ಬೆಂಗಳೂರು(ಡಿ.23): ಬ್ರಿಟನ್ನಿನಲ್ಲಿ ಪತ್ತೆಯಾದ ಕೊರೋನಾ ವೈರಸ್‌ ಎಲ್ಲೆಡೆ ಹರಡುವ ಭೀತಿ ಮೂಡಿದೆಯಾದರೂ ರಾಜ್ಯದಲ್ಲಿ ಪರಿಪೂರ್ಣ ಕಟ್ಟೆಚ್ಚರ ವಹಿಸಿರುವುದರಿಂದ ಸದ್ಯಕ್ಕೆ ರಾತ್ರಿ ಕಫä್ರ್ಯ ಅಥವಾ ಲಾಕ್‌ಡೌನ್‌ ವಿಧಿಸುವ ಚಿಂತನೆಯನ್ನು ರಾಜ್ಯ ಸರ್ಕಾರ ಹೊಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

"

ಗೃಹ ಕಚೇರಿ ಕೃಷ್ಣಾ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಕೊರೋನಾದ ಹೊಸ ರೂಪಾಂತರದಿಂದಾಗಿ ರಾಜ್ಯದಲ್ಲೂ ಸೋಂಕು ಹರಡುವ ಆತಂಕವಿರುವ ಹಿನ್ನೆಲೆಯಲ್ಲಿ ವಿದೇಶದಿಂದ ಬಂದವರ ಮೇಲೆ ನಿಗಾವಹಿಸಲಾಗುತ್ತಿದೆ. ಸಂಪೂರ್ಣವಾಗಿ ಕಟ್ಟೆಚ್ಚರ ವಹಿಸಲಾಗಿದೆ. ಆದರೆ, ಮಹಾರಾಷ್ಟ್ರ ಮಾದರಿಯಲ್ಲಿ ರಾತ್ರಿ ಕಫä್ರ್ಯ ಜಾರಿ ಮಾಡುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದರು.

ಮಹಾಮಾರಿಯ ಹೊಸ ರೂಪಾಂತರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಗಳಿಗೆ ಸೂಚನೆ ನೀಡಿದ್ದಾರೆ. ನಮ್ಮ ರಾಜ್ಯಕ್ಕೆ ಯಾರೇ ವಿದೇಶಗಳಿಂದ ಬಂದರೂ ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸಲಾಗುವುದು. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ವೈರಸ್‌ ಹರಡದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗುವುದು ಎಂದರು.

ಈ ಬಾರಿ ಹೊಸವರ್ಷವನ್ನು ದೊಡ್ಡ ಪ್ರಮಾಣದಲ್ಲಿ ಆಚರಿಸುವಂತಿಲ್ಲ. ಈ ಕುರಿತು ಪೊಲೀಸ್‌ ಇಲಾಖೆ, ಬಿಬಿಎಂಪಿ ಸೇರಿದಂತೆ ಸಂಬಂಧಿಸಿದ ಎಲ್ಲ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ಕಾನೂನು ಉಲ್ಲಂಘಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಕೋವಿಡ್‌ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ. ಕೇಂದ್ರ ಮತ್ತು ರಾಜ್ಯಸರ್ಕಾರ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಿಬೇಕು ಎಂದು ತಿಳಿಸಿದರು.

ಲಾಕ್‌ಡೌನ್‌ ಇಲ್ಲ- ಸುಧಾಕರ್‌:

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಸದ್ಯಕ್ಕೆ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವ ಬಗ್ಗೆ ಚಿಂತನೆ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದರು.

ಸೋಮವಾರ ರಾತ್ರಿ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಕಫä್ರ್ಯ ವಿಧಿಸಬಹುದು ಎಂದು ಸಲಹೆ ನೀಡಿದ್ದಾರೆ. ಈಗಾಗಲೇ ಕೆಲವು ರಾಜ್ಯಗಳು ರಾತ್ರಿ ಕಫä್ರ್ಯ ಜಾರಿ ಮಾಡಿವೆ. ನಿಮ್ಮ ರಾಜ್ಯದಲ್ಲೂ ಸಹ ಮುಖ್ಯಮಂತ್ರಿಗಳ ಜೊತೆ ಸಮಾಲೋಚನೆ ನಡೆಸಿ ತೀರ್ಮಾನ ತೆಗೆದುಕೊಳ್ಳಬಹುದು ಎಂದು ಸಲಹೆ ನೀಡಿದರೆಂದು ಹೇಳಿದರು.

ವಿದೇಶದಿಂದ ಕೊರೋನಾ ನೆಗೆಟಿವ್‌ ವರದಿ ತರದೇ ಬಂದಿರುವ 138 ಮಂದಿಯನ್ನು ಪತ್ತೆ ಮಾಡಿ ಕ್ವಾರಂಟೈನ್‌ ಮಾಡಲಾಗಿದೆ. ಈ ಎಲ್ಲರಿಗೂ ಆರ್‌ಟಿಪಿಸಿಆರ್‌ ಪರೀಕ್ಷೆ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್‌ ಬಂದರೆ ಜೆನೆಸಿಸ್‌ ಪರೀಕ್ಷೆ ಮಾಡಿ ಬ್ರಿಟನ್ನಿನ ಹೊಸ ತಳಿಯ ವೈರಸ್‌ ಬಗ್ಗೆ ತಿಳಿದುಕೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಜನತೆ ಮುನ್ನೆಚ್ಚರಿಕೆ ಪಾಲಿಸಿ, ಸಹಕರಿಸಿ

ರೂಪಾಂತರಗೊಂಡ ಕೊರೋನಾ ವೈರಸ್‌ ಹಬ್ಬದಂತೆ ತಡೆಯಲು ಎಲ್ಲ ಕ್ರಮ ಕೈಗೊಳ್ಳುತ್ತಿದ್ದೇವೆ. ವಿದೇಶಗಳಿಂದ ರಾಜ್ಯಕ್ಕೆ ಆಗಮಿಸುವವರನ್ನು ವಿಮಾನ ನಿಲ್ದಾಣದಲ್ಲಿಯೇ ತಪಾಸಣೆ ಮಾಡುತ್ತಿದ್ದೇವೆ. ಜನರು ಕಿಂಚಿತ್ತೂ ನಿರ್ಲಕ್ಷ್ಯ ಮಾಡದೆ, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ, ಸಹಕರಿಸಿ.

- ಬಿ.ಎಸ್‌.ಯಡಿಯೂರಪ್ಪ, ಮುಖ್ಯಮಂತ್ರಿ