Asianet Suvarna News Asianet Suvarna News

ಶೀಘ್ರ ಕೋವಿಡ್‌ ಮಾರ್ಗಸೂಚಿ ಬಿಡುಗಡೆ: ಸಚಿವ ಸುಧಾಕರ್‌

ಜಪಾನ್‌, ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ರಾಜ್ಯದಲ್ಲಿ ಸದ್ಯಕ್ಕೆ ಆತಂಕವಿಲ್ಲ. ಆದರೂ ಕೆಲವೊಂದು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. 

Quick release of Covid 19 guidelines says Minister Dr K Sudhakar gvd
Author
First Published Dec 22, 2022, 7:59 AM IST

ಸುವರ್ಣಸೌಧ (ಡಿ.22): ಜಪಾನ್‌, ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ರಾಜ್ಯದಲ್ಲಿ ಸದ್ಯಕ್ಕೆ ಆತಂಕವಿಲ್ಲ. ಆದರೂ ಕೆಲವೊಂದು ಮುನ್ನಚ್ಚರಿಕೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚೀನಾ, ಜಪಾನ್‌ ಸೇರಿದಂತೆ ಹಲವೆಡೆ ಕೋವಿಡ್‌ ಪ್ರಕರಣಗಳು ಪತ್ತೆಯಾಗುತ್ತಿವೆ. ಅದರಲ್ಲೂ ಚೀನಾದಲ್ಲಿ ಆಸ್ಪತ್ರೆಗಳಿಗೆ ದಾಖಲಾಗುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ ಲಸಿಕಾಕರಣ ನೂರಕ್ಕೆ ನೂರರಷ್ಟು ಆಗಿದೆ. 

3ನೆಯ ಡೋಸ್‌ ಕೊಡಲು ಹೆಚ್ಚಿನ ಒತ್ತು ನೀಡಲಾಗುವುದು. 3ನೆಯ ಡೋಸ್‌ ತೆಗೆದುಕೊಳ್ಳದವರ ಮೇಲೆ ನಿಗಾ ಇಡುತ್ತೇವೆ. ಮಕ್ಕಳಿಗೂ ಲಸಿಕೆ ನೀಡಲಾಗುವುದು ಎಂದು ತಿಳಿಸಿದರು. ನಮ್ಮಲ್ಲಿ ಕೋವಿಡ್‌ನ ಆತಂಕ ಸದ್ಯಕ್ಕಿಲ್ಲ. ಆದರೂ ಕೆಲವು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಈಗಾಗಲೇ ಮುಖ್ಯಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ್ದೇನೆ. ಮುಖ್ಯಮಂತ್ರಿಗಳು ಹಾಗೂ ತಾವು ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಯಾವ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚಿಸಲಿದ್ದೇವೆ. 

Ayushmati Clinic: ಸ್ತ್ರೀಯರಿಗೆ ಪ್ರತ್ಯೇಕ ‘ಆಯುಷ್ಮತಿ’ ಕ್ಲಿನಿಕ್‌: ಸಚಿವ ಸುಧಾಕರ್‌

ಕೇಂದ್ರ ಆರೋಗ್ಯ ಇಲಾಖೆಯೊಂದಿಗೂ ಚರ್ಚೆ ನಡೆಸಲಾಗುವುದು. ಅಲ್ಲಿಂದ ಮಾರ್ಗದರ್ಶನ, ಸಲಹೆ ಪಡೆದು ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು ಎಂದು ತಿಳಿಸಿದರು. ಹೊಸ ತಳಿ ಬರುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಪಾಸಿಟಿವ್‌ ಕೇಸ್‌ಗಳನ್ನು ಜಿನೋಮಿಕ್‌ ಟೆಸ್ಟ್‌ ಮಾಡುವಂತೆ ಸೂಚನೆ ನೀಡಲಾಗುವುದು. ಕೋವಿಡ್‌ ಪರೀಕ್ಷೆಗೆ ಬರುವವರ ಮೇಲೆ ನಿಗಾ ಇಡಲಾಗುವುದು ಎಂದು ನುಡಿದ ಅವರು, ಅತಿಹೆಚ್ಚು ಪ್ರಯಾಣಿಕರು ಬರುವ ಸ್ಥಳವಾದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಿಗಾ ಇಡಲು ಪ್ರಾರಂಭಿಸಿದ್ದೇವೆ ಎಂದು ವಿವರಿಸಿದರು.

ಇಂದು ಸಿಎಂ ಮಹತ್ವದ ಸಭೆ: ಕೋವಿಡ್‌ ಸೋಂಕು ಕುರಿತ ವಿಷಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಈ ಸಂಬಂಧ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಗುರುವಾರ ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವದ ವಿವಿಧ ದೇಶಗಳಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಯಾವ ರೀತಿಯಲ್ಲಿದೆ ಎಂಬ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

Namma Clinic: ಬಡವರ ಆರೋಗ್ಯ ರಕ್ಷಣೆಗೆ ನಮ್ಮ ಕ್ಲಿನಿಕ್‌: ಸಚಿವ ಸುಧಾಕರ್‌

ಈ ಬಗ್ಗೆ ಕಟ್ಟೆಚ್ಚರ ವಹಿಸಲು ರಾಜ್ಯಕ್ಕೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್‌ ಸೋಂಕನ್ನು ಯಾವ ರೀತಿ ನಿಯಂತ್ರಣ ಮಾಡಬೇಕು, ಯಾವ ರೀತಿಯ ಟೆಸ್ಟ್‌ಗಳನ್ನು ಹೆಚ್ಚಳ ಮಾಡಬೇಕು ಎನ್ನುವ ಕುರಿತು ಚರ್ಚಿಸಲು ಗುರುವಾರ ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ರಾಜ್ಯದಲ್ಲಿ ಕೋವಿಡ್‌ ಸೋಂಕು ಹರಡುವಿಕೆ ತಡೆಗಟ್ಟುವ ಕ್ರಮಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.

Follow Us:
Download App:
  • android
  • ios