ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್‌ಗೆ ಇಡಿ ನೋಟಿಸ್‌ ವಿಚಾರದಲ್ಲಿ ಹೈಕೋರ್ಟ್ 10 ದಿನಗಳ ತಾತ್ಕಾಲಿಕ ರಿಲೀಫ್ ನೀಡಿದೆ. ಫೆ.20ಕ್ಕೆ ವಿಚಾರಣೆ ಮುಂದೂಡಲಾಗಿದೆ. ಮುಡಾದಿಂದ ಸಿಎಂ ಪತ್ನಿಗೆ 14 ಸೈಟ್ ಹಂಚಿಕೆ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿತ್ತು. ಇಡಿ ತನಿಖೆಯ ತರಾತುರಿ ಪ್ರಶ್ನಿಸಿದ್ದ ಕೋರ್ಟ್, ವಿಚಾರಣೆಗೆ ತಡೆ ನೀಡಿತ್ತು.

ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಪ್ರಕರಣದಲ್ಲಿ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರಿಗೆ ಜಾರಿ ನಿರ್ದೇಶನಾಲಯ(ಇ.ಡಿ.) ನೀಡಿದ ನೋಟಿಸ್‌ ಗೆ ಸಂಬಂಧಿಸಿದಂತೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿ ಮುಂದಿನ ವಿಚಾರಣೆಯನ್ನು ಫೆಬ್ರವರಿ 20ಕ್ಕೆ ಮುಂದೂಡಿದೆ. 

ಹೈಕೋರ್ಟ್ ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ವಾದ ಪ್ರತಿವಾದ ಆಲಿಸಿದ ನ್ಯಾ.ಎಂ.ನಾಗಪ್ರಸನ್ನ ಮಧ್ಯಂತರ ಆದೇಶ ಮುಂದಿನ ವಿಚಾರಣೆವರೆಗೂ ಮುಂದುವರಿಸಿ ಮತ್ತೆ 10ದಿನಗಳ ಕಾಲ ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್ ರಿಲೀಫ್ ನೀಡಿದ್ದಾರೆ.

ಮುಡಾ ಹಗರಣ: ಸಿಎಂಗೆ ಶುಭ ಶುಕ್ರವಾರ, ಸ್ನೇಹಮಯಿ ಕೃಷ್ಣಗೆ ತಟ್ಟಿತಾ ವಾಮಾಚಾರ?

ಮುಡಾದಿಂದ ಸಿಎಂ ಸಿದ್ದರಾಮಯ್ಯ ಪತ್ನಿಗೆ 14 ಸೈಟ್ ಹಂಚಿಕೆ ಪ್ರಕರಣದಲ್ಲಿ ಇಡಿ ನೀಡಿದ ಸಮನ್ಸ್ ಪ್ರಶ್ನಿಸಿ ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶ್ ಹೈಕೋರ್ಟ್‌ ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ತರಾತುರಿಯಲ್ಲಿ ತನಿಖೆ ಏಕೆ ಎಂದು ಪ್ರಶ್ನಿಸಿತ್ತು. ಜೊತೆಗೆ ಇಬ್ಬರಿಗೂ ಇಡಿ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿತ್ತು. 

Breaking: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ಧರಾಮಯ್ಯಗೆ ಬಿಗ್‌ ರಿಲೀಫ್‌

ಪ್ರಕರಣದ ಹಿನ್ನೆಲೆ:
ಮೈಸೂರಿನ ದೇವನೂರು 3ನೇ ಹಂತದ ಬಡಾವಣೆ ಅಭಿವೃದ್ಧಿಗೆ ಮುಡಾ ವಶಪಡಿಸಿಕೊಂಡಿದೆ ಎನ್ನಲಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಿ ಅವರಿಗೆ ಸೇರಿದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್‌ 464ರ 3 ಎಕರೆ 16 ಗುಂಟೆ ಜಮೀನಿನ ಬದಲಿಗೆ ಸುಮಾರು 56 ಕೋಟಿ ಮೌಲ್ಯದ 14 ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ. ಇದರಲ್ಲಿ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಈ ಸಂಬಂಧ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸೇರಿ ಮೂವರು ಸಾಮಾಜಿಕ ಕಾರ್ಯಕರ್ತರು 2024ರ ಜೂನ್‌-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.

ಈ ಸಂಬಂಧ ಪ್ರಕರಣದ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಆ.17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಆ.19ರಂದು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್‌ ಸೆ.24ರಂದು ತಿರಸ್ಕರಿಸಿತ್ತು.

ಈ ಆದೇಶ ಹೊರಬಿದ್ದ ಬೆನ್ನಲ್ಲೇ ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಎಫ್‌ಐಆರ್‌ ದಾಖಲಾದ ದಿನವೇ ಅಂದರೆ ಸೆ.27ರಂದು ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ಸಿಬಿಐ ತನಿಖೆ ಬೇಕಾಗಿಲ್ಲ ಲೋಕಾಯುಕ್ತವೇ ನಡೆಸಲಿ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.