ಹಿರಿಯ ಸಾಹಿತಿ ಪ್ರೊ. ದೊಡ್ಡ ರಂಗೇಗೌಡ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ.
ಬೆಂಗಳೂರು (ಜೂ. 24): ಕನ್ನಡ ಸಾಹಿತ್ಯ ಲೋಕದ ಹೆಸರಾಂತ ಹಿರಿಯ ಸಾಹಿತಿ ಪ್ರೊ. ದೊಡ್ಡ ರಂಗೇಗೌಡ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ತಕ್ಷಣವಾಗಿ ಬೆಂಗಳೂರಿನ ಕೆಂಗೇರಿಯಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದಾರೆ. ಚಿಕಿತ್ಸೆಯ ಸಂಪೂರ್ಣ ವೆಚ್ಚ ಸರ್ಕಾರದಿಂದ ಭರಿಸಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.
ಸಾಹಿತ್ಯ ಸೇವೆಗೆ ಅಪಾರ ಕೊಡುಗೆ ನಡಿದ ರಂಗೇಗೌಡ ಅವರ ಆರೋಗ್ಯದ ಬಗ್ಗೆ ಅವರ ಅಭಿಮಾನಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಬಿ.ಜಿ.ಎಸ್ ಆಸ್ಪತ್ರೆಗೆ ಭೇಟಿ ನೀಡಿ, ರಂಗೇಗೌಡ ಅವರ ಆರೋಗ್ಯ ಪರಿಸ್ಥಿತಿಯ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು. ಪ್ರಸ್ತುತ ಅವರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಸಾಹಿತಿಗೆ ಅಗತ್ಯವಿರುವ ಎಲ್ಲಾ ಚಿಕಿತ್ಸೆ, ವೈದ್ಯಕೀಯ ಸೌಲಭ್ಯವನ್ನು ನೀಡುವಂತೆ ಅಧಿಕಾರಿಗಳಿಗೆ ಸಚಿವರು ನಿರ್ದೇಶನ ನೀಡಿದ್ದಾರೆ. ಜೊತೆಗೆ, ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ರಾಜ್ಯ ಸರ್ಕಾರದಿಂದ ಭರಿಸಲಾಗುವುದು ಎಂಬ ಭರವಸೆ ನೀಡಿದ್ದಾರೆ. ದೊಡ್ಡ ರಂಗೇಗೌಡರು ನಮ್ಮ ರಾಜ್ಯದ ಸಾಹಿತ್ಯ ಪರಂಪರೆಯ ಹೆಮ್ಮೆ. ಅವರ ಆರೋಗ್ಯ ಸುಧಾರಣೆಗಾಗಿ ಎಲ್ಲರೂ ಪ್ರಾರ್ಥಿಸಬೇಕು' ಎಂದು ಸಚಿವ ಶಿವರಾಜ ತಂಗಡಗಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ರಂಗೇಗೌಡ ಅವರ ಆರೋಗ್ಯ ಸುಧಾರಣೆಗಾಗಿ ವಿವಿಧ ಲೇಖಕ, ಕವಿಗಳು ಮತ್ತು ಕನ್ನಡಪರ ಸಂಘಟನೆಗಳು ಪ್ರಾರ್ಥನೆ ಮಾಡಿದ್ದಾನೆ. ಇನ್ನು ರಂಗೇಗೌಡ ಅವರನ್ನು ಭೇಟಿ ಮಾಡಲು ಆಸ್ಪತ್ರೆ ಬಳಿ ಬರುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ.
