ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ 'ನನ್ನ ಶಾಲೆ ನನ್ನ ಜವಾಬ್ದಾರಿ' ಕಾರ್ಯಕ್ರಮ: ಸಚಿವ ಮಧು ಬಂಗಾರಪ್ಪ
ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ನನ್ನ ಶಾಲೆ-ನನ್ನ ಜವಾಬ್ದಾರಿ ಎಂಬ ಕಾರ್ಯಕ್ರಮ ರೂಪಿಸಿ, ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ದಾನಿಗಳು, ಪೋಷಕರ ನೆರವು ಪಡೆದು, ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಶಾಲಾ ಶಿಕ್ಷಣ ಸಚಿವ ಮಧು ಎಸ್.ಬಂಗಾರಪ್ಪ ಹೇಳಿದರು.
ಚಿತ್ರದುರ್ಗ (ಜ.26): ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ನನ್ನ ಶಾಲೆ-ನನ್ನ ಜವಾಬ್ದಾರಿ ಎಂಬ ಕಾರ್ಯಕ್ರಮ ರೂಪಿಸಿ, ಹಳೆಯ ವಿದ್ಯಾರ್ಥಿಗಳು, ಶಿಕ್ಷಕರು, ದಾನಿಗಳು, ಪೋಷಕರ ನೆರವು ಪಡೆದು, ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡುವರು ಎಂದು ಶಾಲಾ ಶಿಕ್ಷಣ ಸಚಿವ ಮಧು ಎಸ್.ಬಂಗಾರಪ್ಪ ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಹಳಷ್ಟು ಸರ್ಕಾರಿ ಶಾಲೆಗಳು ದಾನಿಗಳ ಕೊಡುಗೆಯಾಗಿವೆ. ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದವರು ಉನ್ನತ ಸ್ಥಾನ ಅಲಂಕರಿಸಿದ್ದಾರೆ.
ರಾಜ್ಯದ ಹಲವು ಕಡೆಗಳಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘದವರು ಸರ್ಕಾರದ ಯಾವುದೇ ಅನುದಾನ ಬಳಸದೇ ಉತ್ತಮ ಗುಣಮಟ್ಟದ ಶಾಲೆಗಳನ್ನು ನಿರ್ಮಿಸಿದ್ದಾರೆ. ಹಾಗಾಗಿ ಹಳೆಯ ವಿದ್ಯಾರ್ಥಿಗಳ ಸಂಘ ಹಾಗೂ ಶಿಕ್ಷಕರು ನನ್ನ ಶಾಲೆ ನನ್ನ ಜವಾಬ್ದಾರಿ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದು ಸಚಿವರು ತಿಳಿಸಿದರು. ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಕಳೆದ ವರ್ಷ ಚಿತ್ರದುರ್ಗ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನಗಳಿಸಿದ್ದು, ಯಶಸ್ವಿಗೆ ಅನುಸರಿಸಿದ ಕಾರ್ಯಕ್ರಮಗಳು, ವಿಷಯವಾರು ಕಾರ್ಯಗಾರಗಳು, ಯೋಜನಾಬದ್ಧ ವ್ಯವಸ್ಥೆಯನ್ನು ಇತರೆ ಜಿಲ್ಲೆಗಳೂ ಕೂಡ ಅನುಸರಿಸಬೇಕು. ಇಡೀ ರಾಜ್ಯಕ್ಕೂ ಕೂಡ ಅಳವಡಿಸಬಹುದಾಗಿದೆ. ಚಿತ್ರದುರ್ಗದ ಯಶಸ್ವಿ ಕಾರ್ಯಕ್ರಮ ಇತರೆ ಜಿಲ್ಲೆಗಳು ಅನುಸರಿಸಲಿ ಎಂದರು.
ಸಂಸದ ಡಾ.ಉಮೇಶ್ ಜಾಧವ್‌ಗೆ ಪ್ರೋಟೋಕಾಲ್ ಗೊತ್ತಿದೆಯಾ: ಸಚಿವ ಪ್ರಿಯಾಂಕ್ ಖರ್ಗೆ
ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕಡ್ಡಾಯವಾಗಿ ಮುಖ್ಯವಾಹಿನಿಗೆ ತರಬೇಕು. ಪ್ರತಿಯೊಂದು ಮಗುವಿನ ಸಂಪೂರ್ಣ ವಿವರ ತಯಾರಿಸಬೇಕು. ಈ ಕುರಿತು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹೆಚ್ಚಿನ ಜವಾಬ್ದಾರಿ ವಹಿಸಬೇಕು. ಇದರ ಜೊತೆಗೆ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಿಆರ್‍ಸಿ, ಸಿಆರ್‍ಪಿ ಹಾಗೂ ಮುಖ್ಯ ಶಿಕ್ಷಕರು, ಸಹ ಶಿಕ್ಷಕರ ಸಹಕಾರ ಪಡೆದು ಶಾಲೆಯಿಂದ ಹೊರಗುಳಿದ ಮಕ್ಕಳನ್ನು, ಪೋಷಕರ ಮನವೊಲಿಸಿ ಶಾಲೆಗೆ ಕರೆತರಬೇಕು. ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರವು ಸಮವಸ್ತ್ರ, ಶೂ, ಬಿಸಿಯೂಟ, ಹಾಲು, ಮೊಟ್ಟೆ, ಬಾಳೆಹಣ್ಣು, ಉಚಿತ ವಿದ್ಯುತ್ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಿದೆ. ಹಾಗಾಗಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತಂದು ಶಿಕ್ಷಣ ನೀಡಬೇಕು ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ್ ರೆಡ್ಡಿ ಮಾತನಾಡಿ, 2023-24ನೇ ಸಾಲಿನಲ್ಲಿ ಶಾಲೆಯಿಂದ ಹೊರಗುಳಿದ 429 ಮಕ್ಕಳಲ್ಲಿ ಈಗಾಗಲೇ 381 ಮಕ್ಕಳನ್ನು ಮುಖ್ಯವಾಹಿನಿಗೆ ತರಲಾಗಿದೆ. 