ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯ ಮಕ್ಮಲ್ ಟೋಪಿ ಹಾಕಿದ ಸಿದ್ದರಾಮಯ್ಯ; ಹೆಚ್‌.ಡಿ. ಕುಮಾರಸ್ವಾಮಿ

ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೆ ಹಳೆಯ ಪಿಂಚಣಿ ಯೋಜನೆಯನ್ನು ಕೇವಲ 13 ಸಾವಿರ ನೌಕರರಿಗೆ ಜಾರಿಗೊಳಿಸಿದ್ದು, ಉಳಿದ ನೌಕರರಿಗೆ ಮಕ್ಮಲ್ ಟೋಪಿ ಹಾಕಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Siddaramaiah has put Makhmal cap to Govt employees in name of old pension scheme HD Kumaraswamy sat

ಬೆಂಗಳೂರು (ಜ.25): ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯಲ್ಲಿ ಹಳೆಯ ಪಿಂಚಣಿ ಯೋಜನೆ (#OPS) ಜಾರಿಗೆ ತರುವುದಾಗಿ ಹೇಳಿದ್ದರೂ, ಅಧಿಕಾರಕ್ಕೆ ಬಂದು 10 ತಿಂಗಳ ನಂತರ ಜಾರಿಗೆ ತಂದಿದೆ. ಇವರು ತಮ್ಮಿಚ್ಛೆಯಂತೆ ಜಾರಿಗೆ ತಂದಿಲ್ಲ, ಸುಪ್ರೀಂ ಕೋರ್ಟ್‌ ಆದೇಶದ ಮೇರೆಗೆ ಸಿಎಂ ಸಿದ್ದರಾಮಯ್ಯ ತರಾತುರಿಯಲ್ಲಿ ಹಳೆಯ ಪಿಂಚಣಿ ಯೋಜನೆ ಜಾರಿಗೆ ತಂದಿದೆ. ಅದೂ ಕೂಡ 13 ಸಾವಿರ ನೌಕರರಿಗಷ್ಟೇ ಒಪಿಎಸ್ ಭಾಗಯ ಕರುಣಿಸಿರುವುದು, ಚುನಾವಣಾ ಗಿಮಿಕ್ ಅಷ್ಟೇ.. ಇದು ನೌಕರರಿಗೆ ಮಕ್ಮಲ್ ಟೋಪಿ ಹಾಕುವ ಕೆಲಸ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಹೆಚ್.ಡಿ. ಕುಮಾರಸ್ವಾಮಿ ಅವರು, 'ರಾಜ್ಯ ಕಾಂಗ್ರೆಸ್ ಸರಕಾರ ಮಕ್ಮಲ್ ಟೋಪಿ ಹಾಕುವ ತನ್ನ ಚಾಳಿ ಮುಂದುವರಿಸಿದೆ. ಗೌರವಾನ್ವಿತ ಸುಪ್ರಿಂ ಕೋರ್ಟ್ ಆದೇಶವನ್ನು ಕೇಂದ್ರ ಸರಕಾರ ಈಗಾಗಲೇ ಪಾಲಿಸಿದೆ. ಈ ಒತ್ತಡಕ್ಕೆ ಸಿಲುಕಿದ ರಾಜ್ಯ ಸರಕಾರ ಹಳೆ ಪಿಂಚಣಿ ಯೋಜನೆ (OPS) ಬಗ್ಗೆ ಅರೆಬರೆ, ತರಾತುರಿ ಆದೇಶ ಹೊರಡಿಸಿದೆಯೇ ಹೊರತು, ಸರಕಾರಿ ನೌಕರರ ಮೇಲೆ ಪ್ರೀತಿ ಉಕ್ಕಿ ಅಲ್ಲ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಕೇಂದ್ರ ಸರಕಾರವು 1-4-2006ಕ್ಕೂ ಮೊದಲು ಅಧಿಸೂಚನೆಯಾಗಿ ನೇಮಕಗೊಂಡವರಿಗೆ OPS ಕೊಟ್ಟಿದೆ. ನಂತರ ಎಲ್ಲಾ ರಾಜ್ಯಗಳು ಈ ಆದೇಶ ಜಾರಿ ಮಾಡುತ್ತಿವೆ. ಕರ್ನಾಟಕದಲ್ಲೂ ಆಗಿದೆ ಅಷ್ಟೇ. ಇದರಲ್ಲಿ ಸರಕಾರದ ಘನಂದಾರಿ ಸಾಧನೆ ಏನೂ ಇಲ್ಲ.

