ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ಆರೋಪಿಗಳಾದ ಅಬ್ದುಲ್‌ ನಾಸೀರ್‌ ಮತ್ತು ನೌಶಾದ್‌ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿದೆ. ಈ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಕನ್ನಡಪ್ರಭ ವಾರ್ತೆ ಬೆಂಗಳೂರು (ಜು.13): ರಾಜ್ಯದಲ್ಲಿ ಭಾರೀ ಸದ್ದು ಮಾಡಿದ್ದ ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಕೊಡಗು ಜಿಲ್ಲೆ ಸೋಮವಾರಪೇಟೆಯ ಅಬ್ದುಲ್‌ ನಾಸೀರ್‌ ಅಲಿಯಾಸ್‌ ನಾಸೀರ್‌(41) ಮತ್ತು ಬೆಳ್ತಂಗಡಿಯ ನೌಶಾದ್‌(32) ಬಂಧಿತರು.

ಆಂಧ್ರದ ಪೊಲೀಸರು ನೀಡಿದ ಖಚಿತ ಮಾಹಿತಿ ಮೇರೆಗೆ ಎನ್‌ಐಎ ಅಧಿಕಾರಿಗಳು ಕೇರಳದ ಕೊಚ್ಚಿ ಮತ್ತು ತಮಿಳುನಾಡಿನ ಹೊಸೂರಿನಲ್ಲಿ ಕಾರ್ಯಾಚರಣೆ ಕೈಗೊಂಡು ಕ್ರಮವಾಗಿ ಅಬ್ದುಲ್‌ ನಾಸೀರ್‌ ಮತ್ತು ನೌಶಾದ್‌ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಇಬ್ಬರ ಬಂಧನದ ಮೂಲಕ ಈವರೆಗೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಇವರ ಬಂಧನಕ್ಕೆ ಎನ್‌ಐಎ ಅಧಿಕಾರಿಗಳು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಪ್ರಕರಣದ ಹಿನ್ನೆಲೆ

ನಿಷೇಧಿತ ಪಾಪ್ಯೂಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಕಾರ್ಯಕರ್ತರು 2022ರ ಜುಲೈ 26ರಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದಿದ್ದರು. ಹಿಂದೂ ಮುಖಂಡರನ್ನು ಗುರಿಯಾಗಿಸಿ ಹತ್ಯೆ ಮಾಡುವ ಭಾಗವಾಗಿ ಪ್ರವೀಣ್ ನೆಟ್ಟಾರು ಅವರ ಕೊಲೆ ಮಾಡಿದ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ಎನ್‌ಐಎ ಯುಎಪಿಎ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ 27 ಮಂದಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿತ್ತು. ಬಳಿಕ ಕಾರ್ಯಾಚರಣೆ ನಡೆಸಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ ಒಬ್ಬೊಬ್ಬರಂತೆ ಒಟ್ಟು 22 ಮಂದಿ ಆರೋಪಿಗಳನ್ನು ಬಂಧಿಸಿತ್ತು. ಬಳಿಕ ವಿಸ್ತೃತ ತನಿಖೆ ನಡೆಸಿ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್‌ ಸಲ್ಲಿಸಿತ್ತು.

ತಲಾ 4 ಲಕ್ಷ ರು. ಬಹುಮಾನ

ಪ್ರಕರಣದ ಪ್ರಮುಖ ಆರೋಪಿಗಳಾದ ಅಬ್ದುಲ್ ನಾಸೀರ್‌, ನೌಶಾದ್‌ ಸೇರಿ ಐವರು ಆರೋಪಿಗಳು ತಲೆಮರೆಸಿಕೊಂಡಿದ್ದರು. ಇವರ ಬಂಧನಕ್ಕೆ ಎನ್‌ಐಎ ವಿಶೇಷ ನ್ಯಾಯಾಲಯ ಲುಕ್‌ ಔಟ್‌ ನೋಟಿಸ್‌ ಮತ್ತು ಬಂಧನದ ವಾರೆಂಟ್ ಸಹ ಹೊರಡಿಸಿತ್ತು. ಈ ಐವರು ಆರೋಪಿಗಳ ಬಗ್ಗೆ ಮಾಹಿತಿ ನೀಡುವವರೆಗೆ ತಲಾ 4 ಲಕ್ಷ ರು. ಬಹುಮಾನ ಘೋಷಿಸಿತ್ತು. ಇದೀಗ ನಾಲ್ಕು ವರ್ಷಗಳ ಬಳಿಕ ಐವರು ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸುವಲ್ಲಿ ಎನ್‌ಐಎ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.