Asianet Suvarna News Asianet Suvarna News

‘ನಮ್ಮ ಬೇಡಿಕೆಗೆ ಪ್ರಧಾನಿ ಸ್ಪಂದಿಸಿದ್ದಾರೆ: ಮೌನ, ಮುನಿಸು ಎಲ್ಲವೂ ಸುಳ್ಳು’

ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮೆಲ್ಲಾ ಬೇಡಿಕೆಗಳಿಗೂ ಸ್ಪಂದಿಸಿದ್ದಾರೆ. ಮುನಿಸು, ಮೌನ ಎಲ್ಲವೂ ಸುಳ್ಳು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. 

PM promised to consider States request Says CM BS Yediyurappa
Author
Bengaluru, First Published Jan 4, 2020, 7:38 AM IST
  • Facebook
  • Twitter
  • Whatsapp

ಬೆಂಗಳೂರು [ಜ.04]:  ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲು ಮತ್ತು ಇಲಾಖಾವಾರು ಕೇಂದ್ರ ಸಚಿವರುಗಳಿಗೆ ಪ್ರಸ್ತಾವನೆ ಸಲ್ಲಿಸಲು ಪ್ರಧಾನಮಂತ್ರಿಗಳು ಸೂಚಿಸಿದ್ದಾರೆ. ಪ್ರಧಾನಿಗಳು ಈ ವಿಷಯದ ಬಗ್ಗೆ ಖುದ್ದಾಗಿ ನನ್ನೊಂದಿಗೆ ಮಾತನಾಡಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಗುರುವಾರ ತುಮಕೂರಿನಲ್ಲಿ ನಡೆದ ರೈತ ಸಮಾವೇಶದಲ್ಲಿ ರಾಜ್ಯಕ್ಕೆ ಹೆಚ್ಚಿನ ಪರಿಹಾರ ಬಿಡುಗಡೆ ಮಾಡುವಂತೆ ಯಡಿಯೂರಪ್ಪ ಅವರು ಬಹಿರಂಗವಾಗಿ ಪ್ರಧಾನಿ ಮೋದಿ ಅವರಿಗೆ ಮಾಡಿದ್ದ ಮನವಿಗೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟುಚರ್ಚೆ ಉಂಟಾಗಿದ್ದರಿಂದ ಶುಕ್ರವಾರ ಸಂಜೆ ಪ್ರಕಟಣೆ ಮೂಲಕ ಸ್ಪಷ್ಟಪಡಿಸುವ ಪ್ರಯತ್ನ ಮಾಡಿದರು.

ಹೊಸವರ್ಷದ ಪ್ರಾರಂಭದಲ್ಲಿಯೇ ರಾಜ್ಯದ ಪ್ರಸಿದ್ಧ ಕ್ಷೇತ್ರ ತುಮಕೂರಿನ ಸಿದ್ದಗಂಗಾ ಮಠಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರ ಘನ ಉಪಸ್ಥಿತಿಯಲ್ಲಿ ನಡೆದ ರೈತ ಸಮಾವೇಶ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ನಮ್ಮ ಅಹವಾಲನ್ನು ದೇಶದ ಪ್ರಧಾನಮಂತ್ರಿಗಳಲ್ಲಿ ಪ್ರಾಮಾಣಿಕವಾಗಿ ಸಲ್ಲಿಸಿದ್ದೇನೆ. ಇದು ನಮ್ಮ ಪ್ರಜಾಪ್ರಭುತ್ವದಲ್ಲಿ ಸಹಜವಾಗಿ ನಡೆಯುವಂತಹ ವಿದ್ಯಮಾನವಾಗಿದೆ. ಆದರೆ ಕೆಲವು ಮಾಧ್ಯಮಗಳಲ್ಲಿ ವಿಷಯವನ್ನು ತಿರುಚಿ, ಪ್ರಧಾನಿ ನಮ್ಮ ಬೇಡಿಕೆಗೆ ಮೌನ ವಹಿಸಿದ್ದರು, ಅವರು ಮುನಿಸಿಕೊಂಡಿದ್ದಾರೆ, ಅವರಿಗೆ ಅಸಮಾಧಾನವಾಗಿದೆ ಎಂದು ವಾಸ್ತವ ಸಂಗತಿಗಳನ್ನು ತಿಳಿಯುವ ಗೋಜಿಗೂ ಹೋಗದೆ, ತಮ್ಮ ಕಪೋಲಕಲ್ಪಿತ ವ್ಯಾಖ್ಯಾನಗಳನ್ನು ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇಂತಹ ಸುದ್ದಿಗಳು ಸತ್ಯಕ್ಕೆ ದೂರವಾದವು ಎನ್ನುವುದನ್ನು ನಾನು ಅತ್ಯಂತ ಸ್ಪಷ್ಟವಾಗಿ ಹೇಳುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಪ್ರಧಾನ ಮಂತ್ರಿಗಳು ನಮ್ಮ ರಾಜ್ಯದ ಬೇಡಿಕೆಗಳನ್ನು ಸ್ವೀಕರಿಸಿದ್ದಾರೆ. ನಮ್ಮ ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು, ರಾಜ್ಯದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡಬೇಕು, ಪ್ರವಾಹ ಪರಿಹಾರ ಕಾರ್ಯಗಳಿಗಾಗಿ ಹೆಚ್ಚಿನ ನೆರವು ನೀಡಬೇಕು, ಇದೆಲ್ಲವುಗಳಿಗೆ 50 ಸಾವಿರ ಕೋಟಿ ರು. ವಿಶೇಷ ಅನುದಾನ ನೀಡಬೇಕು ಎಂದು ಪ್ರಧಾನ ಮಂತ್ರಿಗಳಲ್ಲಿ ನಮ್ಮ ಮನವಿಯನ್ನು ರೈತ ಸಮಾವೇಶದ ವೇದಿಕೆಯಿಂದ ಮತ್ತೊಮ್ಮೆ ಅರಿಕೆ ಮಾಡಿಕೊಳ್ಳುವುದು ಸಮಂಜಸ ಎನ್ನುವ ಕಾರಣಕ್ಕೆ ಅಲ್ಲಿ ಅದನ್ನು ಉಲ್ಲೇಖಿಸಿದ್ದೇನೆ.

