ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧದ ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ತನಿಖಾಧಿಕಾರಿ ಬದಲಾವಣೆಗೆ ಕೋರಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದೇ ವೇಳೆ, ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್‌ ಕುರಿತು ಸಮಗ್ರ ವರದಿ ಸಲ್ಲಿಸಿದ ನಂತರವೇ ಅಂತಿಮ ಆದೇಶ ಎಂದ ಕೋರ್ಟ್.

ಬೆಂಗಳೂರು (ಅ.10): ಸಿಎಂ ಸಿದ್ದರಾಮಯ್ಯ, ಅವರ ಕುಟುಂಬದವರ ವಿರುದ್ಧದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನ ಹಂಚಿಕೆ ಹಗರಣ ಸಂಬಂಧ ಲೋಕಾಯುಕ್ತ ತನಿಖಾಧಿಕಾರಿ ಬದಲಾವಣೆ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದೇ ವೇಳೆ ಬಿ ರಿಪೋರ್ಟ್‌ ಸಲ್ಲಿಕೆ ಕುರಿತು ಸಮಗ್ರ ವರದಿ ಸಲ್ಲಿಸಿದ ಬಳಿಕ ಅಂತಿಮ ಆದೇಶ ನೀಡುವುದಾಗಿಯೂ ನ್ಯಾಯಾಲಯ ತಿಳಿಸಿದೆ.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದ ನ್ಯಾಯಾಲಯ ತನಿಖಾಧಿಕಾರಿ ಬದಲಾವಣೆಗೆ ಸೂಕ್ತ ಕಾರಣ ಇಲ್ಲ ಎಂದು ಅಭಿಪ್ರಾಯಪಟ್ಟು ಗುರುವಾರ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಈ ಪ್ರಕರಣ ಕುರಿತು ಲೋಕಾಯುಕ್ತ ಸಲ್ಲಿಸಿರುವ ಬಿ ರಿಪೋರ್ಟ್‌ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮತ್ತೊಂದು ಅರ್ಜಿ ಕುರಿತು ಗುರುವಾರ ವಿಚಾರಣೆ ನಡೆಸಿದ ನ್ಯಾಯಾಲಯ ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಸಮಗ್ರ ವರದಿ ಸಲ್ಲಿಸುವಂತೆ ಲೋಕಾಯುಕ್ತ ತನಿಖಾಧಿಕಾರಿಗೆ ಸೂಚಿಸಿತು. ಸಮಗ್ರ ವರದಿ ಸಲ್ಲಿಕೆ ಬಳಿಕ ಬಿ ರಿಪೋರ್ಟ್ ಕುರಿತು ಅಂತಿಮ ಆದೇಶ ನೀಡುವುದಾಗಿ ಮುಂದಿನ ವಿಚಾರಣೆಯನ್ನು ನ.15ಕ್ಕೆ ಮುಂದೂಡಿತು.

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಮುಡಾದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಕುಟುಂಬ ಅಕ್ರಮವಾಗಿ 14 ನಿವೇಶನ ಪಡೆದಿದೆ. ಈ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ ಸಲ್ಲಿಸಿರುವ ಬಿ ರಿಪೋರ್ಟ್‌ ತಿರಸ್ಕರಿಸಬೇಕು. ಪ್ರಕರಣದ ತನಿಖಾಧಿಕಾರಿಯಾಗಿರುವ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್‌ ಆರೋಪಿಗಳ ರಕ್ಷಣೆಗೆ ಮುಂದಾಗಿದ್ದಾರೆ. ಸರಿಯಾದ ತನಿಖೆ ಮಾಡದೆ ನ್ಯಾಯಾಲಯಕ್ಕೆ ಸುಳ್ಳು ವರದಿ ಸಲ್ಲಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಕರಣದ ತನಿಖಾಧಿಕಾರಿ ಬದಲಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

- ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ

- ಬಿ ರಿಪೋರ್ಟ್‌ ಕುರಿತ ಅಂತಿಮ ಆದೇಶ ಸದ್ಯಕ್ಕಿಲ್ಲ

- ಸಮಗ್ರ ವರದಿ ಬಳಿಕ ಈ ಕುರಿತು ಆದೇಶ: ಕೋರ್ಟ್‌