ಭಾನುವಾರ ನಡೆಯಲಿರುವ ಕೆ-ಸೆಟ್ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಗಿ ಭದ್ರತೆ ಮತ್ತು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಒಟ್ಟು 1,29,212 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ರಾಜ್ಯದ 326 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರಸಂಹಿತೆ ಪಾಲಿಸಬೇಕು

ಬೆಂಗಳೂರು (ಅ.11): ಭಾನುವಾರ ನಡೆಯಲಿರುವ ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಬಿಗಿ ಭದ್ರತಾ ಕ್ರಮಗಳೊಂದಿಗೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಕೆ-ಸೆಟ್ ಪರೀಕ್ಷೆಗೆ 1,29,212 ಮಂದಿ ಅರ್ಜಿ

ಒಟ್ಟು 37 ವಿವಿಧ ವಿಷಯಗಳಿಗೆ ನಡೆಯುವ ಪರೀಕ್ಷೆಗೆ 1,29,212 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು ಉತ್ತರ ಮತ್ತು ದಕ್ಷಿಣ, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿನ 326 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಎಲ್ಲ 37 ವಿಷಯಗಳ ಪರೀಕ್ಷೆ ನಡೆದರೆ, ಉಳಿದ ಜಿಲ್ಲೆಗಳಲ್ಲಿ 13 ವಿಷಯಗಳ ಪರೀಕ್ಷೆಗಳು ಮಾತ್ರ ನಡೆಯಲಿವೆ. ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆವರೆಗೆ ಪರೀಕ್ಷೆ ನಡೆಯಲಿದ್ದು, ಒಮ್ಮೆಗೇ ಎರಡೂ ಪತ್ರಿಕೆಗಳ (ಪತ್ರಿಕೆ 1 ಮತ್ತು ಪತ್ರಿಕೆ 2) ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗುತ್ತದೆ.

ಅಭ್ಯರ್ಥಿಗಳು ಮೂರು ಗಂಟೆ ಅವಧಿಯಲ್ಲಿ 100 ಅಂಕಗಳ ಸಾಮಾನ್ಯ ಜ್ಞಾನ ಮತ್ತು 200 ಅಂಕಗಳ ವಿಷಯವಾರು ಪತ್ರಿಕೆಗಳಿಗೆ ಉತ್ತರಿಸಬೇಕು. ಎರಡೂ ಪತ್ರಿಕೆಗಳಿಗೆ ಪ್ರತ್ಯೇಕ ಓಎಂಆರ್‌ ನೀಡುತ್ತಿದ್ದು, ಆಯಾ ಓಎಂಆರ್‌ನಲ್ಲೇ ಅವುಗಳ ಉತ್ತರಗಳನ್ನು ಎಚ್ಚರಿಕೆಯಿಂದ ದಾಖಲಿಸಬೇಕು ಎಂದು ಕೆಇಎ ಸಲಹೆ ನೀಡಿದೆ.

ಈ ಹಿಂದಿನ ಎಲ್ಲ ಪರೀಕ್ಷೆಗಳಂತೆಯೇ ಈ ಪರೀಕ್ಷೆಗೂ ವಸ್ತ್ರಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳ ಪ್ರವೇಶಕ್ಕೂ ಮುನ್ನ ಅಭ್ಯರ್ಥಿಗಳನ್ನು ಮುಖ ಚಹರೆ ಪತ್ತೆ ವ್ಯವಸ್ಥೆ ಪರಿಶೀಲನೆ ನಡೆಸಿ, ತಪಾಸಣೆಗೆ ಒಳಪಡಿಸಿ ಒಳಗೆ ಬಿಡಲಾಗುತ್ತದೆ. ಅಗತ್ಯ ಪೊಲೀಸ್‌ ಮತ್ತು ಗೃಹ ರಕ್ಷಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ ಎಂದು ನಿರ್ದೇಶಕ ಎಚ್.ಪ್ರಸನ್ನ ವಿವರಿಸಿದ್ದಾರೆ.