'ಮೋದಿ ಭಾರತದ ಪ್ರಧಾನಿಯೋ ಪಾಕ್‌ ಪ್ರಧಾನಿಯೋ?...

ಪ್ರಧಾನಿ ಮೋದಿ ಅವರ ದಕ್ಷ, ಪಾರದರ್ಶಕ, ಪ್ರಾಮಾಣಿಕ ಆಡಳಿತ ವೈಖರಿ ಇಡೀ ಜಗತ್ತಿಗೆ ಗೊತ್ತಿದೆ. ಇಡೀ ದೇಶಕ್ಕೆ ತಿಳಿದಿರುವಂತೆ, ಮೋದಿ ನೇತೃತ್ವದ ಸರ್ಕಾರ ರೈತರಿಗೆ ಅಭೂತಪೂರ್ವ ನೆರವು ನೀಡಿದೆ. ಪರಿಣಾಮಕಾರಿ ಯೋಜನೆಗಳನ್ನು ಜಾರಿಗೊಳಿಸಿ, ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಅತ್ಯಂತ ಪರಿಣಾಮಕಾರಿ ಹೆಜ್ಜೆಗಳನ್ನು ಇಡುತ್ತಿದೆ. ನಮ್ಮ ರಾಜ್ಯದ ಕೃಷಿಕರ, ನೀರಾವರಿ ಯೋಜನೆಗಳ ವಾಸ್ತವತೆಗಳೂ ಪ್ರಧಾನಿಗಳಿಗೆ ತಿಳಿದಿದೆ. ಅವರು ನಮ್ಮ ಅತ್ಯುನ್ನತ ನಾಯಕರು. ಕರ್ನಾಟಕಕ್ಕೆ ಅತಿ ಹೆಚ್ಚಿನ ನೆರವು, ಅನುದಾನ ನೀಡಿರುವುದು ನರೇಂದ್ರ ಮೋದಿಯವರೇ ಎನ್ನುವುದೂ ಕೂಡ ಎಲ್ಲರಿಗೂ ತಿಳಿದಿದೆ.

ಕಾಂಗ್ರೆಸ್‌ ಮುಖವಾಡ ಕಳಚಿ: ರವಿಕುಮಾರ್‌ಗೆ ಪಿಎಂ ಮೋದಿ ಸೂಚನೆ!...

ನಮ್ಮ ಎಲ್ಲ ಮನವಿಗೆ ಪ್ರಧಾನಮಂತ್ರಿಗಳು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಎಲ್ಲ ರೀತಿಯ ಸಹಕಾರ ನೀಡಲಿದೆ. ಈ ಬಗ್ಗೆ ದೆಹಲಿಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲು ಮತ್ತು ಇಲಾಖಾವಾರು ಕೇಂದ್ರ ಸಚಿವರುಗಳಿಗೆ ಪ್ರಸ್ತಾವನೆ ಸಲ್ಲಿಸಲು ಪ್ರಧಾನಮಂತ್ರಿಗಳು ಸೂಚಿಸಿದ್ದಾರೆ. ಪ್ರಧಾನಮಂತ್ರಿಗಳು ಈ ವಿಷಯದ ಬಗ್ಗೆ ಖುದ್ದಾಗಿ ನನ್ನೊಂದಿಗೆ ಮಾತನಾಡಿದ್ದಾರೆ. ವಾಸ್ತವ ಸಂಗತಿಗಳನ್ನು ಮರೆಮಾಚಿ, ಜನರಿಗೆ ತಪ್ಪು ಸಂದೇಶ ನೀಡುವ ಕೆಲವು ಮಾಧ್ಯಮಗಳ ಧೋರಣೆ ಸರಿಯಲ್ಲ ಎನ್ನುವುದನ್ನು ಮತ್ತೊಮ್ಮೆ ಇಲ್ಲಿ ಸ್ಪಷ್ಟಪಡಿಸಲು ಬಯಸುತ್ತೇನೆ. ರಾಜ್ಯದ ಹಿತದೃಷ್ಟಿಯಿಂದ ನಮ್ಮ ಪ್ರಯತ್ನಗಳನ್ನು ಬೆಂಬಲಿಸಿ ಮತ್ತು ವಿಷಯಗಳಿಗೆ ತಪ್ಪು ವಾಖ್ಯಾನ ಮಾಡದಿರಿ ಎಂದು ಎಲ್ಲ ವಿದ್ಯುನ್ಮಾನ ಮತ್ತು ಸುದ್ದಿ ಮಾಧ್ಯಮಗಳಲ್ಲಿ ನಾನು ಕೋರಿಕೊಳ್ಳುತ್ತಿದ್ದೇನೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

Follow Us:
Download App:
  • android
  • ios