ರಾಜ್ಯದಲ್ಲಿ ಸಾರಿಗೆ ಸಂಸ್ಥೆಗಳನ್ನು ಸದೃಢಗೊಳಿಸಲು 5,675 ಹೊಸ ಬಸ್‌ ಖರೀದಿಸಲು ಉದ್ದೇಶಿಸಿದ್ದು, ಈ ಸಂಬಂಧ ಸೂಕ್ತ ಯೋಜನೆ ರೂಪಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಬೆಂಗಳೂರು (ಅ.22) :  ರಾಜ್ಯದಲ್ಲಿ ಸಾರಿಗೆ ಸಂಸ್ಥೆಗಳನ್ನು ಸದೃಢಗೊಳಿಸಲು 5,675 ಹೊಸ ಬಸ್‌ ಖರೀದಿಸಲು ಉದ್ದೇಶಿಸಿದ್ದು, ಈ ಸಂಬಂಧ ಸೂಕ್ತ ಯೋಜನೆ ರೂಪಿಸುವಂತೆ ಸಾರಿಗೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಶನಿವಾರ ಸಾರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಗೆ ರಾಜ್ಯಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮಗಳಲ್ಲಿ ಪ್ರಯಾಣಿಕರ ಸಂಖ್ಯೆ ಶೇ.15ರಷ್ಟು ಹೆಚ್ಚಾಗಿದೆ. ಹೀಗಾಗಿ ಹೆಚ್ಚುವರಿ ಬಸ್‌ ಸೇವೆ ನೀಡಲು ಹಾಗೂ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ನಿಗಮಗಳು ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.

ಉನ್ನತ ಶಿಕ್ಷಣ ಬ್ಯಾಕ್‌ಲಾಗ್‌ ಹುದ್ದೆ ಭರ್ತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಿಗೆ ಹೊಸ ಬಸ್‌ಗಳನ್ನು ಸೇರ್ಪಡೆ ಮಾಡಲು ಸರ್ಕಾರ ನಿರ್ಧರಿಸಿದೆ. 5,675 ಹೊಸ ಬಸ್‌ಗಳ ಖರೀದಿಯ ಗುರಿ ಹೊಂದಲಾಗಿದೆ. ಅದಕ್ಕೆ ಪೂರಕವಾಗಿ ಪ್ರಸಕ್ತ ಬಜೆಟ್‌ನಲ್ಲಿ 500 ಕೋಟಿ ರು. ಒದಗಿಸಲಾಗಿದ್ದು, ಅದರಲ್ಲಿ 1 ಸಾವಿರಕ್ಕೂ ಹೆಚ್ಚಿನ ಬಸ್‌ಗಳನ್ನು ಖರೀದಿಸಲಾಗುತ್ತಿದೆ. ಉಳಿದ ಬಸ್‌ಗಳ ಖರೀದಿಗೆ ಯೋಜನೆ ರೂಪಿಸಬೇಕಿದೆ ಎಂದರು.

ಇದೇ ವೇಳೆ ಸಾರಿಗೆ ಇಲಾಖೆ ರಾಜಸ್ವ ಗುರಿ ಸಂಗ್ರಹ ಮತ್ತು ಸಾರಿಗೆ ನಿಗಮಗಳ ಹಣಕಾಸು ಪರಿಸ್ಥಿತಿ ಬಗ್ಗೆ ಚರ್ಚಿಸಲಾಯಿತು. ವಾಹನಗಳ ದಾಖಲೆ ಪರಿಶೀಲಿಸಿ, ಅಕ್ರಮವಾಗಿ ಸಂಚರಿಸುತ್ತಿದ್ದ ವಾಹನಗಳಿಂದ 83 ಕೋಟಿ ರು. ದಂಡ ಸಂಗ್ರಹಿಸಲಾಗಿದೆ. ಅಲ್ಲದೆ, ರಾಜಸ್ವ ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್‌ ಅಹಮದ್‌, ಕಾರ್ಯದರ್ಶಿ ಜಿಯಾವುಲ್ಲಾ, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್‌, ಸಾರಿಗೆ ಇಲಾಖೆ ಕಾರ್ಯದರ್ಶಿ ಎನ್‌.ವಿ. ಪ್ರಸಾದ್‌ ಇತರರಿದ್ದರು.

ಧಿಕಾರ ಹಂಚಿಕೆಯ ಬಗ್ಗೆ ಯಾರೂ ಮಾತಾಡುವಂತಿಲ್ಲ: ಡಿಕೆಶಿ ಸೂಚನೆ