ಬೆಂಗಳೂರು(ಜು.07): ಕೊರೋನಾ ಸೋಂಕು ನಿಯಂತ್ರಣದಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಯೋಧರಿಗೆ ರಿಸ್ಕ್‌ ಭತ್ಯೆ ಹಾಗೂ ಕೋವಿಡ್‌ ಚಿಕಿತ್ಸೆಯಲ್ಲಿ ಪಾಲ್ಗೊಳ್ಳುವ ನಗರದ ಅಂತಿಮ ಹಂತದ ವೈದ್ಯ ವಿದ್ಯಾರ್ಥಿಗಳಿಗೆ ನೀಟ್‌ ಪರೀಕ್ಷೆ ವೇಳೆ ಐದು ವಿಶೇಷ ಅಂಕ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕೋವಿಡ್‌-19 ತಡೆಗಟ್ಟುವುದಕ್ಕಾಗಿ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಸಭೆ ನಡೆಸಿದ ನಂತರ ವೈದ್ಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಈ ವಿಷಯ ತಿಳಿಸಿದರು.

ಕೊರೋನಾ ಅಟ್ಟಹಾಸ: ರಾಜ್ಯದಲ್ಲಿ ಮತ್ತೊಂದು ಆತಂಕಕಾರಿ ಬೆಳವಣಿಗೆ!

ಕೋವಿಡ್‌ ನಿಯಂತ್ರಣ ವಿಚಾರದಲ್ಲಿ ಮುಂಚೂಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಯೋಧರಿಗೆ ಹಾಗೂ ಎಲ್ಲಾ ಆರೋಗ್ಯ ಸಿಬ್ಬಂದಿಗೆ ರಿಸ್ಕ್‌ ಭತ್ಯೆ ನೀಡುವ ಚಿಂತನೆಯಿದೆ. ಅದೇ ರೀತಿ ಆರೋಗ್ಯ ಇಲಾಖೆಯ ‘ಡಿ’ ದರ್ಜೆ ನೌಕರರಿಗೆ ವೇತನ ದುಪ್ಪಟ್ಟು ಮಾಡುವ ಆಲೋಚನೆಯೂ ಇದೆ. ಈ ಎಲ್ಲಾ ವಿಚಾರಗಳು ಇನ್ನು ಎರಡ್ಮೂರು ದಿನಗಳಲ್ಲಿ ಸ್ಪಷ್ಟಗೊಳ್ಳಲಿವೆ ಎಂದರು.

ಆರೋಗ್ಯ ಯೋಧರಾಗಿ ಕೆಲಸ ಮಾಡುತ್ತಿರುವ ಎಲ್ಲರೂ ಸುಮಾರು 120 ದಿನಗಳಿಂದ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗಿ ಹೋಗಿ ಅವರಿಗೆ ಸೋಂಕು ತಗಲುವ ಅಪಾಯ ಹೆಚ್ಚಾಗಿದ್ದು, ಅವರ ಆತ್ಮಸ್ಥೈರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಈ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್‌ ನಿಯಂತ್ರಿಸಲು ಸರ್ಕಾರ ಮತ್ತಷ್ಟುಕಠಿಣ ಕ್ರಮಕೈಗೊಳ್ಳುತ್ತಿದೆ. ಪ್ರತಿ ದಿನ ಕೋವಿಡ್‌ ಪರೀಕ್ಷೆ ಹೆಚ್ಚಿಸುವ ಗುರಿ ಹೊಂದಲಾಗಿದ್ದು, ಕಳೆದ 24 ಗಂಟೆಗಳಲ್ಲಿ 15 ಸಾವಿರಕ್ಕೂ ಅಧಿಕ ಪರೀಕ್ಷೆ ನಡೆಸಲಗಿದೆ. ಕೋವಿಡ್‌ ಪರೀಕ್ಷೆ ನಿರ್ವಹಣೆಗೆಂದು ಹಿರಿಯ ನೋಡಲ್‌ ಅಧಿಕಾರಿಯನ್ನು ನೇಮಿಸಲಾಗಿದೆ ಎಂದು ಹೇಳಿದರು.

ಮನೆ ಬಾಡಿಗೆ ಕಟ್ಟಲೂ ಹಣವಿಲ್ಲ: ಬೆಂಗಳೂರಿಂದ ತವರಿಗೆ ಮತ್ತಷ್ಜು ಜನರ ಗುಳೆ!

ವೈದ್ಯ ವಿದ್ಯಾರ್ಥಿಗಳಿಗೆ ವಿಶೇಷ ಅಂಕ:

ಬೆಂಗಳೂರಿನಲ್ಲಿ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ ಸುಮಾರು ಎರಡು ಸಾವಿರ ವೈದ್ಯ ವಿದ್ಯಾರ್ಥಿಗಳನ್ನು ಕೋವಿಡ್‌ ಚಿಕಿತ್ಸೆಗೆ ಬಳಸಲಾಗುವುದು. ಅಲ್ಲದೇ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಎರಡು ಸಾವಿರ ನರ್ಸಿಂಗ್‌ ವಿದ್ಯಾರ್ಥಿಗಳು ಮತ್ತು ಎಂಬಿಬಿಎಸ್‌ ವಿದ್ಯಾರ್ಥಿಗಳನ್ನು ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಚಿಕಿತ್ಸೆ ನೀಡಲು ಬಳಸಲಾಗುವುದು. ಸೋಂಕಿತರ ಚಿಕಿತ್ಸೆಯಲ್ಲಿ ತೊಡಗುವ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳಿಗೆ ನೀಟ್‌ ಪರೀಕ್ಷೆಯಲ್ಲಿ ಐದು ವಿಶೇಷಾಂಕಗಳನ್ನು ನೀಡುವ ಕುರಿತು ಚರ್ಚೆ ನಡೆಸಲಾಗಿದ್ದು, ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದರು.

ಬೂತ್‌ ಮಟ್ಟದಲ್ಲಿ ಟಾಸ್ಕ್‌ಫೋರ್ಸ್‌ ರಚನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಶೀಘ್ರದಲ್ಲೇ ಟಾಸ್ಕ್‌ಫೋರ್ಸ್‌ ರಚನೆಯಾಗಲಿದೆ. ಗ್ರಾಮೀಣ ಪ್ರದೇಶದಲ್ಲಿ ಹಾಗೂ ನಗರಗಳಲ್ಲಿ ಕೋವಿಡ್‌ ನಿಯಂತ್ರಣಕ್ಕೆ ಇದು ಸಕ್ರಿಯವಾಗಿ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದರು.