ತುಮಕೂರು[ಜ.31]: ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಗುರುವಾರ ನೆರವೇರಲಿದ್ದು, ಪ್ರತಿವರ್ಷ ಡಾ. ಶಿವಕುಮಾರ ಸ್ವಾಮೀಜಿ ಅವರ ಗುರುವಂದನೆ ನಡೆಯುತ್ತಿದ್ದ ಸಿದ್ಧಗಂಗಾ ಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ.

4 ಲಕ್ಷಕ್ಕೂ ಅಧಿಕ ಮಂದಿ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈಗಾಗಲೇ ರಾಜ್ಯದ ವಿವಿಧ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದು, ಶ್ರೀಗಳ ಗದ್ದುಗೆಯ ದರ್ಶನ ಪಡೆಯುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಬಂದೋಬಸ್‌್ತಗಾಗಿ 2500 ಪೊಲೀಸರನ್ನು ನಿಯೋಜಿಸಲಾಗಿದೆ.

ಮಠಕ್ಕೆ ಬಂದವರು ಹಸಿದು ಹೋಗಬಾರದೆಂಬ ಶ್ರೀಗಳ ಆಶಯಕ್ಕೆ ಧಕ್ಕೆಯುಂಟಾಗದ ರೀತಿಯಲ್ಲಿ ದಾಸೋಹದ ವ್ಯವಸ್ಥೆ ಮಾಡಲಾಗಿದ್ದು, 10 ಕಡೆ ಭೋಜನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಳೆದ 2 ದಿನಗಳಿಂದ ಅಡುಗೆ ಸಿದ್ಧತೆ ಕಾರ್ಯಗಳು ಭರದಿಂದ ಸಾಗಿದೆ. ಬೂಂದಿ, ಮಾಲ್ದಿ, ಜಹಾಂಗೀರ್‌ ಜತೆಗೆ ಅನ್ನ, ಸಾಂಬಾರು ಹಾಗೂ ಮಜ್ಜಿಗೆ ವ್ಯವಸ್ಥೆ ಮಾಡಲಾಗಿದೆ.

ಮುಂಜಾನೆಯಿಂದ ಪೂಜೆಗಳು ಆರಂಭ:

ವಿವಿಧ ಸ್ವಾಮೀಜಿಗಳ ಸಮ್ಮುಖದಲ್ಲಿ ಬೆಳಗ್ಗಿನ ಜಾವ 5.30ಕ್ಕೆ ಶಿವೈಕ್ಯ ಶ್ರೀಗಳ ಗದ್ದುಗೆಗೆ ಪೂಜೆ ಮಾಡುವುದರೊಂದಿಗೆ ಕಾರ್ಯಕ್ರಮ ಆರಂಭವಾಗಲಿದೆ. 8.30ಕ್ಕೆ ಗದ್ದುಗೆಯಿಂದ ಗೋಸಲ ಸಿದ್ದೇಶ್ವರ ವೇದಿಕೆಯವರೆಗೆ ಬೆಳ್ಳಿರಥದಲ್ಲಿ ಶ್ರೀಗಳ ಭಾವಚಿತ್ರದ ಮೆರವಣಿಗೆ ನಡೆಯಲಿದೆ.

ಬಳಿಕ 10 ಗಂಟೆಯಿಂದ ಸಿದ್ಧಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸುತ್ತೂರು ಶ್ರೀಗಳು ಅಧ್ಯಕ್ಷತೆ ವಹಿಸಲಿದ್ದಾರೆ. ತರಳಬಾಳು ಶ್ರೀ, ಆದಿಚುಂಚನಗಿರಿ ಶ್ರೀ, ಬೇಲಿ ಮಠದ ಶ್ರೀ, ದೇಗುಲಮಠದ ಶ್ರೀ, ಸೇರಿದಂತೆ ವಿವಿಧ ಮಠಗಳ ಶ್ರೀಗಳು, ಆರ್ಟ್‌ ಆಫ್‌ ಲಿವಿಂಗ್‌ನ ರವಿಶಂಕರ್‌ ಗುರೂಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಉದ್ಘಾಟನೆ ನೆರವೇರಿಸಲಿದ್ದು, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್‌, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್‌. ಯಡಿಯೂರಪ್ಪ, ಸಿದ್ದರಾಮಯ್ಯ, ಎಂ. ವೀರಪ್ಪ ಮೊಯ್ಲಿ, ಗೃಹ ಸಚಿವ ಎಂ.ಬಿ. ಪಾಟೀಲ್‌, ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಸಚಿವ ಡಿ.ಕೆ. ಶಿವಕುಮಾರ್‌ ನುಡಿನಮನ ಸಲ್ಲಿಸಲಿದ್ದಾರೆ. ಪ್ರಾಸ್ತಾವಿಕವಾಗಿ ಡಾ. ಗೊ.ರು. ಚನ್ನಬಸಪ್ಪ ಮಾತನಾಡಲಿದ್ದಾರೆ.