ಶುಭಸುದ್ದಿ: ಮುಂದಿನ 3 ದಿನಗಳಲ್ಲಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಂಭವ!
ಮುಂದಿನ 3 ದಿನಗಳಲ್ಲಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು (ಮಾ.18): ಮುಂದಿನ 3 ದಿನಗಳಲ್ಲಿ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು , ಹಾಸನ, ಕೊಡಗು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ. ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ.
ಹಲವೆಡೆ ಮಳೆ ಸಂಭವ: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಒಂದು ವಾರದಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲಿನ ತಾಪ ಹೆಚ್ಚಾಗಿ ರಾಜ್ಯದಲ್ಲಿ ಜನ-ಜಾನುವಾರುಗಳು ತತ್ತರಿಸಿ ಹೋಗುತ್ತಿವೆ. ಕುಡಿಯುವ ನೀರಿಗೆ ಹಾಹಾಕಾರ ಕಾಣಿಸಿಕೊಂಡಿರುವ ಸಂದರ್ಭದಲ್ಲಿ ಮಳೆ ಬೀಳುವ ಮುನ್ಸೂಚನೆಯನ್ನು ಇಲಾಖೆ ನೀಡಿದೆ. ಒಡಿಶಾ ಸೇರಿದಂತೆ ಉತ್ತರ ಭಾರತದ ವಿವಿಧ ಭಾಗದಲ್ಲಿ ಮಳೆಯಾಗುತ್ತಿದೆ. ಇದರ ಪರಿಣಾಮದಿಂದ ಮುಂದಿನ 24 ಗಂಟೆಯಲ್ಲಿ ಬೀದರ್, ಧಾರವಾಡ, ಕಲಬುರಗಿ, ವಿಜಯಪುರ ಸೇರಿದಂತೆ ವಿವಿಧ ಭಾಗದಲ್ಲಿ ಮಳೆಯಾಗಲಿದೆ.
ಮಾ.20 ರಿಂದ 24 ವರೆಗೆ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏಪ್ರಿಲ್‌ನಲ್ಲಿಯೂ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಮೇ ಅಂತ್ಯದ ವೇಳೆಗೆ ಎಲ್‌ನಿನೋ ಪ್ರಭಾವ ಕಡಿಮೆಯಾಗಲಿದ್ದು, ಮುಂಬರುವ ಮುಂಗಾರು ಅವಧಿಯಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಪ್ರಸಾದ್ ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದ್ದಾರೆ.
ಒಬಿಸಿ ವೋಟ್‌ಬ್ಯಾಂಕ್ ಮಾಡಿಕೊಳ್ಳುವ ಕಾಂಗ್ರೆಸ್ ಹುನ್ನಾರ ಫಲಿಸುವುದಿಲ್ಲ: ಮಾಜಿ ಸಿಎಂ ಬೊಮ್ಮಾಯಿ
2-3 ಡಿಗ್ರಿ ಗರಿಷ್ಠ ಉಷ್ಣಾಂಶ ಹೆಚ್ಚಳ: ಬಾಗಲಕೋಟೆ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು ಜಿಲ್ಲೆಗಳಲ್ಲಿ ವಾಡಿಕೆ ಪ್ರಮಾಣಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಶಿಯಸ್ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಳವಾಗಲಿದೆ. ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಪ್ಪಳದಲ್ಲಿ ಅತಿ ಹೆಚ್ಚು 39.5 ಡಿಗ್ರಿ ಸೆಲ್ಶಿಯಸ್ ಗರಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 19 ಡಿಗ್ರಿ ಸೆಲ್ಶಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.