ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ, ಹಾಸ್ಟೆಲ್‌ಗಳಲ್ಲಿನ ಕುಡಿಯುವ ನೀರು, ಆಹಾರದ ಗುಣಮಟ್ಟ, ತಿಗಣೆ ಕಾಟದಂತಹ ಮೂಲಸೌಕರ್ಯಗಳ ಕೊರತೆಯನ್ನು ಖಂಡಿಸಿ ವಿದ್ಯಾರ್ಥಿನಿಯರು ಶನಿವಾರ ರಾತ್ರಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಬೆಂಗಳೂರು (ಡಿ.22): ಹಾಸ್ಟೆಲ್‌ಗಳಲ್ಲಿ ಮೂಲಸೌಕರ್ಯಗಳಿಗೆ ಆಗ್ರಹಿಸಿ ಶನಿವಾರ ರಾತ್ರಿ ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದಲ್ಲಿರುವ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರು ವಿವಿ ಆವರಣದಲ್ಲಿನ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ರಾಜ್ಯ ಸೇರಿದಂತೆ ದೇಶದ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಉಳಿದುಕೊಂಡು ವ್ಯಾಸಂಗ ಮಾಡುತ್ತಿದ್ದಾರೆ. ಹಾಸ್ಟೆಲ್‌ನಲ್ಲಿ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ತಿಗಣೆ ಕಾಟ ಹೆಚ್ಚಾಗಿದೆ. ಆಹಾರದ ಗುಣಮಟ್ಟವನ್ನು ಕಾಪಾಡುತ್ತಿಲ್ಲ. ತೀವ್ರ ಚಳಿ ಇದ್ದು, ಸರಿಯಾಗಿ ಬಿಸಿ ನೀರು ಕೂಡ ಲಭ್ಯವಾಗುತ್ತಿಲ್ಲ. ಒಟ್ಟಾರೆಯಾಗಿ ಹಾಸ್ಟೆಲ್‌ನಲ್ಲಿ ಸರಿಯಾದ ನಿರ್ವಹಣೆ ಇಲ್ಲದೇ, ವಿದ್ಯಾರ್ಥಿನಿಯರು ತೊಂದರೆ ಅನುಭವಿಸುತ್ತಿದ್ದಾರೆ. ಇದರಿಂದ ವ್ಯಾಸಂಗದ ಮೇಲೆ ಪರಿಣಾಮ ಬೀರುತ್ತಿದೆ. ಈ ಕುರಿತು ಅನೇಕ ಬಾರಿ ಆಡಳಿತ ಮಂಡಳಿಗೆ ಮೂಲಸೌಕರ್ಯ ಒದಗಿಸುವಂತೆ ಮನವಿ ಸಲ್ಲಿಸಿದ್ದರೂ ಸ್ಪಂದಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸ್ಥಳಕ್ಕೆ ತೆರಳಿದ ಜ್ಞಾನಭಾರತಿ ಠಾಣೆ ಪೊಲೀಸರು, ಪ್ರತಿಭಟನೆ ನಿಲ್ಲಿಸಿ ವಿದ್ಯಾರ್ಥಿನಿಯರ ಮನವೊಲಿಸುವ ಪ್ರಯತ್ನ ಮಾಡಿದರು. ಆದರೆ, ನಮಗೆ ಉಪ ಕುಲಪತಿ ಭೇಟಿಗೆ ಅವಕಾಶ ಮಾಡಿಕೊಡಬೇಕು ಎಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದರು. ಅಂತಿಮವಾಗಿ ಸೋಮವಾರ ಭೇಟಿ ಮಾಡುವಂತೆ ತಿಳಿಸಿದ ಪೊಲೀಸರು ಅವರನ್ನು ಹಾಸ್ಟೆಲ್‌ಗೆ ಕಳುಹಿಸಿದರು.


