ಬೆಳಗಾವಿ :  ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚಿಕ್ಕೋಡಿ ಮತ್ತು ಬೆಳಗಾವಿ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಯಾವುದೇ ಕಾರಣಕ್ಕೂ ಚಿಕ್ಕೋಡಿಯನ್ನು ಜೆಡಿಎಸ್‌ಗೆ ಬಿಟ್ಟುಕೊಡಲು ಸಾಧ್ಯವಿಲ್ಲ ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದ್ದಾರೆ. 

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಚಿಕ್ಕೋಡಿ ಲೋಕಸಭೆಯಲ್ಲಿ ಕಾಂಗ್ರೆಸ್‌ ಸಂಸದರು ಕಾರ್ಯನಿರ್ವಹಿಸುತ್ತಿದ್ದಾರೆ. ಆದ್ದರಿಂದ ಜೆಡಿಎಸ್‌ಗೆ ಚಿಕ್ಕೋಡಿ ಬಿಟ್ಟುಕೊಡುವುದು ಅಸಾಧ್ಯ ಎಂದು ಸ್ಪಷ್ಟಪಡಿಸಿದರು.

ಅಲ್ಲದೇ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಶೀಘ್ರದಲ್ಲಿಯೇ ಆಯ್ಕೆ ಮಾಡಲಾಗುವುದು. ಬೆಳಗಾವಿಯಲ್ಲಿ ಜೆಡಿಎಸ್‌ಗೆ ಯಾವುದೆ ಅಧಿಕಾರವಿಲ್ಲ. ಆದ್ದರಿಂದ ಬುಡಾ ಅಧ್ಯಕ್ಷ ಸ್ಥಾನವನ್ನು ಅವರಿಗೆ ನೀಡಬೇಕೆಂಬ ಬೇಡಿಕೆ ಇರುವುದರಿಂದ ಜೆಡಿಎಸ್‌ಗೆ ಬುಡಾ ಅಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡಲು ಪಕ್ಷದ ಮುಖಂಡರೊಂದಿಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು. 

ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಮಹಾದೇವ ಪಾಟೀಲ ನಿಧನದ ನಂತರ ಖಾಲಿ ಆಗಿರುವ ಸ್ಥಾನಕ್ಕೆ ಚುನಾವಣೆ ನಡೆಸಲು ಮುಂದಾಗಿದ್ದಿರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತ್ರಿಯಿಸಿದ ಅವರು, ಯಾವುದೇ ಕಾರಣಕ್ಕೂ ಚುನಾವಣೆ ನಡೆಸುವುದಿಲ್ಲ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೊಂದಾಣಿಕೆಯಿಂದ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದರು.