ವಕೀಲರ ಮೇಲಿನ ದೌರ್ಜನ್ಯ ತಡೆಗಟ್ಟುವ ದಿಸೆಯಲ್ಲಿ ಜುಲೈ 3ರಿಂದ ಆರಂಭವಾಗಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ‘ಕರ್ನಾಟಕ ವಕೀಲರ ರಕ್ಷಣಾ ಕಾಯ್ದೆ’ಯನ್ನು ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದು ಬೆಂಗಳೂರು ವಕೀಲರ ಸಂಘಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರು (ಜೂ.30): ವಕೀಲರ ಮೇಲಿನ ದೌರ್ಜನ್ಯ ತಡೆಗಟ್ಟುವ ದಿಸೆಯಲ್ಲಿ ಜುಲೈ 3ರಿಂದ ಆರಂಭವಾಗಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ‘ಕರ್ನಾಟಕ ವಕೀಲರ ರಕ್ಷಣಾ ಕಾಯ್ದೆ’ಯನ್ನು ಮಂಡಿಸಿ ಅನುಮೋದನೆ ಪಡೆಯಲಾಗುವುದು ಎಂದು ಬೆಂಗಳೂರು ವಕೀಲರ ಸಂಘಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಅವರ ನೇತೃತ್ವದಲ್ಲಿ ವಕೀಲರ ನಿಯೋಗವು ಗುರುವಾರ ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕರ್ನಾಟಕ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿ ಮಾಡುವಂತೆ ಕೋರಿ ಮನವಿ ಮತ್ರ ಸಲ್ಲಿಸಿತು.
ಸರ್ಕಾರಿ ವಕೀಲರ ನೇಮಕಾತಿ ಅಕ್ರಮವನ್ನು ಇಲಾಖಾ ತನಿಖೆಗೆ ಆದೇಶಿಸಿದ ಸಿಎಂ ಸಿದ್ದರಾಮಯ್ಯ
ಈ ವೇಳೆ ವಿವೇಕ್ ರೆಡ್ಡಿ ಅವರು, ವಕೀಲರ ಮೇಲಿನ ದೌರ್ಜನ್ಯ ತಡೆಯಲು ಮತ್ತು ವಕೀಲರಿಗೆ ರಕ್ಷಣೆ ಕಲ್ಪಿಸುವ ನಿಟ್ಟಿನಲ್ಲಿ ‘ಕರ್ನಾಟಕ ವಕೀಲರ ರಕ್ಷಣಾ ಕಾಯ್ದೆ’ ಜಾರಿಗೊಳಿಸುವುದು ಬಹುಮುಖ್ಯವಾಗಿದೆ. 2022ರ ಡಿಸೆಂಬರ್‌ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದಿದ್ದ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಮಂಡಿಸಲಾಗಿತ್ತಾದರೂ ಚರ್ಚೆಗೆ ತೆಗೆದುಕೊಳ್ಳಲಿಲ್ಲ. ಆಗ ವಿರೋಧ ಪಕ್ಷದ ನಾಯಕರಾಗಿದ್ದ ನೀವು (ಹಾಲಿ ಸಿಎಂ ಸಿದ್ದರಾಮಯ್ಯ) ಅವರೇ ಕಾಯ್ದೆ ಜಾರಿಗೊಳಿಸುವ ಅಗತ್ಯವಿದೆ ಎಂಬುದಾಗಿ ಧ್ವನಿ ಎತ್ತಿದ್ದಿರಿ. ಸದ್ಯ ನೀವೇ ಮುಖ್ಯಮಂತ್ರಿಗಳಾಗಿರುವ ಹಿನ್ನೆಲೆಯಲ್ಲಿ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಕಾಯ್ದೆಯನ್ನು ಮಂಡಿಸಿ ಉಭಯ ಸದನಗಳಿಂದಲೂ ಅನುಮೋದನೆ ಪಡೆಯಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.
ಈ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಕಾಯ್ದೆಯನ್ನು ಮಂಡಿಸಿ ಉಭಯ ಸದನಗಳಲ್ಲಿ ಅನುಮೋದನೆ ಪಡೆಯಲಾಗುವುದು. ಹಾಗೆಯೇ, ವಕೀಲರ ವಿಮಾ ಯೋಜನೆ ಜಾರಿ ವಿಚಾರವನ್ನು ಪರಿಗಣಿಸಲಾಗುವುದು. ಈ ಸಂಬಂಧ ಕಾನೂನು ಸಚಿವರಾದ ಎಚ್.ಕೆ. ಪಾಟೀಲ್ ಮತ್ತು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರನ್ನು ಭೇಟಿ ಮಾಡಿ ಚರ್ಚಿಸುವಂತೆ ವಕೀಲರ ನಿಯೋಗಕ್ಕೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಜಿ. ರವಿ, ಖಜಾಂಚಿ ಎಂ.ಟಿ. ಹರೀಶ, ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದ ರಾಜ್ ಮತ್ತು ವಕೀಲ ಪ್ರದೀಪ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
