ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿ: ಸಂಪಾಜೆಯಲ್ಲಿ ಭೂಮಿ ಪೂಜೆ ನೆರವೇರಿಸಿದ ಸಂಸದ ಪ್ರತಾಪ್ ಸಿಂಹ
ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸಂಪಾಜೆಯಿಂದ ಕಾಟಕೇರಿವರೆಗಿನ 21.6 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಗೆ ಸಂಸದರಾದ ಪ್ರತಾಪ್ ಸಿಂಹ ಅವರು ಸೋಮವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ವರದಿ: ರವಿ.ಎಸ್.ಹಳ್ಳಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಕೊಡಗು
ಕೊಡಗು (ಜ.02): ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ಸಂಪಾಜೆಯಿಂದ ಕಾಟಕೇರಿವರೆಗಿನ 21.6 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ ಡಾಂಬರೀಕರಣ ಕಾಮಗಾರಿಗೆ ಸಂಸದರಾದ ಪ್ರತಾಪ್ ಸಿಂಹ ಅವರು ಸೋಮವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಸಂಪಾಜೆಯ ಗೇಟ್ ಬಳಿ ಚಾಲನೆ ನೀಡಿ ಮಾತನಾಡಿದ ಪ್ರತಾಪ್ ಸಿಂಹ ಅವರು ಸುಮಾರು 14.16 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, 6 ತಿಂಗಳೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಸಂಪಾಜೆಯಿಂದ ಸುಂಟಿಕೊಪ್ಪದವರೆಗೆ 21 ಕಡೆಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಈಗಾಗಲೇ ಸರ್ಕಾರಕ್ಕೆ ಅಂದಾಜುಪಟ್ಟಿ ಸಲ್ಲಿಸಲಾಗಿದ್ದು, ಅನುಮೋದನೆ ದೊರೆಯಬೇಕಿದೆ ಎಂದು ಸಂಸದರು ಮಾಹಿತಿ ನೀಡಿದರು. ಹಾಗೆಯೇ ಕುಶಾಲನಗರ ಪಟ್ಟಣದಿಂದ ಸಂಪಾಜೆಯವರೆಗಿನ ರಾಷ್ಟ್ರೀಯ ಹೆದ್ದಾರಿ 275 ರಲ್ಲಿ ಅಪಘಾತ ವಲಯಗಳನ್ನು ಗುರುತಿಸಲಾಗಿದೆ. ಅದರಲ್ಲಿ ಪ್ರಮುಖವಾಗಿ ಮಡಿಕೇರಿ ತಾಲ್ಲೂಕಿನ ಬೋಯಿಕೇರಿ ಮತ್ತು ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಸ್ತೆ ಸರಿಪಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದಿದ್ದಾರೆ. ಇದಕ್ಕಾಗಿ 500 ಲಕ್ಷ ರೂ. ಕಾಮಗಾರಿಗೆ ಸರ್ಕಾರದಿಂದ ಅನುಮೋದನೆ ದೊರೆತಿದೆ ಎಂದು ಸಂಸದ ಪ್ರತಾಪ್ ಸಿಂಹ ಅವರು ತಿಳಿಸಿದ್ದಾರೆ.
ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೋದಿ ನಿಂತರೂ ಬಿಜೆಪಿ ಗೆಲ್ಲುವುದಿಲ್ಲ: ಎಂ.ಲಕ್ಷ್ಮಣ್ ಭವಿಷ್ಯ
ಕೊಡಗು ಜಿಲ್ಲೆಯ ಕುಶಾಲನಗರದಿಂದ ಸಂಪಾಜೆವರೆಗೆ ಹೆದ್ದಾರಿ ಭಾಗದಲ್ಲಿ ಸುಮಾರು 1.3 ಕಿ.ಮೀ. ಮಳೆ ನೀರು ನಿಲ್ಲುವ ಪ್ರದೇಶವನ್ನು ಗುರುತಿಸಲಾಗಿದ್ದು, ಈ ಪ್ರದೇಶವನ್ನು ವಿಸ್ತರಿಸಿ ರಸ್ತೆ ಎತ್ತರೀಕರಣಗೊಳಿಸಲು ಯೋಜನೆ ರೂಪಿಸಿಲಾಗಿದೆ. ಆ ನಿಟ್ಟಿನಲ್ಲಿ ಈ ಕಾಮಗಾರಿಗೆ ಅನುಮೋದನೆ ದೊರೆತಿದ್ದು, ಅಂದಾಜು ಪಟ್ಟಿ ಸಲ್ಲಿಸಬೇಕಿದೆ ಎಂದು ಪ್ರತಾಪ್ ಸಿಂಹ ಅವರು ಹೇಳಿದರು. ಹೆದ್ದಾರಿಯಲ್ಲಿ ಮಡಿಕೇರಿ ತಾಲ್ಲೂಕಿನ ಜೋಡುಪಾಲದ ಸಮೀಪ ಮತ್ತು ಕರ್ತೋಟಿ ಸಮೀಪ ಎರಡು ಕಡೆ ಸೇತುವೆ ನಿರ್ಮಾಣ ಮಾಡಲಾಗುತ್ತದೆ.
ಹಾಗೆಯೇ 8 ಕಡೆ ಸಣ್ಣಪುಟ್ಟ ತಡೆಗೋಡೆಗಳನ್ನು ನಿರ್ಮಿಸಲಾಗುತ್ತದೆ. ಜೋಡುಪಾಲ ಬಳಿ ಭೂಮಿಯೊಳಗೆ ನೀರಿನ ಒರತೆ ಹೆಚ್ಚಿದ್ದು ಅಲ್ಲಿಯೂ ರಸ್ತೆಯ ಸಮಸ್ಯೆ ಆಗುತ್ತಿದೆ. ಹೀಗಾಗಿ ಹೊಸದಾಗಿ ಸೇತುವೆ ನಿರ್ಮಿಸಲಾಗುವುದು ಎಂದು ಸಂಸದರು ವಿವರಿಸಿದರು. 2018 ರಲ್ಲಿ ಸಂಭವಿಸಿದ ಭೂಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ 19 ತಡೆಗೋಡೆ ನಿರ್ಮಿಸಲು ಉದ್ದೇಶಿಸಲಾಗಿತ್ತು, 2019 ರಲ್ಲಿಯೂ ಸಹ ಅತಿವೃಷ್ಟಿಯಾದ ಕಾರಣ 21 ತಡೆಗೋಡೆಗಳನ್ನು ನಿರ್ಮಿಸಲಾಗುತ್ತದೆ ಎಂದು ಪ್ರತಾಪ್ ಸಿಂಹ ಅವರು ಹೇಳಿದರು.
ವಿ.ಸೋಮಣ್ಣ ಜೊತೆ ಮಾತನಾಡಿದ್ದೇನೆ, ಅವರು ಬಿಜೆಪಿ ಪಕ್ಷ ಬಿಡೊಲ್ಲ: ಆರ್.ಅಶೋಕ್
ಮೈಸೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆದ್ದಾರಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಪ್ರತಾಪ್ ಸಿಂಹ ಅವರು ತಿಳಿಸಿದರು. ಈ ಸಂದರ್ಭ ಸಂಪಾಜೆ ಗ್ರಾ.ಪಂ.ಅಧ್ಯಕ್ಷರಾದ ರಮಾದೇವಿ ಬಾಲಚಂದ್ರ ಕಳಗಿ, ಪ್ರಮುಖರಾದ ನಾಗೇಶ್ ಕುಂದಲ್ಪಾಡಿ, ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಶಿವಪ್ರಸಾದ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಜಿ.ಎಚ್.ಗಿರೀಶ್, ಸಹಾಯಕ ಎಂಜಿನಿಯರ್ ಹನುಮಂತ, ಸುಧಾಕರಶೆಟ್ಟಿ ಇತರರು ಇದ್ದರು.