ಚಂಡಮಾರುತದಿಂದ ಕರ್ನಾಟಕದಲ್ಲಿ ಮುಂದಿನ 2 ದಿನ ಭಾರಿ ಮಳೆ, ನಾಲ್ಕು ಜಿಲ್ಲೆಗೆ ಯೆಲ್ಲೋ ಅಲರ್ಟ್, ಕರ್ನಾಟಕದ ಕರಾವಳಿ ಜಿಲ್ಲೆ ಸೇರಿದಂತೆ ಉತ್ತರದ ದಿಲ್ಲೆಗಳಲ್ಲಿ ಭಾರಿ ಮಳೆ ಸೂಚನೆ ನೀಡಲಾಗಿದೆ.
ಬೆಂಗಳೂರು (ಅ.28) ಮೋಂಥಾ'ಚಂಡಮಾರುತ ಮತ್ತು ವಾಯುಭಾರ ಕುಸಿತದ ಹಿನ್ನೆಲೆಯಲ್ಲೇ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ಪ್ರಮುಖವಾಗಿ ಆಂಧ್ರ ಪ್ರದೇಶದ ಕರಾವಳಿ ತೀರಕ್ಕೆ ಚಂಡಮಾರುತ ಅಪ್ಪಳಿಸುತ್ತಿದೆ. ಹೀಗಾಗಿ ಆಂಧ್ರ ಪ್ರದೇಶ, ಒಡಿಶಾ, ತಮಿಳುನಾಡು, ಕರ್ನಾಟಕ ಹಾಗೂ ಕೇರಳ ಭಾಗದಲ್ಲಿ ಮಳೆಯಾಗುತ್ತಿದೆ. ಇದೀಗ ಭಾರತೀಯ ಹವಾಮಾನ ಇಲಾಖೆ ಮಹತ್ವದ ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಲ್ಕು ಜಿಲ್ಲೆಗೆ ಯೆಲ್ಲೋ ಅಲರ್ಟ್
ಭಾರೀ ಮಳೆ ಮತ್ತು ಗಂಟೆಗೆ 30-40 ಕಿ.ಮೀ. ವೇಗದ ಗಾಳಿ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ . ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಮೋಂಥಾ'ಇಂದು ಉತ್ತರ-ವಾಯುವ್ಯದ ಕಡೆಗೆ ಗಂಟೆಗೆ 18 ಕಿ.ಮೀ. ವೇಗದಲ್ಲಿ ಚಲಿಸಲಿದೆ. ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆಯಾದರೆ, ಉತ್ತರ ಒಳನಾಡಿನ ಬಾಗಲಕೋಟೆ, ಕೊಪ್ಪಳ, ರಾಯಚೂರು, ಬೆಳಗಾವಿ ಮತ್ತು ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆ ನಿರೀಕ್ಷಿಸಲಾಗಿದೆ. ಈ ಪೈಕಿ ಬೀದರ್, ಯಾದಗಿರಿ, ವಿಜಯಪುರ ಗುಲ್ಬರ್ಗಾದಲ್ಲಿ ಇಂದು ಹಾಗೂ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆ ಸಾಧ್ಯತೆ ಇದೆ. ಕರಾವಳಿ ಕರ್ನಾಟಕದ ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಸೂಚಿಸಲಾಗಿದೆ.
ಮುಂದಿನ 48 ಗಂಟೆ ಕಾಲ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ
ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರದಲ್ಲಿ ಸ ಮೋಡ ಕವಿದ ವಾತಾವರಣ ಇರಲಿದೆ. ಇಷ್ಟೇ ಅಲ್ಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ 25°C ರಿಂದ 20°C ಇರಬಹುದು.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆಯಲ್ಲಿ ಆಂಧ್ರಪ್ರದೇಶದ ಹಲವು ರಾಜ್ಯಗಳು ಅಸ್ತವ್ಯಸ್ಥಗೊಂಡಿದೆ. ಭಾರಿ ಮಳೆಯಿಂದ ತತ್ತರಿಸಿ ಹೋಗಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು ಕಾರ್ಯಪ್ರವೃತ್ತವಾಗಿದೆ. ಚಂಡಮಾರುತ ಕಾಕಿನಾಡದಿಂದ 370 ಕಿ.ಮೀ ದೂರದಲ್ಲಿದೆ. ಪ್ರತಿ ಘಂಟೆಗೆ 110 ಕಿ.ಮೀ ವೇಗದಲ್ಲಿ ಚಂಡಮಾರುತ ಕಾಕಿನಾಡದ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಲಿದೆ. ಹೀಗಾಗಿ ಎರಡು ದಿನಗಳ ಕಾಲ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ವಿಜ್ಞಾನಿ ಸಿ ಎಸ್ ಪಾಟೀಲ್ ಹೇಳಿದ್ದಾರೆ.
