ಅಕ್ರಮ ಬಿಪಿಎಲ್ ಕಾರ್ಡ್‌ ಹಿಂದಿರುಗಿಸಲು ಸೂಚನೆ ಜುನ್ 30ರ ಒಳಗೆ ಬಿಪಿಎಲ್ ಕಾರ್ಡ್ ಹಿಂದಿರುಗಿಸಲು ಸೂಚನೆ  ಕಾನೂನು ರೀತ್ಯ ಕ್ರಮ ಕೈಗೊಳ್ಳುವುದಾಗಿ ಆಹಾರ ಇಲಾಖೆ ಎಚ್ಚರಿಕೆ

ಬೆಂಗಳೂರು (ಮೇ.30): ಸುಳ್ಳು ಮಾಹಿತಿ ನೀಡಿ ಅಕ್ರಮವಾಗಿ ಪಡೆದಿರುವ ಅಂತ್ಯೋದಯ ಮತ್ತು ಬಿಪಿಎಲ್‌ ಪಡಿತರ ಚೀಟಿಗಳನ್ನು ಜೂ.30ರೊಳಗೆ ಸ್ವಯಂಪ್ರೇರಿತವಾಗಿ ಇಲಾಖೆಗೆ ಹಿಂದಿರುಗಿಸಬೇಕು. ಇಲ್ಲದಿದ್ದರೆ ಕಾನೂನು ರೀತ್ಯ ಕ್ರಮ ಕೈಗೊಳ್ಳುವುದಾಗಿ ಆಹಾರ ಇಲಾಖೆ ಎಚ್ಚರಿಸಿದೆ.

ಸರ್ಕಾರ ನಿಗದಿಪಡಿಸಿರುವ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಮತ್ತು ಬಿಪಿಎಲ್‌ ಪಡಿತರ ಚೀಟಿ ಪಡೆದುಕೊಂಡವರು ಸ್ವಯಂ ಪ್ರೇರಿತವಾಗಿ ಆಯಾ ತಾಲೂಕಿನ ತಹಸೀಲ್ದಾರ್‌ ಅವರಿಗೆ ಪಡಿತರ ಚೀಟಿಗಳನ್ನು ಹಿಂದಿರುಗಿಸಬೇಕು.

ಪಡಿತರ ಚೀಟಿ ವಾಪಸ್‌ ಕೊಟ್ಟವರಿಗೆ ಎಪಿಎಲ್‌ ಪಡಿತರ ಚೀಟಿ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಗಡುವಿನೊಳಗಾಗಿ ಪಡಿತರ ಚೀಟಿಗಳನ್ನು ಹಿಂದಿರುಗಿಸುವವರಿಗೆ ಯಾವುದೇ ದಂಡ ವಿ​ಧಿಸಲಾಗುವುದಿಲ್ಲ. ತಪ್ಪಿದ್ದಲ್ಲಿ ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನ​ಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977 ಹಾಗೂ ಐ.ಪಿ.ಸಿ ಕಲಂಗಳಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಈ ಅವ​ಧಿಯಲ್ಲಿ ನ್ಯಾಯ ಬೆಲೆ ಅಂಗಡಿಯಿಂದ ಹಂಚಿಕೆ ಪಡೆದ ಆಹಾರ ಧಾನ್ಯಗಳ ಮುಕ್ತ ಮಾರುಕಟ್ಟೆಮೌಲ್ಯವನ್ನು ವಸೂಲಿ ಮಾಡಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BPL ಕಾರ್ಡಿನ ಕೊರೋನಾ ರೋಗಿಗಳಿಗೆ ದಿನಕ್ಕೆ 5 ಸಾವಿರ ನೆರವು ...

ಇವರು ಅರ್ಹರಲ್ಲ: ಸರ್ಕಾರಿ ನೌಕರರು, ಅನುದಾನಿತ ಸಂಸ್ಥೆಗಳು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿ, ನಿಗಮಗಳು, ಸ್ವಾಯತ್ತ ಸಂಸ್ಥೆಗಳಲ್ಲಿ ನೌಕರಿಯಲ್ಲಿ ಇರುವವರು, ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್‌, ವೃತ್ತಿ ತೆರಿಗೆ ಪಾವತಿಸುವ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್‌ಗಿಂತ ಹೆಚ್ಚಿನ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವವರು, ನಗರ ಪ್ರದೇಶದಲ್ಲಿ ಒಂದು ಸಾವಿರ ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಅಷ್ಟೇ ಅಲ್ಲದೆ ಕುಟುಂಬದ ವಾರ್ಷಿಕ 1.20 ಲಕ್ಷ ರು.ಗಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು, ಅಂತ್ಯೋದಯ, ಬಿಪಿಎಲ್‌ ಪಡಿತರ ಕಾರ್ಡು ಹೊಂದಿರುವಂತಿಲ್ಲ.

ಅಂತೆಯೇ ಜೀವನೋಪಾಯಕ್ಕಾಗಿ ಸ್ವಂತ ಓಡಿಸುವ ಒಂದು ವಾಣಿಜ್ಯ ವಾಹನ ಅಂದರೆ ಟ್ರ್ಯಾಕ್ಟರ್‌, ಮ್ಯಾಕ್ಸಿಕ್ಯಾಬ್‌, ಟ್ಯಾಕ್ಸಿ, ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ಇತರರು ಆದ್ಯತಾ ಪಡಿತರ ಚೀಟಿ ಪಡೆಯುವಂತಿಲ್ಲ ಎಂದು ಆಹಾರ ಇಲಾಖೆ ತಿಳಿಸಿದೆ.