ಪುಟ್ಟರಾಜ ಗವಾಯಿಗಳ ಸ್ಮಾರಕ ಭವನ ಕಾಮಗಾರಿಗೆ ಅಗತ್ಯ ಅನುದಾನ: ಸಚಿವ ಎಚ್.ಕೆ.ಪಾಟೀಲ್
ಡಾ. ಪಂಡಿತ ಪುಟ್ಟರಾಜ ಗವಾಯಿಗಳ ಸ್ಮಾರಕ ಭವನ ಕಾಮಗಾರಿಗೆ ಅಗತ್ಯದ ಅನುದಾನ ಒದಗಿಸಲು ಸರ್ಕಾರ ಬದ್ಧ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ಗದಗ (ಜು.01): ಡಾ. ಪಂಡಿತ ಪುಟ್ಟರಾಜ ಗವಾಯಿಗಳ ಸ್ಮಾರಕ ಭವನ ಕಾಮಗಾರಿಗೆ ಅಗತ್ಯದ ಅನುದಾನ ಒದಗಿಸಲು ಸರ್ಕಾರ ಬದ್ಧ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. ನಗರದ ಎಪಿಎಂಸಿ ಹತ್ತಿರದ ಡಾ. ಪಂಡಿತ ಪುಟ್ಟರಾಜ ಗವಾಯಿಗಳ ಸ್ಮಾರಕ ಭವನ ಕಾಮಗಾರಿಯನ್ನು ವೀಕ್ಷಿಸಿ ಅವರು ಮಾತನಾಡಿ, ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅನುದಾನದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮಾಹಿತಿ ಒದಗಿಸುತ್ತಾ, ಸ್ಮಾರಕ ಕಟ್ಟಡ ಕಾಮಗಾರಿಗೆ ಸರ್ಕಾರದಿಂದ ಈಗಾಗಲೇ 5 ಕೋಟಿ ರು.ಅನುದಾನ ಒದಗಿಸಲಾಗಿತ್ತು. ಅದರಂತೆ ಕಾಮಗಾರಿ ಆರಂಭಿಸಿ ನೀಡಿದ ಅನುದಾನವನ್ನು ಬಳಸಲಾಗಿದೆ. ಹೆಚ್ಚುವರಿಯಾಗಿ 1.25 ಕೋಟಿ ರು. ವೆಚ್ಚವನ್ನು ಮಾಡಲಾಗಿದ್ದು ಕಾಮಗಾರಿ ಪೂರ್ಣಗೊಳಿಸಲು ಇನ್ನೂ ಹೆಚ್ಚುವರಿಯಾಗಿ 7 ಕೋಟಿ ಅನುದಾನ ಅಗತ್ಯವಿದೆ ಎಂದರು. ಇದಕ್ಕೆ ಪ್ರತಿಯಾಗಿ ಮಾತನಾಡಿದ ಸಚಿವರು, ಈಗಾಗಲೇ ರಂಗಮಂದಿರದ ಉದ್ಘಾಟನೆಗೆ ಆಗಮಿಸಿದ ಸಂದರ್ಭದಲ್ಲಿ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರೊಂದಿಗೆ ಸ್ಮಾರಕ ಪೂರ್ಣಗೊಳಿಸಲು ಅಗತ್ಯ ಅನುದಾನ ನೀಡುವಂತೆ ಚರ್ಚಿಸಲಾಗಿದೆ.
ಜಾತಿಗೊಂದು ಜಯಂತಿ ಮಾಡಿ ತಪ್ಪು ಗ್ರಹಿಕೆ ಬೇರೂರುತ್ತಿದೆ: ಶಾಸಕ ಜಿ.ಟಿ.ದೇವೇಗೌಡ
ಅವರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದು ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸಿ ಅನುದಾನ ಪಡೆಯಲಾಗುವುದು ಎಂದರು. ಅನುದಾನ ಬಿಡುಗಡೆಯಾದ ತಕ್ಷಣ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಟೆಂಡರ್ ಕರೆದು ಕಾಮಗಾರಿಯನ್ನು ಮುಂದಿನ 9 ತಿಂಗಳೊಳಗಾಗಿ ಪೂರ್ಣಗೊಳಿಸಬೇಕು. ನಿಗದಿತ ಅವಧಿಗೆ ಕಾಮಗಾರಿ ಪೂರ್ಣಗೊಳಿಸುವಲ್ಲಿ ವಿಳಂಬ ಸಹಿಸಲಾಗದು. ಕಾಮಗಾರಿ ಗುಣಮಟ್ಟದಿಂದ ಕೂಡಿರುವಂತೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಲು ಸೂಚಿಸಲಾಗಿದೆ ಎಂದರು. ಆಗಸ್ಟ್ 15ರೊಳಗಾಗಿ ಕಾಮಗಾರಿಯನ್ನು ಪುನಃ ಆರಂಭಿಸಿ ಪೂರ್ಣಗೊಳಿಸಬೇಕು. ಯೋಜನೆಯಂತೆ ಕಾಮಗಾರಿ ಪೂರ್ಣಗೊಂಡಲ್ಲಿ ಸ್ಮಾರಕ ಭವನದ ಮೇಲ್ಗಡೆಯಿಂದ ವೀಕ್ಷಿಸಿದಾಗ ವೀಣೆಯಾಕಾರದಲ್ಲಿ ಗೋಚರಿಸುವಂತೆ ಕಟ್ಟಡ ನಿರ್ಮಿಸಬೇಕು ಎಂದರು.
ಕಾಂಗ್ರೆಸ್ ಗ್ಯಾರಂಟಿಗೆ ಪ್ರಧಾನಿ ಮೋದಿ ಹೊಣೆಯಲ್ಲ: ಸಂಸದ ಮುನಿಸ್ವಾಮಿ
ಪುಟ್ಟರಾಜ ಗವಾಯಿಗಳ ಸ್ಮಾರಕ ಭವನವನ್ನು ಸಿದ್ದರಾಮಯ್ಯ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಆರಂಭಿಸಲಾಗಿತ್ತು. ಅದರ ಕಾಮಗಾರಿ ಪೂರ್ಣಗೊಳಿಸಿ ಉದ್ಘಾಟನೆಯನ್ನು ಸಹ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಿಂದಲೇ ಮಾಡಲಾಗುವುದು. ಅಭಿವೃದ್ಧಿಯಲ್ಲಿ ಸರ್ಕಾರ ಸದಾ ಮುಂದಿರಲಿದೆ ಎಂದರು. ಈ ಸಂದರ್ಭದಲ್ಲಿ ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು, ಜಿಪಂ ಸಿಇಒ ಡಾ. ಸುಶೀಲಾ ಬಿ., ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಬಿ. ಹಿರೇಮಠ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಪಿ.ಎಸ್. ಪಾಟೀಲ ಸೇರಿದಂತೆ ಇತರರು ಇದ್ದರು.