ನಾಗಮಂಗಲದ ಆದಿಚುಂಚನಗಿರಿ ಮಠದಲ್ಲಿ ನಿರ್ಮಿಸಿರುವ ಶ್ರೀ ಬಾಲಗಂಗಾಧರನಾಥ ಶ್ರೀಗಳ ನೂತನ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಏ.15 ರಂದು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಂದು ಮಠ ಮತ್ತು ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

  • - ಅಂದು ಬಾಲಗಂಗಾಧರನಾಥರ ಮಂದಿರ ಉದ್ಘಾಟನೆ
  • - ಆ ದಿನ ಮಠ, ದೇವಾಲಯಕ್ಕೆ ಭಕ್ತರಿಗಿಲ್ಲ ಪ್ರವೇಶ

 ನಾಗಮಂಗಲ (ಏ.8): ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಧಾರ್ಮಿಕ ಮತ್ತು ಆಧ್ಯಾತ್ಮಿಕ ಪುಣ್ಯ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಡಾ.ಬಾಲಗಂಗಾಧರನಾಥ ಶ್ರೀಗಳ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿಯವರು ಏ.15ರಂದು ಲೋಕಾರ್ಪಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಏ.15ರಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ದೇವಾಲಯ ಪ್ರವೇಶಕ್ಕೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶ್ರೀಕ್ಷೇತ್ರದಲ್ಲಿ ನಿರ್ಮಿಸಿರುವ ಶ್ರೀ ಗುರು ಭೈರವೈಕ್ಯ ಮಂದಿರದಲ್ಲಿ ಡಾ.ಬಾಲಗಂಗಾಧರನಾಥ ಶ್ರೀಗಳ ಮೂಲ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ಏ.10ರಿಂದ 15ರವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಲಿವೆ. ಏ.15ರಂದು ಬೆಳಗ್ಗೆ ಶ್ರೀಗುರು ಭೈರವೈಕ್ಯ ಮಂದಿರವನ್ನು ಮೋದಿ ಉದ್ಘಾಟಿಸಲಿದ್ದಾರೆ. ಬಳಿಕ, ಬಿಜಿಎಸ್ ಕ್ರೀಡಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಶ್ರೀಗಳ ಆಶಯದಂತೆ 175 *150 ಅಡಿ ವಿಸ್ತೀರ್ಣದಲ್ಲಿ ಕೆಂಪು ಶಿಲೆ ಮತ್ತು ವಿವಿಧ ಬಗೆಯ ಶಿಲಾ ಕಲ್ಲುಗಳಿಂದ ಶ್ರೀಗುರು ಭೈರವೈಕ್ಯ ಮಂದಿರ ನಿರ್ಮಾಣಗೊಂಡಿದೆ.