48 ಮಕ್ಕಳು ಶಾಲೆಯಿಂದ ಹೊರಗುಳಿದ್ದು, ಈ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಕ್ರಮವಹಿಸಲಾಗುತ್ತಿದೆ ಎಂದರು. 1017 ಶಿಕ್ಷಕರ ಹುದ್ದೆ ಖಾಲಿ: ಜಿಲ್ಲೆಯಲ್ಲಿ ಪ್ರಾಥಮಿಕ 6,275 ಹಾಗೂ ಪ್ರೌಢಶಾಲಾ 1,215 ಸರ್ಕಾರಿ ಶಿಕ್ಷಕರ ಹುದ್ದೆ ಮಂಜೂರಾಗಿದ್ದು, 5,258 ಪ್ರಾಥಮಿಕ ಹಾಗೂ 1,029 ಪ್ರೌಢಶಾಲಾ ಶಿಕ್ಷಕರು ಕಾರ್ಯನಿರ್ವಹಿಸುತ್ತಿದ್ದಾರೆ. 1,017 ಪ್ರಾಥಮಿಕ ಹಾಗೂ 186 ಪ್ರೌಢ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳಿಗೆ ಅನುಗುಣವಾಗಿ ಅತಿಥಿ ಶಿಕ್ಷಕರನ್ನು ನಿಯೋಜನೆ ಮಾಡಿ, ಪಾಠ ಪ್ರವಚನಗಳನ್ನು ನಡೆಸಲಾಗುತ್ತಿದೆ. 263 ಹೊಸ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಯಾಗಿದ್ದು, ಈಗಾಗಲೇ ನೇಮಕಾತಿ ಆದೇಶ ನೀಡಲಾಗಿದೆ. 11 ಶಿಕ್ಷಕರಿಗೆ ಮಾತ್ರ ನೇಮಕಾತಿ ಆದೇಶ ಬಾಕಿ ಇದೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಯಾವುದೇ ಶಿಕ್ಷಕರ ಕೊರತೆ ಇಲ್ಲ ಎಂದರು.
ಚಳ್ಳಕೆರೆ ತಾಕು ಅಭಿಷೇಕ್ ನಗರ ಹಾಗೂ ಹಿರಿಯೂರು ತಾಕು ಕೆರೆಮುಂದಲಹಟ್ಟಿಯಲ್ಲಿ ಕಿರಿಯ ಪ್ರಾಥಮಿಕ ಶಾಲೆಗಳ ಬೇಡಿಕೆ ಇದೆ. ಮೊಳಕಾಲ್ಮುರು ತಾಲೂಕಿನಲ್ಲಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದು, ಈ ಶಾಲೆಗಳನ್ನು ಪ್ರೌಢಶಾಲೆಗಳಾಗಿ ಉನ್ನತೀಕರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. 2024-25ನೇ ಸಾಲಿಗೆ ಜಿಲ್ಲೆಯಲ್ಲಿ ಹೊಸದಾಗಿ 23 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. 2022-23 ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ 21,995 ವಿದ್ಯಾರ್ಥಿಗಳು ಹಾಜರಾಗಿದ್ದು, ಇದರಲ್ಲಿ 21,300 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ. 96.8 ರಷ್ಟು ಫಲಿತಾಂಶ ಲಭಿಸಿದೆ. 2021-22 ನೇ ಸಾಲಿನಲ್ಲಿ ಶೇ. 94.3 ಫಲಿತಾಂಶ ಲಭಿಸಿತ್ತು. ಪ್ರಸ್ತುತ ವರ್ಷದ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ. 2.49ರಷ್ಟು ಹೆಚ್ಚಳವಾಗಿದೆ.
ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವೆ ಎಂದಿದ್ದ ದೇವೇಗೌಡರು: ಸಚಿವ ಚಲುವರಾಯಸ್ವಾಮಿ
ಎಸ್‍ಎಸ್‍ಎಲ್‍ಸಿ ಫಲಿತಾಂಶದಲ್ಲಿ ಜಿಲ್ಲೆಯ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಈ ಬಾರಿಯು ಸಹ ಮೊದಲ ಸ್ಥಾನ ಪಡೆಯಲು ಕ್ರಮ ವಹಿಸಲಾಗುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮಪಡಿಸುವ ಸಂಬಂಧ ಜಿಲ್ಲಾ ಹಂತದಲ್ಲಿ ವಿಷಯವಾರು ಕಾರ್ಯಾಗಾರಗಳನ್ನು ನಡೆಸಿ, ವಿಷಯವಾರು ಪರೀಕ್ಷಾ ಪೂರಕ ಸಾಹಿತ್ಯಗಳನ್ನು ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಬಿಡುಗಡೆ ಮಾಡಿದರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಡಯಟ್ ಪ್ರಾಂಶುಪಾಲ ನಾಸಿರುದ್ದೀನ್ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.