ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡುತ್ತಿರುವ ಪ್ರಕರಣ ಸರ್ಕಾರದ ಗಮನಕ್ಕೆ ಬಂದಿದೆ. ಈ ಕುರಿತು ಉನ್ನತ ಮಟ್ಟದ ಸಭೆ ಕರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ದಾವಣಗೆರೆ (ನ.10): ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಯಾರೇ ತಪ್ಪು ಮಾಡಿದ್ರೂ ಕಠಿಣ ಕ್ರಮ:

ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಪರಪ್ಪನ ಅಗ್ರಹಾರದಲ್ಲಿ ಕಾನೂನು ಬಾಹಿರ ಚಟುವಟಿಕೆ ಕುರಿತ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ಐಷಾರಾಮಿ ಸವಲತ್ತುಗಳು ದೊರಕುತ್ತಿರುವ ವಿಷಯ ನಮ್ಮ ಸರ್ಕಾರದ ಗಮನಕ್ಕೆ ಬಂದಿದೆ. ಸಂಬಂಧಪಟ್ಟ ಅಧಿಕಾರಿಗಳು ರಜೆಯ ಮೇಲೆ ತೆರಳಿದ್ದರು. ಈ ಘಟನೆ ಸಂಬಂಧ ಚರ್ಚಿಸಲು ಸೋಮವಾರ ನಾನು ಅಧಿಕಾರಿಗಳ ಸಭೆ ಕರೆದಿದ್ದೇನೆ. ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ತಪ್ಪು ಮಾಡಿದವರ ಮೇಲೆ ಗಂಭೀರ ಕ್ರಮ ಕೈಗೊಳ್ಳಲಾಗುವುದು ಹಾಗೂ ಇನ್ನೂ ಮುಂದೆ ಇಂಥದ್ದು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು’ ಎಂದು ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ವಿಡಿಯೋ:

ಶಂಕಿತ ಐಸಿಸ್‌ ಉಗ್ರ, ವಿಕೃತ ಕಾಮಿ ಉಮೇಶ್‌ ರೆಡ್ಡಿ ಪರಪ್ಪನ ಅಗ್ರಹಾರ ಜೈಲಿನೊಳಗೆ ಮೊಬೈಲ್‌ ಬಳಸುತ್ತಿರುವ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿ ಭಾರೀ ಸಂಚಲನ ಸೃಷ್ಟಿಸಿವೆ. ಭಾನುವಾರ ಮತ್ತೊಂದು ವಿಡಿಯೋ ಹೊರಬಂದಿದ್ದು, ಅದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ.