ಹುಬ್ಬಳ್ಳಿ, (ಅ.30): ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ನಾವು ಸಕಲ ಸಿದ್ಧತೆಯಲ್ಲಿದ್ದೇವೆ. ಹೀಗಾಗಿ ನಮ್ಮ ದೇಶದಲ್ಲಿ ಮತ್ತೆ ಲಾಕ್‍ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ.

ಯೂರೋಪ್ ರಾಷ್ಟದಲ್ಲಿ ಮತ್ತೆ ಕೊರೋನಾ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಕೆಲ ರಾಷ್ಟ್ರಗಳಲ್ಲಿ ಅನಿವಾರ್ಯವಾಗಿ ಮತ್ತೆ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಇನ್ನು ಭಾರತಲ್ಲಿ ಮತ್ತೆ ಲಾಕ್‌ಡೌನ್ ಆಗುತ್ತಾ ಎನ್ನುವ ಬಗ್ಗೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಇಂದು (ಶುಕ್ರವಾರ) ಸುದ್ದಿಗಾರರೊಂದಿಗೆ ಮಾತನಾಡಿ, ಯೂರೋಪ್ ರಾಷ್ಟದಲ್ಲಿ ಮತ್ತೆ ಲಾಕ್‍ಡೌನ್ ಮಾಡುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಭಾರತ ದೇಶದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಯಾವುದೇ ಪ್ರಸ್ತಾವ ಇಲ್ಲ. ನಾವು ಈಗಾಗಲೇ ಕೊರೊನಾ ನಿಯಂತ್ರಣಕ್ಕೆ ಸಕಲ ಸಿದ್ಧತೆಯಲ್ಲಿದ್ದೇವೆ. ಹೀಗಾಗಿ ನಮ್ಮ ದೇಶದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಸೋಂಕಿನ ಸುನಾಮಿ : ಮತ್ತೆ ಸ್ಟ್ರಿಕ್ಟ್ ಲಾಕ್‌ಡೌನ್-ಕರ್ಫ್ಯೂ, ಎಲ್ಲೆಲ್ಲಿ..?

ಇನ್ನು ಇದೇ ವೇಳೆ ಬೈ ಎಲೆಕ್ಷನ್ ಕುರಿತು ಪ್ರತಿಕ್ರಿಯಿಸಿದ ಅವರು, ಶಿರಾ ಮತ್ತು ಆರ್.ಆರ್ ನಗರ ಉಪಚುನಾವಣೆಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆ ವಿಚಾರಕ್ಕೆ ತಿರುಗೇಟು ನೀಡಿದರು.

ಭ್ರಷ್ಟಾಚಾರದ ಬಗ್ಗೆ ಡಿಕೆಶಿ ಅವರು ಮಾತನಾಡುವುದು ಹಾಸ್ಯಾಸ್ಪದ. ಭ್ರಷ್ಟಾಚಾರದಲ್ಲಿ ಭಾಗಿಯಾಗಿ ಅವರು ಬೇಲ್ ಮೇಲೆ ಹೊರಗಡೆ ಇದ್ದಾರೆ. ಮೊದಲು ಅದನ್ನ ಡಿಕೆಶಿ ಅರಿತುಕೊಳ್ಳಲಿ. ಇದು ಕಾಂಗ್ರೆಸ್ಸಿಗರ ದೊಡ್ಡ ಸಮಸ್ಯೆ ಎಂದು ಕಿಡಿಕಾರಿದರು.