ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲದಿರುವ ಬಗ್ಗೆ ಪತ್ರಕರ್ತೆಯೊಬ್ಬರು ಕೇಳಿದ ಪ್ರಶ್ನೆಗೆ ಶಾಸಕ ಆರ್.ವಿ. ದೇಶಪಾಂಡೆ ಅವರು ಅವಹೇಳನಕಾರಿಯಾಗಿ ಉತ್ತರಿಸಿದ್ದಾರೆ. ಇದನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಸೆ.5 ರಂದು ಹಳಿಯಾಳದಲ್ಲಿ ಪ್ರತಿಭಟನೆ ನಡೆಸಲಿದೆ.
ಕಾರವಾರ (ಸೆ.4): ಉತ್ತರ ಕನ್ನಡ ಜಿಲ್ಲೆ ಹಳಿಯಾಳ ಕ್ಷೇತ್ರದಲ್ಲಿ ಸರಿಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ಹೆರಿಗೆ ಆಗಬೇಕೆಂದರೂ ಸಮಸ್ಯೆ ಇದೆ ಎಂದು ಪ್ರಶ್ನೆ ಕೇಳಿದ್ದ ಪತ್ರಕರ್ತೆಗೆ ಅವಹೇಳನ ಮಾಡಿದ ಶಾಸಕ ಆರ್.ವಿ.ದೇಶಪಾಂಡೆ ಹೇಳಿಕೆಗೆ ಬಿಜೆಪಿ ಮಹಿಳಾ ಮೋರ್ಚಾ ಆಕ್ಷೇಪ ವ್ಯಕ್ತಪಡಿಸಿದ್ದು, ಸೆ.5ರಂದು ಹಳಿಯಾಳದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ಇತ್ತೀಚೆಗೆ ಸೂಪಾ ಜಲಾಶಯಕ್ಕೆ ಬಾಗಿನ ಸಲ್ಲಿಸಿದ ಆರ್.ವಿ.ದೇಶಪಾಂಡೆ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವಾಗ ಖಾಸಗಿ ವಾಹಿನಿಯ ಹಿರಿಯ ಪತ್ರಕರ್ತೆಯೊಬ್ಬರು, ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇಲ್ಲ. ಇಲ್ಲಿನ ಜನರು ತುರ್ತು ಸಂದರ್ಭದಲ್ಲಿ ಹೊರ ಜಿಲ್ಲೆಯ ಆಸ್ಪತ್ರೆಗಳನ್ನು ಅವಲಂಬಿಸಬೇಕು. ನಿಮ್ಮ ಹಳಿಯಾಳ ಕ್ಷೇತ್ರದಲ್ಲಿ ಹೆರಿಗೆ ಆಗಬೇಕೆಂದರೂ ಸಮಸ್ಯೆ ಇದೆ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ‘ನಿಂದೇನಾದ್ರೂ ಹೆರಿಗೆ ಮಾಡಿಸಬೇಕಾ ಹೇಳು.. ಮಾಡಿಸ್ತೀನಿ’ ಎಂದು ಹೇಳಿದ್ದರು. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದ್ದು, ಸಾರ್ವಜನಿಕರು ವ್ಯಾಪಕವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ದೇಶಪಾಂಡೆ ಕ್ಷಮೆ ಕೇಳುವಂತೆ ಕೆಲವರು ಆಗ್ರಹಿಸಿದ್ದಾರೆ.
ದೇಶಪಾಂಡೆ ಅವರು ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಕ್ಷೇತ್ರದ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದರೆ ಈ ರೀತಿ ಮಾತನಾಡಿದ್ದು ಸರಿಯಲ್ಲ ಎಂದು ಬಿಜೆಪಿಯ ಪ್ರಮುಖರು ಆಕ್ಷೇಪಿಸಿದ್ದು, ಬಿಜೆಪಿ ಮಹಿಳಾ ಮೋರ್ಚಾ ಸೆ.5ರಂದು ಹಳಿಯಾಳದಲ್ಲಿ ಪ್ರತಿಭಟನೆ ನಡೆಸಲಿದೆ.
