ಬೆಂಗಳೂರು(ಅ.02): ಕೋವಿಡ್‌-19 ಮಾರ್ಗಸೂಚಿ ಉಲ್ಲಂಘನೆ ಮಾಡಿರುವ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಮೆಮೋ ಸಲ್ಲಿಕೆಯಾಗಿದೆ.

ಕೋವಿಡ್‌-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ ಜನ ಪ್ರತಿನಿಧಿಗಳು ಹಾಗು ನಟ ನಟಿಯರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸರ್ಕಾರಕ್ಕೆ ಅದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪೂರಕವಾಗಿ ವಕೀಲರಾದ ಗೀತಾ ಮಿಶ್ರಾ ಈ ಮೆಮೊ ಸಲ್ಲಿಸಿದ್ದಾರೆ. ಅದು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ರಾಷ್ಟ್ರೀಯ BJP ಯುವ ಮೋರ್ಚಾ ಅಧ್ಯಕ್ಷರಾದ ಖುಷಿಯಲ್ಲಿ ತೇಜಸ್ವಿ ಸೂರ್ಯ ಎಡವಟ್ಟು..!

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಸೆ.30ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಲ್ಲೇಶ್ವರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯವರೆಗೂ ಮೆರವಣಿಗೆ ಮೂಲಕ ಕರೆತಲಾಗಿದೆ. ಈ ವೇಳೆ ತೇಜಸ್ವಿ ಸೂರ್ಯ ಸೇರಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಯಾರೊಬ್ಬರೂ ಸಹ ಮಾಸ್ಕ್‌ ಧರಿಸಿರಲಿಲ್ಲ. ಸಾಮಾಜಿಕ ಅಂತರ ಕಾಯ್ದುಕೊಂಡಿಲ್ಲ. ಈ ಮೂಲಕ ಕೇಂದ್ರ ಸರ್ಕಾರದ ಕೋವಿಡ್‌-19 ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಅಲ್ಲದೆ, ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಸದಸ್ಯರಾಗಿರುವ ತೇಜಸ್ವಿ ಸೂರ್ಯ ವೃತ್ತಿಯಲ್ಲಿ ವಕೀಲರಾಗಿದ್ದಾರೆ. ಅವರು ಇತರರಿಗೆ ಮಾದರಿಯಾಗಿರಬೇಕು. ಆದರೆ, ಅವರೇ ಕೋವಿಡ್‌-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವುದು ಸರಿಯಲ್ಲ. ಹೀಗಾಗಿ ಸಂಸದರು ಮತ್ತು ಮೆರವಣಿಗೆ ವೇಳೆ ಮಾರ್ಗಸೂಚಿ ಉಲ್ಲಂಘನೆಯಾಗುತ್ತಿದ್ದರೂ ಮೌನವಹಿಸಿದ್ದ ಪೊಲೀಸ್‌ ಅಧಿಕಾರಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಿಸಿ ಕಾನೂನು ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಮೆಮೋದಲ್ಲಿ ಕೋರಲಾಗಿದೆ.