ನವದೆಹಲಿ :  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ಗೆ ಹೆಚ್ಚೆಂದರೆ 5 ಕ್ಷೇತ್ರಗಳನ್ನು ಮಾತ್ರ ಬಿಟ್ಟುಕೊಡಬಹುದು ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ತಿಳಿಸಿದ್ದಾರೆ.

ಇತ್ತೀಚೆಗೆ ದೆಹಲಿಗೆ ಆಗಮಿಸಿದ್ದ ಸಿದ್ದರಾಮಯ್ಯ ಹಾಗೂ ದಿನೇಶ್‌ ಗುಂಡೂರಾವ್‌ ಅವರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌ ಜೊತೆ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಈ ಮಾತುಕತೆಯಲ್ಲಿ ಮಂಡ್ಯ, ಹಾಸನ, ಚಿಕ್ಕಬಳ್ಳಾಪುರ, ಶಿವಮೊಗ್ಗದ ಜೊತೆಗೆ ಇನ್ನೊಂದು ಸೀಟು ಕೊಡಲು ನಾವು ಒಪ್ಪಬಹುದು. ಅದನ್ನು ಬಿಟ್ಟು ಯಾವುದೇ ಕಾರಣಕ್ಕೂ ಹೆಚ್ಚು ಕೊಡಬಾರದು. ಇದರಿಂದ ಉಪಯೋಗವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆಂದು ಮೂಲಗಳು ತಿಳಿಸಿವೆ.

ಜೆಡಿಎಸ್‌ಗೆ 5 ಕ್ಷೇತ್ರಗಳನ್ನು ಬಿಟ್ಟುಕೊಡಬಹುದು. ಅದಕ್ಕೂ ಹೆಚ್ಚು ಬೇಕೆಂದರೆ ಸೀಟು ಹಂಚಿಕೆ ಮಾಡಿಕೊಳ್ಳುವುದರಲ್ಲಿ ಅರ್ಥವಿಲ್ಲ. ಇನ್ನು, ದೇವೇಗೌಡರನ್ನು ಯಾವುದೇ ಕಾರಣಕ್ಕೂ ಬೆಂಗಳೂರಿಗೆ ಬಿಟ್ಟುಕೊಳ್ಳುವುದು ಬೇಡ. ಅದು ಕಾಂಗ್ರೆಸ್‌ಗೆ ಒಳ್ಳೆಯದಲ್ಲ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.

ದೇವೇಗೌಡರು ಮೈಸೂರು ಕ್ಷೇತ್ರವನ್ನು ಕೇಳಬಹುದು. ಆದರೆ, ಇಲ್ಲಿಯವರೆಗೆ ಮೈಸೂರಿನಲ್ಲಿ ಜೆಡಿಎಸ್‌ ಎಂದೂ ಗೆದ್ದಿಲ್ಲ. ಕೊಡಲೇಬೇಕು ಎಂದಾದಲ್ಲಿ ಚಿಕ್ಕಬಳ್ಳಾಪುರ ಹಾಗೂ ತುಮಕೂರನ್ನು ಕೊಡಬಹುದು ಎಂದು ಸಿದ್ದರಾಮಯ್ಯ ತಮ್ಮ ಆಪ್ತರ ಬಳಿ ಹೇಳಿಕೊಂಡಿದ್ದಾರೆ.

ಇತ್ತೀಚೆಗೆ ಸಮನ್ವಯ ಸಮಿತಿ ಸಭೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ತಮ್ಮ ಪಕ್ಷದ ನಾಯಕ ಡ್ಯಾನಿಶ್‌ ಅಲಿ ಮೂಲಕ 12 ಲೋಕಸಭೆ ಸೀಟುಗಳಿಗೆ ಬೇಡಿಕೆ ಇಟ್ಟಿದ್ದರು. ನಂತರ ಸಿದ್ದರಾಮಯ್ಯ ಹಾಗೂ ರಾಹುಲ್‌ ಗಾಂಧಿ ಭೇಟಿ ನಡೆದಿರುವುದು ಕುತೂಹಲ ಮೂಡಿಸಿದೆ.

ವರದಿ :  ಪ್ರಶಾಂತ್‌ ನಾತು