Mallikarjun Kharge health update: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ. ಹೃದಯ ಬಡಿತದ ವ್ಯತ್ಯಾಸದ ಕಾರಣ, ಜಯದೇವ ಆಸ್ಪತ್ರೆಯ ವೈದ್ಯರು ಪರ್ಮನೆಂಟ್ ಫೇಸ್‌ಮೇಕರ್ ಅಳವಡಿಸಿದ್ದು, ಅವರ ಆರೋಗ್ಯ ಸ್ಥಿರವಾಗಿದೆ.
ಬೆಂಗಳೂರು (ಅ.1): ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಂಗಳವಾರ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಮೈನರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದೆ. ಹೃದಯ ಬಡಿತದಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಜಯದೇವ ಹೃದ್ರೋಗ ಆಸ್ಪತ್ರೆಯ ವೈದ್ಯರ ತಂಡವು ಪರ್ಮನೆಂಟ್ ಫೇಸ್‌ಮೇಕರ್ ಅಳವಡಿಕೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶಸ್ತ್ರಚಿಕಿತ್ಸೆಯಿಂದ ಖರ್ಗೆ ಅವರ ಹೃದಯ ಬಡಿತದ ಸಮಸ್ಯೆಯನ್ನು ಸರಿಪಡಿಸಲಾಗಿದೆ.
ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ. ದಿನೇಶ್, ಎಲೆಕ್ಟ್ರೋ ಫಿಸಿಯಾಲಜಿ ವಿಭಾಗದ ಡಾ. ಸತೀಶ್ ರೆಡ್ಡಿ ಮತ್ತು ಡಾ. ಚಡ್ಡಾ ನೇತೃತ್ವದ ತಂಡವು ಈ ಶಸ್ತ್ರಚಿಕಿತ್ಸೆಯನ್ನು ನಡೆಸಿತು.
ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆ ಅನಾರೋಗ್ಯ; ಆಸ್ಪತ್ರೆಯಲ್ಲಿ ನಡೆದಿದ್ದೇನೆಂದು ಹೇಳಿದ ಪುತ್ರ ಪ್ರಿಯಾಂಕ ಖರ್ಗೆ!
ಈ ವೇಳೆ ಖರ್ಗೆ ಅವರ ಪುತ್ರಿ ಉಪಸ್ಥಿತರಿದ್ದರು. ಸದ್ಯ ಖರ್ಗೆ ಅವರ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ವೈದ್ಯರ ಪ್ರಕಾರ, ಅವರು ನಾಳೆ ಅಥವಾ ನಾಡಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ. ಖರ್ಗೆ ಅವರ ಆರೋಗ್ಯದ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಶುಭ ಹಾರೈಸಿದ್ದಾರೆ.
