ರಾಜ್ಯದ ನಗರ ಪ್ರದೇಶಗಳಲ್ಲಿನ ಅಕ್ರಮ ಬಡಾವಣೆಗಳನ್ನು ತೆರವುಗೊಳಿಸದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಎಚ್ಚರಿಸಿದ್ದಾರೆ. ಬಡಾವಣೆ ನಿರ್ಮಾಣಕ್ಕೆ ವಿನ್ಯಾಸ ಅನುಮೋದನೆ ಕಡ್ಡಾಯವಾಗಿದ್ದು, ಖಾತೆ ಮಾಡದಂತೆ ನಿರ್ಬಂಧ ಹೇರಲಾಗಿದೆ.
ವಿಧಾನ ಪರಿಷತ್: ರಾಜ್ಯದ ನಗರ ಪ್ರದೇಶಗಳಲ್ಲಿ ನಿರ್ಮಾಣಗೊಂಡಿರುವ ಅಕ್ರಮ ಬಡಾವಣೆಗಳನ್ನು ತೆರವುಗೊಳಿಸಲು ವಿಫಲರಾಗುವ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದರು.
ಸೋಮವಾರ ಬಿಜೆಪಿ ಸದಸ್ಯ ಸಿ.ಎನ್.ಮಂಜೇಗೌಡ ಅವರು, ನಿಯಮ 330ರಡಿ ಅಕ್ರಮ ಬಡಾವಣೆಗಳ ಕುರಿತು ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅನಧಿಕೃತ ಬಡಾವಣೆಗಳ ಮಾಲೀಕರಿಗೆ ನೋಟಿಸ್ ನೀಡುವ ಅಧಿಕಾರವನ್ನು ಅಧಿಕಾರಿಗಳಿಗೆ ನೀಡಲಾಗಿದೆ. ಒಂದು ವೇಳೆ ಅಕ್ರಮ ಬಡಾವಣೆಗಳನ್ನು ತೆರವುಗೊಳಿಸದಿದ್ದರೆ ಅಂತಹ ಅಧಿಕಾರಿಗಳಿಗೆ 50 ಸಾವಿರ ರು.ಗಳವರೆಗೆ ದಂಡ ಮಾತ್ರವಲ್ಲ, ಅಮಾನತು ಮಾಡುವ ಇಲ್ಲವೇ ಕೆಲಸದಿಂದ ವಜಾ ಮಾಡುವ ಅಧಿಕಾರ ಸರ್ಕಾರಕ್ಕೆ ಇದೆ ಎಂದು ತಿಳಿಸಿದರು.
ನಗರ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಅಕ್ರಮ ಬಡಾವಣೆಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲಾಗುತ್ತದೆ. ಬಡಾವಣೆ ನಿರ್ಮಾಣ ಮಾಡುವವರು ವಿನ್ಯಾಸ ಅನುಮೋದನೆಯನ್ನು ಪಡೆಯದೆ ಬಡಾವಣೆ ನಿರ್ಮಾಣ ಮಾಡಿದರೆ ಅದು ಅಕ್ರಮವಾಗುತ್ತದೆ. ಇಂತಹ ಬಡಾವಣೆಗಳಲ್ಲಿನ ನಿವೇಶನಗಳಿಗೆ ಖಾತೆ ಮಾಡದಂತೆ ನಿರ್ಬಂಧ ಹೇರಲಾಗಿದೆ. ಅಲ್ಲದೇ, ಅಂತಹ ಬಡಾವಣೆಗಳ ನಿವೇಶನಗಳಿಗೆ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡುವುದಿಲ್ಲ ಎಂದರು.
ನಗರ ಪ್ರದೇಶಗಳಲ್ಲಿ ಬಡವರಿಗೆ ನಿವೇಶನ ನೀಡುವ ಕುರಿತು ಯೋಜನೆ ರೂಪಿಸಲಾಗುತ್ತಿದೆ. ಭೂಮಾಲೀಕರಿಗೆ ಶೇ.50 ಮತ್ತು ನಿವೇಶನಗಳಿಗೆ ಶೇ.50 ರಷ್ಟು ಪ್ರದೇಶವನ್ನು ಮೀಸಲಿಟ್ಟು ನಿವೇಶನಗಳನ್ನು ಹಂಚಿಕೆ ಮಾಡಲಾಗುತ್ತದೆ. ಬೆಂಗಳೂರು ಮಾದರಿಯಲ್ಲಿ ಆಸ್ತಿಗಳಿಗೆ ಇ-ಖಾತೆಯನ್ನು ನೀಡುವ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಸಂಬಂಧ ಕಾನೂನು ಇಲಾಖೆಯೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದ್ದು, ಅಭಿಪ್ರಾಯ ಪಡೆದ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
