ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 545 ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ ರಾಜ್ಯ ಸರ್ಕಾರದಿಂದ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಲಾಗಿದೆ.

ಬೆಂಗಳೂರು (ಜು.21): ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ 545 ಪಿಎಸ್ ಐ ಅಕ್ರಮ ನೇಮಕಾತಿ ಪ್ರಕರಣ ರಾಜ್ಯ ಸರ್ಕಾರದಿಂದ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಲಾಗಿದೆ. ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಏಕಸದಸ್ಯ ತನಿಖಾ ಆಯೋಗ ರಚನೆ ಮಾಡಿ ತನಿಖೆಗೆ ಆದೇಶಿಸಲಾಗಿದೆ. ಪೊಲೀಸ್ ಇಲಾಖೆ ಹಾಗೂ ಸಿಐಡಿ ತನಿಖೆಗೆ ಸಹಕಾರ ನೀಡಬೇಕು ಎಂದು ಉಲ್ಲೇಖಿಸಲಾಗಿದೆ. ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಅಕ್ರಮ ನಡೆಸಿದ 52 ಅಭ್ಯರ್ಥಿಗಳಿಗೆ ಮುಂದಿನ ದಿನಗಳಲ್ಲಿ ನಡೆಯುವ ಇಲಾಖಾ ಪರೀಕ್ಷೆಗೆ ನಿಷೇಧ ಹೇರಲಾಗಿದೆ. ರಾಜ್ಯ ಸರ್ಕಾರ ಈ ಅಕ್ರಮವನ್ನು ಗಂಭೀರವಾಗಿ ಪರಿಗಣಿಸಿದೆ.

ಈಗಾಗಲೇ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿ ಅಕ್ರಮ ಸಂಬಂಧ ಆರೋಪ ಪಟ್ಟಿಯಲ್ಲಿ ಹೆಸರಿರುವ ಕಳಂಕಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಸರ್ಕಾರ ಹೈಕೋರ್ಟ್‌ಗೆ ಜು.5ಕ್ಕೆ ಸ್ಪಷ್ಟಪಡಿಸಿದೆ.

ನೀಟ್ ತೇರ್ಗಡೆಯಾಗಿ ವೃತ್ತಿಪರ ಕೋರ್ಸುಗಳ ಪ್ರವೇಶಾತಿ ಬಯಸಿರುವವರ ದಾಖಲೆ

545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಅಂದಿನ ಬಿಜೆಪಿ ಸರ್ಕಾರ ಆದೇಶಿಸಿತ್ತು. ಈ ಆದೇಶ ರದ್ದುಪಡಿಸಬೇಕು. ಕಳಂಕ ರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕೆಲ ಅಭ್ಯರ್ಥಿಗಳು ಕೆಎಟಿಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಕೆಎಟಿ 2022ರ ಜು.19ರಂದು ವಜಾಗೊಳಿಸಿತ್ತು. ಇದರಿಂದ, ಅರ್ಜಿದಾರರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ 2022ರ ಸೆ.28ರಂದು ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು.

ಇನ್ನು ಪಿಎಸ್‌ಐ ಅಕ್ರಮ ನೇಮಕಾತಿ ಹಗರಣ ಸಂಬಂಧ ಬಂಧಿತ ನೇಮಕಾತಿ ವಿಭಾಗದ ಮಾಜಿ ಮುಖ್ಯಸ್ಥ ಹಾಗೂ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಮೃತ್‌ ಪಾಲ್‌ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕ್ರಮ ಜರುಗಿಸಲು ರಾಜ್ಯ ಅಪರಾಧ ತನಿಖಾ ದಳಕ್ಕೆ (ಸಿಐಡಿ) ಕೇಂದ್ರ ಸರ್ಕಾರ ಈಗಾಗಲೇ ಅನುಮತಿ ನೀಡಿದೆ.

ನೇಮಕಾತಿ ವಿಭಾಗ ಮುಖ್ಯಸ್ಥರಾಗಿ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ನೇಮಕಾತಿಯನ್ನು ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ ಅಮೃತ್‌ ಪಾಲ್‌ ಅವರು ನಡೆಸಬೇಕಿತ್ತು. ಆದರೆ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಕೆಲ ಅಭ್ಯರ್ಥಿಗಳಿಂದ ಹಣ ಪಡೆದು ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಲು ನೆರವಾಗಿ ಭ್ರಷ್ಟಾಚಾರ ನಡೆಸಿದ್ದಾರೆ. ಹೀಗಾಗಿ ಅಖಿಲ ಭಾರತ ಸೇವಾ ಅಧಿಕಾರಿಯಾಗಿರುವ ಅಮೃತ್‌ ಪಾಲ್‌ ವಿರುದ್ಧ ಭ್ರಷಾಚಾರ ನಿಗ್ರಹ ಕಾಯ್ದೆಯನ್ನು ದಾಖಲಿಸಲು ಪ್ರಾಸಿಕ್ಯೂಷನ್‌ ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಸಿಐಡಿ ಮನವಿ ಮಾಡಿತ್ತು.

6 ವರ್ಷದಲ್ಲಿಯೇ ಎರಡು ವಿಶ್ವದಾಖಲೆ ಮುಡಿಗೇರಿಸಿಕೊಂಡ ಚಿತ್ರದುರ್ಗದ ಪೋರ!

ಈ ಮನವಿ ಪುರಸ್ಕರಿಸಿದ ಕೇಂದ್ರ ಸರ್ಕಾರವು, ಎಡಿಜಿಪಿ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದೆ. ಸರ್ಕಾರದ ಆದೇಶ ಕೈಸೇರಿದ ಬಳಿಕ ನ್ಯಾಯಾಲಯಕ್ಕೆ ಎಡಿಜಿಪಿ ವಿರುದ್ಧ ಪಿಸಿ ಕಾಯ್ದೆ ಅಳವಡಿಕೆಗೆ ಕೋರಿಕೆ ಸಲ್ಲಿಸಲಾಗುತ್ತದೆ ಎಂದು ಮೂಲಗಳು ಹೇಳಿವೆ.

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ಹಗರಣದಲ್ಲಿ ಬಂಧಿತರಾಗಿರುವ ಅಮೃತ್‌ ಪಾಲ್‌ ಸದ್ಯ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಮೊದಲು ವಂಚನೆ, ದಾಖಲೆ ತಿದ್ದಿದ ಹಾಗೂ ಅಧಿಕಾರ ದುರ್ಬಳಕೆ ಹೀಗೆ ವಿವಿಧ ಆರೋಪಗಳಡಿ ತನಿಖೆ ನಡೆಸಿ ಎಡಿಜಿಪಿ ವಿರುದ್ಧ ನ್ಯಾಯಾಲಯಕ್ಕೆ ಸಿಐಡಿ ಆರೋಪ ಪಟ್ಟಿ ಸಲ್ಲಿಸಿದೆ.