ಬೆಂಗಳೂರು: ವಾತಾವರಣದಲ್ಲಿ ಗಾಳಿಯ ಒತ್ತಡ (ಟ್ರಫ್‌) ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯ ಕೆಲವಡೆ ಗುಡುಗು ಸಹಿತ ಮಳೆಯಾಗುತ್ತಿದ್ದು, ಇನ್ನು ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಟ್ರಫ್‌ ಅರಬ್ಬಿ ಸಮುದ್ರದಿಂದ ತಮಿಳುನಾಡು ಹಾಗೂ ಕರ್ನಾಟಕದ ದಕ್ಷಿಣ ಭಾಗದಲ್ಲಿದೆ. ಹೀಗಾಗಿ ಗುಡುಗು, ಮಿಂಚು ಸಹಿತ ಮಳೆಯಾಗುತ್ತಿದೆ. 

ಭಾನುವಾರ ಸಹ ಮಳೆ ಮುಂದುವರೆಯುವ ಸಾಧ್ಯತೆ ಇದೆ. ರಾಜ್ಯದ ಕೆಲವೆಡೆ ಮಾತ್ರ ಹೆಚ್ಚಿನ ಮಳೆ (30 ರಿಂದ 40 ಮಿ.ಮೀ) ಆಗುವ ಸಾಧ್ಯತೆ ಇದೆ. ಇನ್ನುಳಿದಂತೆ ಹೆಚ್ಚಿನ ಪ್ರದೇಶದಲ್ಲಿ ಸಾಧಾರಣವಾಗಿ (15 ರಿಂದ 20 ಮಿ.ಮೀ) ಮಳೆಯಾಗಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವಿಜ್ಞಾನಿ ಸುನೀಲ್‌ ಗವಾಸ್ಕರ್‌ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.