾನೂನಿನ ಪ್ರಶ್ನೆಯಾಗಿದ್ದು, ಇಂತಹ ಘಟನೆಗಳಿಗೆ ನಾವಾಗಿಯೇ ಉತ್ತರ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ವಾರ್ಡನ್‌ ಅವರನ್ನು ಈಗಾಗಲೇ ಅಮಾನತ್ತುಗೊಳಿಸಲಾಗಿದೆ ಮತ್ತು ಘಟನೆಗೆ ಕಾರಣನಾದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಕಾನೂನು ಪ್ರಕಾರ ಕ್ರಮ ಕೈಗೊಂಡಿಲ್ಲ ಅಂದರೆ ಮಾತ್ರ ನಾವು ಮಾತನಾಡಬಹುದು. ಇದರಲ್ಲಿ ಶಾಸಕರಾಗಿ ನಾವು ಏನೂ ಮಾಡುವುದಕ್ಕೆ ಆಗುವುದಿಲ್ಲ. ವಾರ್ಡನ್ ಅವರದ್ದು ತಪ್ಪಿದ್ದರೆ ಅವರನ್ನು ಡಿಸ್ಮಿಸ್ ಮಾಡಲಿ. ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಿದರು. ತಾವು ಕಾನೂನು ಓದಿರುವುದಾಗಿ ತಿಳಿಸಿದ ಅವರು, ವಾರ್ಡನ್ ಅವರನ್ನು ಬಂಧಿಸಲು ಸೂಚನೆ ನೀಡಿರುವುದಾಗಿಯೂ ತಿಳಿಸಿದರು.

KSCPCR takes the seriously Koppal hostel student gives birth case