ಗೋವಾ ಮುಖ್ಯಮಂತ್ರಿಗಳ ಹೇಳಿಕೆಯ ಮರುದಿನವೇ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಗೆ ಭೂಸ್ವಾಧೀನ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಯೋಜನೆ ಜಾರಿಗೆ ಸಿದ್ಧತೆ ನಡೆಸುತ್ತಿದೆ. ಒಟ್ಟು 9.27 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ.
ಹುಬ್ಬಳ್ಳಿ (ಆ.14): ಅತ್ತ ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ ಮಹದಾಯಿ ವಿಷಯವಾಗಿ ಕ್ಯಾತೆ ತೆಗೆದ ಮರುದಿನವೇ ರಾಜ್ಯ ಸರ್ಕಾರ ಕಳಸಾ-ಬಂಡೂರಿ ನಾಲಾ ತಿರುವು ಯೋಜನೆಗಾಗಿ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದೆ. ಯೋಜನೆ ಜಾರಿಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂಬುದನ್ನು ಸೂಚ್ಯವಾಗಿ ತಿಳಿಸಿದೆ.
ಜು.22ರಂದು ಗೋವಾ ಸದನದಲ್ಲಿ ಅಲ್ಲಿನ ಮುಖ್ಯಮಂತ್ರಿ ಪ್ರಮೋದ ಸಾವಂತ ಅವರು ಯೋಜನೆ ಬಗ್ಗೆ ಕ್ಯಾತೆ ತೆಗೆದಿದ್ದರು. ಕೇಂದ್ರ ಸರ್ಕಾರ ಈ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ತಮಗೆ ಭರವಸೆ ನೀಡಿದೆ ಎಂದು ಹೇಳಿದ್ದರು. ಇದು ರಾಜ್ಯದಲ್ಲಿ ತೀವ್ರ ಸಂಚಲನವನ್ನುಂಟು ಮಾಡಿತ್ತು. ರೈತರು ಮತ್ತೆ ಹೋರಾಟವನ್ನೂ ತೀವ್ರಗೊಳಿಸಿದ್ದರೆ, ಕಾಂಗ್ರೆಸ್ಸಿಗರು ಬಿಜೆಪಿ ಮೇಲೆ ಹರಿಹಾಯ್ದಿದ್ದು ಇದೆ. ಇನ್ನು ಬಿಜೆಪಿ ಜನಪ್ರತಿನಿಧಿಗಳು ಕೂಡ ಗೋವಾ ಸಿಎಂ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು ಅಲ್ಲದೇ, ಅದು ವೈಯಕ್ತಿಕ ಹೇಳಿಕೆ ಎಂದು ತಿಳಿಸುವ ಪ್ರಯತ್ನ ಮಾಡಿದ್ದರು.
ಭೂಸ್ವಾಧೀನಕ್ಕೆ ಅಧಿಸೂಚನೆ:
ಈ ನಡುವೆಯೇ ಗೋವಾ ಸಿಎಂ ಹೇಳಿಕೆ ನೀಡಿದ ಮರುದಿನವೇ ರಾಜ್ಯ ಸರ್ಕಾರ ಕಳಸಾ- ಬಂಡೂರಿ ನಾಲಾ ತಿರುವು ಯೋಜನೆಯ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿದೆ. ಪೈಪ್‌ಲೈನ್ ಮೂಲಕವೇ ನೀರು ತರುವ ಯೋಜನೆ ಇದಾಗಿದ್ದು, ಹೀಗಾಗಿ ಹೆಚ್ಚಿನ ಜಮೀನು ಬೇಕಾಗುವುದಿಲ್ಲ. 9.27 ಎಕರೆ ಜಮೀನು ಸ್ವಾಧೀನ ಪಡಿಸಿಕೊಳ್ಳಲು ನೋಟಿಫಿಕೇಶನ್ ಹೊರಡಿಸಿದೆ.
ಕಳಸಾ- ಬಂಡೂರಿ ನಾಲಾ ತಿರುವು ಯೋಜನೆಯಡಿ ಹುಬ್ಬಳ್ಳಿ-ಧಾರವಾಡ, ಕುಂದಗೋಳ ಪಟ್ಟಣ ಹಾಗೂ ಮಾರ್ಗಮಧ್ಯೆ ಬರುವ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡಲಾಗುವುದು. ಅದಕ್ಕಾಗಿ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಅಸೋಗಾ (2.38 ಎಕರೆ), ಕರಂಬಳ (15 ಗುಂಟೆ), ಶೇಡೆಗಾಳಿ (14 ಗುಂಟೆ) ಹಾಗೂ ರೂಮೇವಾಡಿ (6 ಎಕರೆ) ಸೇರಿದಂತೆ ಒಟ್ಟು 9.27 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಬೇಕು. ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ಸೂಕ್ತ ಪರಿಹಾರದ ಹಕ್ಕು, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕಾಯ್ದೆ- 2019ರಡಿ ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ರಾಜ್ಯಪಾಲರ ಆಜ್ಞಾನುಸಾರ ಸರ್ಕಾರದ ಆಧೀನ ಕಾರ್ಯದರ್ಶಿಗಳು ಈ ಅಧಿಸೂಚನೆ ಹೊರಡಿಸಿದ್ದಾರೆ.
