ಬೆಂಗಳೂರು (ಫೆ. 06): ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ರೈತ ಸಂಘಟನೆಗಳು ಇಂದು ‘ಚಕ್ಕಾ ಜಾಮ್‌’ಗೆ ಕರೆ ಕೊಟ್ಟಿವೆ. ಈ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ ಸೂಚಿಸಿದೆ.  ದೆಹಲಿ, ಉತ್ತರ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ಮಾತ್ರ 'ಚಕ್ಕಾ ಜಾಮ್' ಹೆಸರಿನ ಪ್ರತಿಭಟನೆ ನಡೆಯುವುದಿಲ್ಲ. ಈ 3 ರಾಜ್ಯಗಳನ್ನು ಹೊರತುಪಡಿಸಿ ಇನ್ನೆಲ್ಲಾ ಕಡೆ ರಸ್ತೆ ತಡೆ ನಡೆಯಲಿದೆ. 

ಜ.26 ರ ಗಣರಾಜ್ಯೋತ್ಸವದಂದು ರೈತರು ನಡೆಸಿದ ಟ್ರ್ಯಾಕ್ಟರ್‌ ಪರೇಡ್‌ನಲ್ಲಿ ಭಾರೀ ಹಿಂಸಾಚಾರ ಉಂಟಾದ ಹಿನ್ನೆಲೆಯಲ್ಲಿ ಎಚ್ಚೆತ್ತ ದೆಹಲಿ ಪೊಲೀಸ್‌ ಮುಂಜಾಗ್ರತಾ ಕ್ರಮವಾಗಿ ಈ ಬಿಗಿ ಕ್ರಮಗಳನ್ನು ಕೈಗೊಂಡಿದೆ. ದೆಹಲಿಯ ಸಂಸತ್ತು, ಇಂಡಿಯಾ ಗೇಟ್‌ನಲ್ಲಿಯೂ ಭಾರೀ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅಲ್ಲದೆ ಪೊಲೀಸ್‌ ಪಡೆಯು ಸಾಮಾಜಿಕ ಜಾಲತಾಣಗಳ ಮೇಲೂ ಹದ್ದಿನ ಕಣ್ಣಿಟ್ಟು, ವದಂತಿ ಹಬ್ಬಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ.

ರಸ್ತೆ ತಡೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ವಿಚಾರವಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಗುರುವಾರ ಉನ್ನತ ಮಟ್ಟದ ಸಭೆ ನಡೆದಿದ್ದು, ಭಾರೀ ಭದ್ರತೆಗೆ ಕೇಂದ್ರ ಸರ್ಕಾರವೇ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.