ಸಚಿವ ಸ್ಥಾನ ಕಳೆದುಕೊಂಡ ಹಿನ್ನೆಲೆಯಲ್ಲಿ ಬೆಂಬಲಿಗರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಕ್ಕೆ ಮಾಜಿ ಸಚಿವ ಕೆ.ಎನ್‌.ರಾಜಣ್ಣ ಬೇಸರ ವ್ಯಕ್ತಪಡಿಸಿದ್ದಾರೆ. ಅಭಿಮಾನಿಗಳು, ಬೆಂಬಲಿಗರು ಯಾವುದೇ ಕಾರಣಕ್ಕೂ ಅತಿರೇಕದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ. 

ಬೆಂಗಳೂರು (ಆ.13): ರಾಜಕೀಯದ ಏರುಪೇರುಗಳು ನನಗೆ ಹೊಸದಲ್ಲ. ಅಭಿಮಾನಿಗಳು, ಬೆಂಬಲಿಗರು ಯಾವುದೇ ಕಾರಣಕ್ಕೂ ಅತಿರೇಕದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಮಾಜಿ ಸಚಿವ ಕೆ.ಎನ್‌.ರಾಜಣ್ಣ ಮನವಿ ಮಾಡಿದ್ದಾರೆ.

ಸಚಿವ ಸಂಪುಟದಿಂದ ವಾಜಾಗೊಂಡ ಹಿನ್ನೆಲೆಯಲ್ಲಿ ಬೆಂಬಲಿಗರೊಬ್ಬರು ಮೈಮೇಲೆ ಪೆಟ್ರೋಲ್‌ ಸುರಿದುಕೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ‘ಫೇಸ್‌ಬುಕ್‌’ನಲ್ಲಿ ಪೋಸ್ಟ್‌ ಹಾಕಿರುವ ರಾಜಣ್ಣ, ‘ರಾಜಕೀಯ ಏರುಪೇರುಗಳು ನನಗೆ ಹೊಸದಲ್ಲ. ಯಾವುದೇ ರಾಜಕೀಯ ಬದಲಾವಣೆಗೂ ಎಂದೂ ಧೃತಿಗೆಟ್ಟವನಲ್ಲ. ಇದು ಸಹ ಹಾಗೆಯೇ ಎಂದು ಹೇಳಲು ಇಚ್ಛಿಸುತ್ತೇನೆ. ಯಾವುದೇ ಕಾರಣಕ್ಕೂ ಅಭಿಮಾನಿಗಳು, ಬೆಂಬಲಿಗರು ಅತಿರೇಕದಲ್ಲಿ ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು’ ಎಂದು ಕೋರಿದ್ದಾರೆ.

ಕೆಲ ಯುವಕರು ನೋವುಂಟು ಮಾಡಿಕೊಂಡಿರುವುದು ನನ್ನ ಮನಸ್ಸಿಗೆ ದುಃಖ ತಂದಿದೆ. ನಿಮ್ಮನ್ನು ನಂಬಿಕೊಂಡು ನಿಮ್ಮ ಕುಟುಂಬದವರು ಮನೆಯಲ್ಲಿ ಕಾಯುತ್ತಿರುತ್ತಾರೆ. ನಾನು ಸಹ ನಿಮ್ಮನ್ನು ನನ್ನ ಕುಟುಂಬವೆಂದೇ ಭಾವಿಸಿದ್ದೇನೆ. ನಿಮ್ಮ ಪ್ರೀತಿ, ಅಭಿಮಾನ ಎಂತಹದ್ದು ಎಂಬುದನ್ನು ಕಣ್ಣಾರೆ ಕಂಡಿದ್ದೇನೆ. ಹಾಗಾಗಿ, ಯಾವುದೇ ತಪ್ಪು ನಿರ್ಧಾರ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವಂತಹ ಪ್ರಯತ್ನ ಮಾಡಬೇಡಿ. ನಾವೆಲ್ಲರೂ ಬುದ್ಧ, ಬಸವ, ಅಂಬೇಡ್ಕರ್‌ರವರ ಹಾದಿಯಲ್ಲೇ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ. ನಮ್ಮ ನಾಯಕರಾದ ರಾಹುಲ್ ಗಾಂಧಿಯವರ ನಾಯಕತ್ವದಲ್ಲಿ ಸಂವಿಧಾನ ಉಳಿಸುವ ಪ್ರಯತ್ನಕ್ಕೆ ಬಲ ತರಬೇಕಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ ಎಂದು ಕೋರಿದ್ದಾರೆ.