'ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವ್ಯವಸ್ಥೆ'
* ಬ್ಲ್ಯಾಕ್ ಫಂಗಸ್ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ
* ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆ ನೀಡಲು ಆಸ್ಪತ್ರೆ ವ್ಯವಸ್ಥೆ
* ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಆರಂಭಿಸುವ ಬಗ್ಗೆ ಸುಧಾಕರ್ ಮಾಹಿತಿ
ಬೆಂಗಳೂರು, (ಮೇ.16): ಕೊರೋನಾ ವೈರಸ್ ಆತಂಕದ ಮಧ್ಯೆ ರಾಜ್ಯದ ಜನರಲ್ಲಿ ಬ್ಲ್ಯಾಕ್ ಫಂಗಸ್ ಭೀತಿ ಶುರುವಾಗಿದ್ದು, ಈಗಾಗಲೇ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
ಇನ್ನು ಈ ಬಗ್ಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಇಂದು (ಭಾನುವಾರ) ಪ್ರತಿಕ್ರಿಯಿಸಿದ್ದು, ಬ್ಲ್ಯಾಕ್ ಫಂಗಸ್‌ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಹೇಳಿದರು.
ಇದೇ ನೋಡಿ ಅಪಾಯಕಾರಿ ಬ್ಲ್ಯಾಕ್ ಫಂಗಸ್ ಲಕ್ಷಣಗಳು! ನಿರ್ಲಕ್ಷ್ಯ ಬೇಡ
ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಹಾಗೂ ಸ್ಟೀರಾಯಿಡ್ ಅಧಿಕವಾಗಿ ಬಳಸಿರುವವರಿಗೆ ಹಾಗೂ ಮಧುಮೇಹ ಹೆಚ್ಚಿರುವವರಿಗೆ ಕೋವಿಡ್ ಬಂದಾಗ ಬ್ಲ್ಯಾಕ್ ಫಂಗಸ್ ಬರುವ ಸಾಧ್ಯತೆ ಇದೆ. ಮೂಗಿನಿಂದ ಆರಂಭವಾಗುವ ಈ ರೋಗ ಕಣ್ಣಿಗೆ ಹಾನಿ ಮಾಡುತ್ತದೆ. ದೃಷ್ಟಿ ಕೂಡ ಕಳೆದುಕೊಳ್ಳುವ ಅಪಾಯವಿರುತ್ತದೆ. ಸರಿಯಾದ ಚಿಕಿತ್ಸೆ ನೀಡದಿದ್ದರೆ ಸಾವು ಕೂಡ ಬರಬಹುದು ಎಂದರು.
ಮಹಾರಾಷ್ಟ್ರದಲ್ಲಿ ಕಾಣಿಸಿಕೊಂಡಾಗಲೇ ಇಲ್ಲಿನ ನೇತ್ರ ತಜ್ಞರೊಂದಿಗೆ ಸಮಾಲೋಚನೆ ಮಾಡಲಾಗಿದೆ. ನಾಳೆಯಿಂದಲೇ (ಸೋಮವಾರ) ಬೌರಿಂಗ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲು ಪ್ರಾಯೋಗಿಕವಾಗಿ ಆರಂಭಿಸಲಾಗುತ್ತಿದೆ. ನಂತರ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು.
ನೇತ್ರ ತಜ್ಞರು ಸೇರಿದಂತೆ ಮೂರ್ನಾಲ್ಕು ತಜ್ಞರನ್ನೊಳಗೊಂಡ ಸಮಿತಿ ರಚಿಸಲಾಗುತ್ತಿದೆ. ಇದಕ್ಕೆ ಯಾವ ಬಗೆಯ ಚಿಕಿತ್ಸೆ ನೀಡಬೇಕೆಂದು ಈ ಸಮಿತಿ ಸಲಹೆ ನೀಡಲಿದೆ. ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಸತತ 7 ವಾರಗಳ ಕಾಲ ನೀಡಬೇಕಿದ್ದು, 2-3 ಲಕ್ಷ ರೂ. ಖರ್ಚಾಗುತ್ತದೆ. ಇದನ್ನು ಉಚಿತವಾಗಿ ನೀಡಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದರು.
ಯಾರಿಗೇ ಈ ಸಮಸ್ಯೆ ಇದ್ದರೂ ತಕ್ಷಣ ವೈದ್ಯರ ಬಳಿ ಹೋಗಿ ಪರೀಕ್ಷೆ ಮಾಡಿಸಬೇಕು. ಇದಕ್ಕೆ ಬೇಕಿರುವ ಆಂಪೊಟೆರಿಸಿನ್ ಔಷಧಿಯನ್ನು ಕೇಂದ್ರ ಸರ್ಕಾರ ನೀಡಲಿದ್ದು, 20 ಸಾವಿರ ಡೋಸ್ ಗೆ ಮನವಿ ಮಾಡಲಾಗಿದೆ. ಯಾರೂ ವೈದ್ಯರ ಬಳಿ ಸಲಹೆ ಪಡೆಯದೆ ಸ್ಟೀರಾಯಿಡ್ ಮೊದಲಾದ ಔಷಧಿ ಪಡೆಯಬಾರದು. ವೈದ್ಯರು ಕೂಡ ಜನರಿಗೆ ರೋಗ ನಿರೋಧಕ ಹೆಚ್ಚಿಸುವ ಔಷಧಿಯನ್ನು ಅನಗತ್ಯವಾಗಿ ನೀಡಬಾರದು ಎಂದರು.