ರಾಜಧಾನಿಯಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕುರಿತು ಎರಡು ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಯಲಿದೆ. ಬಳಿಕ ಎಲ್ಲಿ ವಿಮಾನ ನಿಲ್ದಾಣ ಆಗುತ್ತದೆ ಹಾಗೂ ಅಲ್ಲೇ ಏಕೆ ಎಂಬುದನ್ನೂ ಬಹಿರಂಗ ಮಾಡುತ್ತೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಬೆಂಗಳೂರು (ಜ.20): ರಾಜಧಾನಿಯಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕುರಿತು ಎರಡು ದಿನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಯಲಿದೆ. ಬಳಿಕ ಎಲ್ಲಿ ವಿಮಾನ ನಿಲ್ದಾಣ ಆಗುತ್ತದೆ ಹಾಗೂ ಅಲ್ಲೇ ಏಕೆ ಎಂಬುದನ್ನೂ ಬಹಿರಂಗ ಮಾಡುತ್ತೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕುರಿತು ಈಗಾಗಲೇ ಹಲವು ಬಾರಿ ಸಭೆ ನಡೆಸಿದ್ದೇವೆ. ಸ್ಥಳಗಳ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ಎರಡು ದಿನದ ಬಳಿಕ ಮುಖ್ಯಮಂತ್ರಿಗಳ ಜತೆ ಮತ್ತೆ ಸಭೆ ಮಾಡಿ ಎಲ್ಲಾ ಮಾಹಿತಿ ತಿಳಿಸುತ್ತೇವೆ. ಎರಡನೇ ಏರ್ಪೋರ್ಟ್ ಎಲ್ಲಿ ನಿರ್ಮಾಣವಾಗುತ್ತದೆ, ಯಾಕೆ ಅಲ್ಲೇ ನಿರ್ಮಾಣವಾಗಬೇಕು ಎಂಬುದರ ಬಗ್ಗೆಯೂ ಮಾಹಿತಿ ನೀಡುತ್ತೇವೆ ಎಂದರು.
ಎಚ್ಡಿಕೆ ಹೇಳಿಕೆ ಸರಿಯಲ್ಲ: ಹೂಡಿಕೆ ಆಕರ್ಷಿಸಲು ರಾಜ್ಯ ಸರ್ಕಾರ ಅಸಹಕಾರ ತೋರುತ್ತಿದೆ ಎಂಬ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಬಳಿಕ ನಾನು ಉನ್ನತ ಅಧಿಕಾರಿಗಳೊಂದಿಗೆ ದೆಹಲಿಯಲ್ಲಿ ಭೇಟಿಯಾಗಿ ಸೆಮಿಕಂಡಕ್ಟರ್ ಸೇರಿ ಕೈಗಾರಿಕಾ ವಲಯದ ಹಲವು ಬೇಡಿಕೆಗಳನ್ನು ಅವರ ಗಮನಕ್ಕೆ ತಂದಿದ್ದೇನೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಭೇಟಿಯಾಗಿದ್ದೆ. ಹೀಗಾಗಿ ರಾಜ್ಯ ಸರ್ಕಾರ ಅಸಹಕಾರ ತೋರಿಸುತ್ತಿದೆ ಎನ್ನುವುದು ಸರಿಯಿಲ್ಲ ಎಂದು ಹೇಳಿದರು.
ಇನ್ನು ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಇವರನ್ನೆಲ್ಲ ಆಹ್ವಾನಿಸಲು ಸದ್ಯದಲ್ಲೇ ದೆಹಲಿಗೆ ಹೋಗುತ್ತಿದ್ದೇನೆ. ಆಗಲೂ ಇದನ್ನೆಲ್ಲ ದಾಖಲೆಗಳ ಸಮೇತ ಕುಮಾರಸ್ವಾಮಿಗೆ ನೆನಪಿಸಲಾಗುವುದು. ಕುಮಾರಸ್ವಾಮಿ ಕೂಡ ಈಗ ಕೇಂದ್ರದಲ್ಲಿ ಸಚಿವರಾಗಿದ್ದಾರೆ. ಅವರು ಕೂಡ ಒಂದು ಹೆಜ್ಜೆ ಮುಂದೆ ಬಂದು ನಮ್ಮ ಮುಖ್ಯಮಂತ್ರಿಗಳನ್ನು ಭೇಟಿ ಮಾಡಬೇಕು. ಇದರಲ್ಲಿ ವೈಯಕ್ತಿಕ ಪ್ರತಿಷ್ಠೆ ಬೇಡ ಎಂದರು.
ಗಿಗಾ ಫ್ಯಾಕ್ಟರಿ ಘಟಕದಲ್ಲಿ ಸ್ಥಳೀಯರಿಗೆ ಉದ್ಯೋಗವಕಾಶ: ಸಚಿವ ಎಂ.ಬಿ.ಪಾಟೀಲ್
ಯತ್ನಾಳ ಹೇಳಿಕೆ ಬಾಲಿಶ: ಕಾಂಗ್ರೆಸ್‌ನ 60 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಬಾಲಿಶ. 60 ಮಂದಿಯಲ್ಲ ಆರು ಮಂದಿ ಕೂಡ ಸೇರುವುದಿಲ್ಲ. ಬಿಜೆಪಿ, ಜೆಡಿಎಸ್ ಶಾಸಕರೇ 25 ಮಂದಿ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ವಿಜಯೇಂದ್ರ, ಯತ್ನಾಳ್, ರಮೇಶ್ ಜಾರಕಿಹೊಳಿ ಒಬ್ಬರಿಗೊಬ್ಬರು ಏಕವಚನದಲ್ಲಿ ಮಾತನಾಡುತ್ತಿದ್ದಾರೆ. ಮೊದಲು ಅವರು ತಮ್ಮ ಪಕ್ಷವನ್ನು ಸರಿಪಡಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.
