ಬೆಂಗಳೂರಿನಲ್ಲಿ ನಡೆಯಲಿರುವ ನೀಟ್-ಯುಜಿ 2026 ಮರು ಪರೀಕ್ಷೆಯ ಹಿನ್ನೆಲೆಯಲ್ಲಿ, ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಪೋಲೀಸ್ ಇಲಾಖೆ ನಿಷೇಧಾಜ್ಞೆ ಜಾರಿಗೊಳಿಸಿದೆ. ಪರೀಕ್ಷಾ ಕೇಂದ್ರಗಳ ಸಮೀಪದ ಜೆರಾಕ್ಸ್ ಅಂಗಡಿ, ಸೈಬರ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಬೆಂಗಳೂರು (ಜೂ.19): ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ವತಿಯಿಂದ ನಡೆಸಲಾಗುವ ನೀಟ್-ಯುಜಿ 2026 (NEET-UG 2026) ಮರು ಪರೀಕ್ಷೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೋಲೀಸ್ ಇಲಾಖೆಯು ಬಿಗಿ ಕ್ರಮಗಳನ್ನು ಕೈಗೊಂಡಿದೆ. ಪರೀಕ್ಷೆಯು ಸುಸೂತ್ರವಾಗಿ ಮತ್ತು ಯಾವುದೇ ಅಕ್ರಮಗಳಿಲ್ಲದೆ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಪೋಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ:

ಬೆಂಗಳೂರು ನಗರ ಪೋಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್ ಅವರು ಹೊರಡಿಸಿರುವ ಆದೇಶದಂತೆ, ದಿನಾಂಕ 21-06-2026 ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಯ ಸಂದರ್ಭದಲ್ಲಿ ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು 'ನಿಷೇಧಿತ ಪ್ರದೇಶ' ಎಂದು ಘೋಷಿಸಲಾಗಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (BNSS) ಕಲಂ 163 ರ ಅಡಿಯಲ್ಲಿ ಈ ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಜಿರಾಕ್ಸ್ ಮತ್ತು ಸೈಬರ್ ಸೆಂಟರ್‌ಗಳು ಬಂದ್:

ಪರೀಕ್ಷಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಿರಾಕ್ಸ್ ಅಂಗಡಿಗಳು, ಸೈಬರ್ ಕೆಫೆಗಳು ಹಾಗೂ ಕಂಪ್ಯೂಟರ್ ಸೆಂಟರ್‌ಗಳನ್ನು ಪರೀಕ್ಷೆಯ ಸಮಯದಲ್ಲಿ ಕಡ್ಡಾಯವಾಗಿ ಮುಚ್ಚುವಂತೆ ಆದೇಶಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಇತರ ಯಾವುದೇ ರೀತಿಯ ಮೈಲ್ ಪ್ರಾಕ್ಟೀಸ್‌ಗಳನ್ನು ತಡೆಗಟ್ಟಲು ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೋಲೀಸ್ ಇಲಾಖೆಯ ಆದೇಶದಲ್ಲಿ ತಿಳಿಸಲಾಗಿದೆ.

ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಕ್ರಮ:

ಜಿಲ್ಲಾಧಿಕಾರಿಗಳ ಕಚೇರಿಯ ಮನವಿಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಪರೀಕ್ಷೆಯ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡುವ ಜವಾಬ್ದಾರಿಯನ್ನು ಪೋಲೀಸ್ ಇಲಾಖೆ ಹೊತ್ತುಕೊಂಡಿದೆ. ಅಭ್ಯರ್ಥಿಗಳು ಮತ್ತು ಪರೀಕ್ಷಾ ಸಿಬ್ಬಂದಿಯನ್ನು ಹೊರತುಪಡಿಸಿ, ಅನಧಿಕೃತ ವ್ಯಕ್ತಿಗಳು ಪರೀಕ್ಷಾ ಕೇಂದ್ರದ ಆವರಣದಲ್ಲಿ ಅಥವಾ ನಿಷೇಧಿತ ವ್ಯಾಪ್ತಿಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.

ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೋಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ವಿದ್ಯಾರ್ಥಿಗಳು ಯಾವುದೇ ಗೊಂದಲಕ್ಕೊಳಗಾಗದೆ ಪರೀಕ್ಷಾ ಕೇಂದ್ರಗಳಿಗೆ ಸರಿಯಾದ ಸಮಯಕ್ಕೆ ತಲುಪಲು ಹಾಗೂ ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.