ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಆ.30 ರಂದು ಮೈಸೂರಿನಲ್ಲಿ ಅಧಿಕೃತ ಚಾಲನೆ ನೀಡಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಫಲಾನುಭವಿಗಳು ಭಾಗಿಯಾಗುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕರೆ ನೀಡಿದರು.

ನಂಜನಗೂಡು (ಆ.27) :  ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಆ.30 ರಂದು ಮೈಸೂರಿನಲ್ಲಿ ಅಧಿಕೃತ ಚಾಲನೆ ನೀಡಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಫಲಾನುಭವಿಗಳು ಭಾಗಿಯಾಗುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಕರೆ ನೀಡಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಆಡಳಿತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಹಿಂದಿನಿಂದಲೂ ಮಹಿಳೆಯರ ಸಬಲೀಕರಣಕ್ಕೆ ದುಡಿದ ಪಕ್ಷವಾಗಿದೆ. ಇಂದಿರಾ ಗಾಂಧಿ ಅವರು ಸ್ವಾತಂತ್ರ ಹೋರಾಟದಲ್ಲಿ ಭಾಗವಹಿಸಿದಲ್ಲದೆ ದೇಶದ ಪ್ರಧಾನಿಯಾಗಿ 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದು ವಿಶ್ವದಲ್ಲೇ ಹೆಸರುವಾಸಿಯಾಗಿದೆ ಎಂದರು.

ಗ್ಯಾರಂಟಿ ಯೋಜನೆಯಿಂದ ಬಡ ಕುಟುಂಬಗಳು ಸ್ವಾವಲಂಬಿ ಜೀವನ: ಲಕ್ಷ್ಮೀ ಹೆಬ್ಬಾಳ್ಕರ್

ಅದೇ ರೀತಿ ಕರ್ನಾಟಕ ರಾಜ್ಯದ ಕಾಂಗ್ರೆಸ್‌ ಸರ್ಕಾರ ಮಹಿಳೆಯರಿಗೆ ಗೌರವ ನೀಡುವ ಸಲುವಾಗಿ ಮತ್ತು ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿ ರೂಪಿಸುವ ಸಲುವಾಗಿ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತಂದಿದೆ. ಶಕ್ತಿಯೋಜನೆ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಕಾರ್ಯಕ್ರಮಗಳನ್ನು ಯಾವುದೇ ಸರ್ಕಾರ ಬಂದರೂ ತೆಗೆದು ಹಾಕಲು ಸಾಧ್ಯವಿಲ್ಲ. ಅವು ಮುಂದುವರಿಯಲಿವೆ. ಕಾಂಗ್ರೆಸ್‌ ಸರ್ಕಾರ ಈ ಮೊದಲು ಮಾಡಿರುವ ಎಲ್ಲಾ ಯೋಜನೆಗಳು ಸಹ ಕಾಯಂ ಆಗಿ ಜನರ ಜೀವನಕ್ಕೆ ಉಪಯೋಗವಾಗುವಂತಹ ಯೋಜನೆಗಳೇ ಆಗಿವೆ. ನರೇಗಾ ಯೋಜನೆ ಇನ್ನೂ ಮುಂದುವರೆಯುತ್ತಿರುವುದೇ ಇದಕ್ಕೆ ನಿದರ್ಶನ ಎಂದರು.

ಗೃಹಲಕ್ಷ್ಮಿ ಯೋಜನೆಯನ್ನು ಸಿಎಂ ಹಾಗೂ ಡಿಸಿಎಂ ನೇತೃತ್ವದಲ್ಲಿ ಬೆಳಗಾವಿ ಜಿಲ್ಲೆಯಲ್ಲೇ ಚಾಲನೆ ನೀಡಬೇಕು ಎಂದು ನಿರ್ಣಯಿಸಿ ಎಲ್ಲಾ ರೀತಿಯ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿತ್ತು. ಆದರೆ ತಾಯಿ ಚಾಮುಂಡೇಶ್ವರಿ ಹಾಗೂ ಶ್ರೀ ನಂಜುಂಡೇಶ್ವರನ ಆಶೀರ್ವಾದದಿಂದ ಮೈಸೂರಿಗೆ ಸ್ಥಳಾಂತರಗೊಂಡು ಆ.30 ರಂದು ಚಾಲನೆ ನೀಡಲಾಗುತ್ತಿದೆ. ಈ ಕಾರ್ಯಕ್ರಮ ಹಬ್ಬದ ರೀತಿ ಸಂಭ್ರಮದಿಂದ ಜಾರಿಗೊಳಿಸಲು ಎಲ್ಲರೂ ಮನೆ ಮುಂದೆ ರಂಗೋಲಿ ಬಿಡಿಸಿ ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಫಲಾನುಭವಿಗಳನ್ನು ಕರೆ ತರುವಲ್ಲಿ ನಮ್ಮ ಇಲಾಖೆ ಅಧಿಕಾರಿಗಳು ಹಾಗೂ ತಾಲೂಕು ಆಡಳಿತ ಹೆಚ್ಚು ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದರು.

ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಶಾಸಕ ದರ್ಶನ್‌ ಧ್ರುವನಾರಾಯಣ್‌ ಮಾತನಾಡಿ, ಗೃಹಲಕ್ಷ್ಮಿ ಯೋಜನೆಗೆ ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲಿ ಚಾಲನೆಗೊಳ್ಳುತ್ತಿರುವುದು ಹೆಮ್ಮೆಯ ವಿಚಾರ. ಕಾರ್ಯಕ್ರಮದಲ್ಲಿ 1.50 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮ ಯಶಸ್ವಿಗೊಳ್ಳಲು ಎಲ್ಲ ರೀತಿಯ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.

ತಾಲೂಕಿನಿಂದ ಹೆಚ್ಚು ಜನ ಫಲಾನುಭವಿಗಳು ಭಾಗವಹಿಸುವ ಸಲುವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರತಿ ಗ್ರಾಪಂಗೆ 3 ಉಚಿತ ಬಸ್‌ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಜೊತೆಗೆ ಕುಡಿಯುವ ನೀರು ಊಟ ತಿಂಡಿ ವ್ಯವಸ್ಥೆಯನ್ನು ಮಾಡಲಾಗಿದೆ. ಹಾಗಾಗಿ ನಮ್ಮ ಕ್ಷೇತ್ರದಿಂದ ಹೆಚ್ಚು ಮಹಿಳಾ ಫಲಾನುಭವಿಗಳನ್ನು ಕರೆ ತರಲು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರು ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.

'ನಮ್ಮೂರ ನಾಗರ ಪಂಚಮಿ' ಕಾರ್ಯಕ್ರಮ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಭಾಗಿ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರ್ದೇಶಕ ಬಸವರಾಜ್‌, ತಹಸೀಲ್ದಾರ್‌ ಶಿವಕುಮಾರ್‌ ಕಾಸ್ನೂರು, ತಾಪಂ ಇಒ ರಾಜೇಶ್‌, ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಸಿ.ಎಂ. ಶಂಕರ್‌, ಶ್ರೀಕಂಠನಾಯಕ, ಜಿಪಂ ಮಾಜಿ ಸದಸ್ಯೆ ಲತಾಸಿದ್ಧ ಶೆಟ್ಟಿ, ಮುಖಂಡರಾದ ದೊರೆಸ್ವಾಮಿ ನಾಯಕ, ನಾಗೇಶ್‌ ರಾಜ್‌ ಮೊದಲಾದವರು ಇದ್ದರು.