ಕೋವಿಡ್ ಲಸಿಕೆ ಅಡ್ಡ ಪರಿಣಾಮ ಹಾಗೂ ಲಸಿಕೆಯಿಂದ ಹೃದಯಾಘಾತ ಹೆಚ್ಚಳವಾಗುತ್ತಿದೆಯೇ ಎಂಬುದನ್ನು ವಿಶ್ಲೇಷಿಸಲು ರಚಿಸಿದ್ದ ಡಾ.ರವೀಂದ್ರನಾಥ್ ನೇತೃತ್ವದ ತಜ್ಞರ ಸಮಿತಿಯು ಶನಿವಾರ ಆರೋಗ್ಯ ಇಲಾಖೆಗೆ ವರದಿ ಸಲ್ಲಿಸುವ ಸಾಧ್ಯತೆಯಿದೆ.
ಬೆಂಗಳೂರು (ಜು.05): ಕೋವಿಡ್ ಲಸಿಕೆ ಅಡ್ಡ ಪರಿಣಾಮ ಹಾಗೂ ಲಸಿಕೆಯಿಂದ ಹೃದಯಾಘಾತ ಹೆಚ್ಚಳವಾಗುತ್ತಿದೆಯೇ ಎಂಬುದನ್ನು ವಿಶ್ಲೇಷಿಸಲು ರಚಿಸಿದ್ದ ಡಾ.ರವೀಂದ್ರನಾಥ್ ನೇತೃತ್ವದ ತಜ್ಞರ ಸಮಿತಿಯು ಶನಿವಾರ ಆರೋಗ್ಯ ಇಲಾಖೆಗೆ ವರದಿ ಸಲ್ಲಿಸುವ ಸಾಧ್ಯತೆಯಿದೆ. ಏಕಾಏಕಿ ಹೃದಯಾಘಾತ ಮತ್ತು ಹೃದಯ ಸ್ತಂಭನ ಪ್ರಕರಣಗಳ ಹೆಚ್ಚಳಕ್ಕೆ ಕಾರಣ ಅರಿಯಲು ಕೋವಿಡ್ ಲಸಿಕೆ ಅಡ್ಡ ಪರಿಣಾಮಗಳ ಬಗ್ಗೆ ಅಧ್ಯಯನ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಆದೇಶಿಸಿದ್ದರು.
ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಹೃದಯಾಘಾತ ಹೆಚ್ಚಳವಾಗುತ್ತಿರುವ ಬಗ್ಗೆ ಹಾಗೂ ಕೋವಿಡ್ ಲಸಿಕೆ ಅಡ್ಡಪರಿಣಾಮದ ಬಗ್ಗೆ ಅಧ್ಯಯನ ನಡೆಸಲು ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ರವೀಂದ್ರನಾಥ್ ಅವರ ನೇತೃತ್ವದ ತಜ್ಞರ ಸಮಿತಿ ರಚಿಸಿತ್ತು. ಈ ವರದಿಯನ್ನು ಶನಿವಾರ ಆರೋಗ್ಯ ಇಲಾಖೆಗೆ ಸಲ್ಲಿಸಲು ಡಾ. ರವೀಂದ್ರ ನಾಥ್ ಅವರು ಸಿದ್ಧತೆ ನಡೆಸಿದ್ದಾರೆ. ಆ ಸಮಿತಿ ಈಗಾಗಲೇ ಜಯದೇವ ಆಸ್ಪತ್ರೆಯ 250 ಹೃದ್ರೋಗಿಗಳನ್ನು ಪರಿಶೀಲನೆಗೊಳಿಸಿ, ವಿಶ್ಲೇಷಣೆ ಮಾಡಿದೆ. ಆ ವಿಶ್ಲೇಷಣೆಯಲ್ಲಿ ಕಂಡುಬರುವ ಅಂಶಗಳನ್ನಾಧರಿಸಿ ಸಮಿತಿಯು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತಿದೆ.
ಈ ಸಂಬಂಧ ಕನ್ನಡಪ್ರಭ ಜತೆ ಮಾತನಾಡಿದ ಡಾ.ರವೀಂದ್ರನಾಥ್, ಸಮಿತಿ ವಿವಿಧ ಆಯಾಮಗಳಲ್ಲಿ ಅಧ್ಯಯನ ನಡೆಸಿದ್ದು, ಸ್ಟ್ರೋಕ್ ಸಮಸ್ಯೆ ಬಗ್ಗೆಯೂ ಪರಿಶೀಲಿಸಲು ಇಲಾಖೆ ತಿಳಿಸಿದೆ. ಹೀಗಾಗಿ ನರರೋಗದ ಹಿನ್ನೆಲೆಯ ಪ್ರಕರಣಗಳ ಪರಿಶೀಲನೆ ಅಂತಿಮಗೊಳಿಸಿ ಶನಿವಾರ ವರದಿ ನೀಡಲು ಉದ್ದೇಶಿಸಿದ್ದೇವೆ ಎಂದು ತಿಳಿಸಿದರು.
ಕುತೂಹಲಕ್ಕೆ ಕಾರಣವಾದ ವರದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿ ನೀಡಿರುವ ಹೇಳಿಕೆ ತೀವ್ರ ಸಂಚಲನ ಮೂಡಿಸಿದೆ. ಕೇಂದ್ರ ಸರ್ಕಾರ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾರಂಥವರು ಸಿದ್ದರಾಮಯ್ಯ ಅವರ ಹೇಳಿಕೆ ಟೀಕಿಸಿದ್ದಾರೆ. ಈ ಹಂತದಲ್ಲಿ ಸರ್ಕಾರಕ್ಕೆ ತಜ್ಞರ ಸಮಿತಿ ವರದಿ ಸಲ್ಲಿಕೆಯಾಗುತ್ತಿದ್ದು, ವರದಿಯಲ್ಲಿ ಯಾವ ರೀತಿಯ ಅಂಶಗಳು ಇರಲಿವೆ ಎಂಬುದು ಕುತೂಹಲ ಮೂಡಿಸಿದೆ.