ನಾನ್ಯಾಕೆ ರಾಜೀನಾಮೆ ಕೊಡಲಿ, ರಾಜೀನಾಮೆಯ ಮಾತೇ ಇಲ್ಲ: ಸಿಎಂ ಸಿದ್ದರಾಮಯ್ಯ!

ಸಿಎಂ ಸಿದ್ದರಾಮಯ್ಯ ಅವರು ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದ್ದಾರೆ ಮತ್ತು ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ನ್ಯಾಯಾಲಯದ ಆದೇಶದ ಬಗ್ಗೆ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಅವರು ಹೇಳಿದ್ದಾರೆ.

Muda Scam Siddaramaiah will not resign to Chief Minister post sat

ಬೆಂಗಳೂರು (ಸೆ.24):  ನಾನು ತಪ್ಪು ಮಾಡಿಲ್ಲ. ಈಗಲೂ ನಾನು ಹೇಳ್ತೇನೆ ನಾನ್ಯಾವ ತಪ್ಪೂ ಮಾಡಿಲ್ಲ. ನಾನ್ಯಾಕೆ ರಾಜೀನಾಮೆ ಕೊಡಲಿ. ನಾನು ರಾಜೀನಾಮೆಯನ್ನು ಕೊಡುವುದಿಲ್ಲ. ಅವರು ಬೇಕಾದರೆ ಹೋರಾಟ ಮಾಡಿಕೊಳ್ಳಲಿ. ನನಗೆ ನೈತಿಕತೆ ಬಗ್ಗೆ ಪ್ರಶ್ನೆ ಮಾಡ್ತಾರಲ್ವಾ, ಅವರಿಗೆ ನೈತಿಕತೆ ಅನ್ವಯ ಆಗಲ್ವಾ.? ವಿಪಕ್ಷ ಹೋರಾಟ ಮಾಡಲಿ. ಕುಮಾರಸ್ವಾಮಿ ಬೇಲ್ ಮೇಲೆ ಇದ್ದಾರೆ. ಅವರಿಗೆ ನೈತಿಕತೆ ಇಲ್ವಾ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಮಾಧ್ಯಮಗಳೊಂದಿಗೆ ಮುಡಾ ಪ್ರಕರಣ ಸಂಬಂಧ ಉಚ್ಛ ನ್ಯಾಯಾಲಯವು ನೀಡಿರುವ ಆದೇಶದ ಕುರಿತು ಮಾತನಾಡಿದ ಅವರು, ನಮ್ಮ ಸರ್ಕಾರವನ್ನು ಅಭದ್ರಗೊಳಿಸಲು ಹಾಗೂ ನನ್ನ ರಾಜಕೀಯ ಜೀವನಕ್ಕೆ ಮಸಿ ಬಳಿಯಲು ಬಿಜೆಪಿ, ಜೆಡಿಎಸ್ ನಡೆಸುತ್ತಿರುವ ಪ್ರಯತ್ನಕ್ಕೆ ಭವಿಷ್ಯದಲ್ಲಿ ಸೋಲು ಖಚಿತ. ಬಿಜೆಪಿ - ಜೆಡಿಎಸ್ ನಾಯಕರ ಸಂಚು, ರಾಜಭವನ ದುರುಪಯೋಗ ಹಾಗೂ ದುರ್ಬಳಕೆಗೆ  ನಾನು ಹೆದರುವುದಿಲ್ಲ. ರಾಜ್ಯದ ಜನ, ಪಕ್ಷದ ಹೈಕಮಾಂಡ್, ಶಾಸಕರು, ಸಚಿವರು, ಕಾರ್ಯಕರ್ತರು ನನ್ನೊಂದಿಗಿದ್ದಾರೆ. ಕಾನೂನು ಹೋರಾಟಕ್ಕೆ ಹೈಕಮಾಂಡ್ ಸಹಕಾರ ನೀಡಲಿದೆ. ನರೆಂದ್ರ ಮೋದಿಯವರ ಬಿಜೆಪಿ ಸರ್ಕಾರ ಕೇವಲ ನನ್ನ ಮೇಲಷ್ಟೇ ಅಲ್ಲ, ಇಡೀ ದೇಶದ ವಿರೋಧಪಕ್ಷಗಳ ಮೇಲೆ ಸೇಡಿನ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.

Breaking: ಮುಡಾ ಕೇಸಲ್ಲಿ ಸಿಎಂ ಸಿದ್ದರಾಮಯ್ಯಗೆ ಶಾಕ್; ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್!

ಬಿಜೆಪಿ ಹಾಗೂ ಜೆಡಿಎಸ್ ನವರು ಒಮ್ಮೆಯೂ ರಾಜ್ಯದಲ್ಲಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬಂದಿಲ್ಲ. ವಿಧಾನಸಭೆ ಚುನಾವಣೆಯಲ್ಲಿಯೂ ಸೋತಿದ್ದಾರೆ. ಬಿಜೆಪಿಯವರು ಈ ಹಿಂದೆ ಹಣಬಲದಿಂದ, ಆಪರೇಷನ್ ಕಮಲ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೇ ಹೊರತು, ಜನರ ಆಶೀರ್ವಾದದೊಂದಿಗೆ ಎಂದಿಗೂ ಬಂದಿಲ್ಲ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 136 ಸ್ಥಾನ ಗೆದ್ದಿದ್ದೇವೆ ಹಾಗಾಗಿ ಆಪರೇಷನ್ ಕಮಲ ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ದುಡ್ಡನ್ನು ಕೊಟ್ಟು ಶಾಸಕರನ್ನು ಖರೀದಿಸುವ ಪ್ರಯತ್ನ ಮಾಡಿದ್ದರು, ಆದರೆ ನಮ್ಮ ಯಾವ ಶಾಸಕರೂ ದುಡ್ಡಿನ ಹಿಂದೆ ಹೋಗದ ಕಾರಣ ಅವರ ಪ್ರಯತ್ನ ವಿಫಲವಾಯಿತು ಎಂದು ತಿಳಿಸಿದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ ತನಿಖೆಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಈ ತೀರ್ಪಿನ ಮೇಲೆ ಮುಂದಿನ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ, ತೀರ್ಮಾನ ಮಾಡಲಾಗುವುದು. ನಾನು ತಪ್ಪು ಮಾಡಿಲ್ಲ. 17ಎ ರಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಇಡೀ ದೇಶದಲ್ಲಿ ವಿಪಕ್ಷಗಳ ಸರ್ಕಾರದ ಮೇಲೆ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ನಮ್ಮ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ ಎಂದರು.

ಮುಂದಿನ ದಿನಗಳಲ್ಲಿ ಖಂಡಿತಾ ನನಗೆ ಜಯ ಸಿಗಲಿದೆ. ಬಿಜೆಪಿಯವರನ್ನು ನಾವು ರಾಜಕೀಯವಾಗಿ ಎದುರಿಸುತ್ತೇವೆ. ಬಿಜೆಪಿ ಅವರು ಹೇಳಿದ ಮಾತ್ರಕ್ಕೆ ನಾನು ರಾಜೀನಾಮೆ ಏಕೆ ಕೊಡಬೇಕು? ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು, ಅವರು ಜಾಮೀನಿನ ಮೇಲೆ ಇದ್ದಾರೆ. ಅವರು ರಾಜೀನಾಮೆ ಕೊಟ್ಟಿದ್ದಾರೆಯೇ? ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿ ವಾದಕ್ಕೆ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಏನೆಂದು ಕೇಳಿ ತಿಳಿಯಿರಿ. ನನ್ನ ಪ್ರಕರಣದಲ್ಲಿಯೂ ಬಿಜೆಪಿ ಮತ್ತು ಜೆಡಿಎಸ್ ಇದೇ ರೀತಿ ಮುಖಭಂಗ ಅನುಭವಿಸುವುದು ಖಂಡಿತ. ಸತ್ಯಮೇವ ಜಯತೇ ಎಂದು ಹೇಳಿದರು.

Latest Videos
Follow Us:
Download App:
  • android
  • ios