ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ಹೈಕೋರ್ಟ್ ನೋಟಿಸ್
ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆ ನರಸೀಪುರ ಠಾಣೆ ಪೊಲೀಸರು ಮತ್ತು ಸಿಐಡಿ ದಾಖಲಿಸಿರುವ ಎಫ್‌ಐಆರ್ ಪ್ರಕರಣಗಳಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ಸಂಬಂಧ ಸಿಐಡಿಯ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರು (ಜು.06): ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆ ನರಸೀಪುರ ಠಾಣೆ ಪೊಲೀಸರು ಮತ್ತು ಸಿಐಡಿ ದಾಖಲಿಸಿರುವ ಎಫ್‌ಐಆರ್ ಪ್ರಕರಣಗಳಲ್ಲಿ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ಸಂಬಂಧ ಸಿಐಡಿಯ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿಗೆ ಸೂಚಿಸಿ ವಿಚಾರಣೆ ಮುಂದೂಡಿತು.
ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವುದರಿಂದ ರೆಗ್ಯೂಲರ್ ಜಾಮೀನು ಕೋರಿದ್ದಾರೆ. ಆದರೆ, ಅರ್ಜಿಗೆ ಹೈಕೋರ್ಟ್ ರಿಜಿಸ್ಟ್ರಾರ ಕಚೇರಿ ಆಕ್ಷೇಪಣೆ ಎತ್ತಿದೆ. ಅದನ್ನು ಸರಿಪಡಿಸಲು ಕಾಲಾವಕಾಶ ನೀಡಬೇಕು ಎಂದು ಅರ್ಜಿದಾರರ ಪರ ವಕೀಲರು ಮಾಡಿದ ಮನವಿ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಸಿಐಡಿ ದಾಖಲಿಸಿರುವ ಎರಡನೇ ಎಫ್‌ಐಆರ್ ಸಂಬಂಧ ಪ್ರಜ್ವಲ್ ರೇವಣ್ಣ ಅವರನ್ನು ತನಿಖಾಧಿಕಾರಿಗಳು ಈವರೆಗೂ ಬಂಧನ ತೋರಿಸಿಲ್ಲ. ಒಂದು ಪ್ರಕರಣದಲ್ಲಿ ಮಾತ್ರ ಬಂಧಿಸಿದ್ದಾರೆ. ಉಳಿದ ಪ್ರಕರಣಗಳಲ್ಲಿ ಬಾಡಿ ವಾರೆಂಟ್ ಮೂಲಕ ಕಸ್ಟಡಿ ಪಡೆದಿದ್ದರು. ಹೀಗಾಗಿ, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದ್ದು, ಅದನ್ನು ಪರಿಗಣಿಸಬೇಕು ಎಂದು ಕೋರಿದರು. ಅರ್ಜಿಯ ವಿಚಾರಣೆಗೆ ಅರ್ಹತೆಗೆ ಸಂಬಂಧ ರಿಜಿಸ್ಟ್ರಾರ್ ಕಚೇರಿ ಆಕ್ಷೇಪಣೆ ಎತ್ತಿದೆ ಎಂದು ತಿಳಿಸಿದರು.
ಜಾಮೀನು ಕೋರಿ ಹೈಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಕೆ
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ,ಈಗಾಗಲೇ ಬಂಧನದಲ್ಲಿರುವುದರಿಂದ ಸಿಐಡಿ ದಾಖಲಿಸಿರುವ ಎಫ್‌ಐಆರ್ ಸಂಬಂಧ ನಿರೀಕ್ಷಣಾ ಜಾಮೀನು ಸಲ್ಲಿಸಲು ಅವಕಾಶ ಇದೆಯೇ ಎಂದು ಪ್ರಶ್ನಿಸಿತಲ್ಲದೆ, ಅರ್ಜಿಗೆ ಸರ್ಕಾರ ಆಕ್ಷೇಪಣೆ ಸಲ್ಲಿಸಲಿ ಎಂದು ಸೂಚಿಸಿ ವಿಚಾರಣೆ ಮುಂದೂಡಿತು.