ದೇಶದ ರಕ್ಷಣೆಗಾಗಿ ಮೋದಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಬಿಜೆಪಿ ಸೇರಿದ್ದೇನೆಂದ ಜಗದೀಶ್ ಶೆಟ್ಟರ್!

ಮೇ ತಿಂಗಳಲ್ಲಿಯೇ OPS ಜಾರಿ ಮಾಡುವ ಭರವಸೆ ನೀಡಿದ್ದರು ಸಿದ್ದರಾಮಯ್ಯ. 2023 ಮೇ 20ರಂದು ಪ್ರಮಾಣ ಸ್ವೀಕರಿಸಿದ ಅವರು, ಸರಕಾರ ಬಂದ ಎರಡೇ ದಿನಕ್ಕೆ ಈ ಬಗ್ಗೆ ನಿರ್ಧಾರ ಕೈಗೊಳ್ಳಬಹುದಿತ್ತು. ಅವರು ಚುನಾವಣಾ ಫಸಲು ತೆಗೆಯಲು 10 ತಿಂಗಳು ಹೊಂಚು ಹಾಕಿ ಕೂತರು. ಇದು ಚುನಾವಣೆ ಗಿಮಿಕ್ ಅಷ್ಟೇ, ಅನುಮಾನವೇ ಇಲ್ಲ. 2006 ಏಪ್ರಿಲ್‌ ಪೂರ್ವ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಗೊಂಡ 13,000 ನೌಕರರು ಹಳೆ ಪಿಂಚಣಿ ವ್ಯಾಪ್ತಿಗೆ ಬರುತ್ತಾರೆ ಎಂದು ಈ ಆದೇಶ ಹೇಳುತ್ತದೆ. ಈ ಗ್ಯಾರಂಟಿ ಸರಕಾರಕ್ಕೆ ಈ ನಿರ್ಧಾರ ತೆಗೆದುಕೊಳ್ಳುವುದಕ್ಕೆ 10 ತಿಂಗಳೇ ಬೇಕಾಯಿತು. ಮಾತೆತ್ತಿದರೆ ಮೋದಿ ಅವರನ್ನು ನಿಂದಿಸುವ ಸಿಎಂ ಸಿದ್ದರಾಮಯ್ಯ ಅವರದ್ದು ಕೆಲಸದಲ್ಲಿ ಆಮೆವೇಗ ಎನ್ನುವುದಕ್ಕೆ ಇದೇ ಸಾಕ್ಷಿ. 

ಘರ್ ವಾಪ್ಸಿ ಯಶಸ್ವಿ: ಅಮಿತ್‌ ಶಾ ಜೊತೆಗೆ ಮಾತುಕತೆ ಬಳಿಕ ಬಿಜೆಪಿ ಬುಟ್ಟಿಗೆ ಬಿದ್ದ ಜಗದೀಶ್ ಶೆಟ್ಟರ್

ಎರಡು ನಾಲಿಗೆಯ ಕಾಂಗ್ರೆಸ್ ನವರು ನುಡಿದಂತೆ ನಡೆದಿದ್ದೇವೆ ಎಂದು ಕೊಚ್ಚಿಕೊಳ್ಳುತ್ತಾರೆ. ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಎಷ್ಟು ನೌಕರರಿಗೆ OPS ನೀಡುವುದಾಗಿ ಭರವಸೆ ನೀಡಿತ್ತು? ಆದರೆ, ಸರಕಾರದ ಆದೇಶದಿಂದ 13,000 ನೌಕರರಿಗೆ ಮಾತ್ರ OPS ಭಾಗ್ಯ ಕೊಡುತ್ತಿದೆ. ಉಳಿದವರು ಅಭಾಗ್ಯವಂತರೇ? ಹೋಗಲಿ, OPSಗೆ ಅರ್ಹ ನೌಕರರು ಎಷ್ಟಿದ್ದಾರೆ? ಸರಕಾರಕ್ಕೆ ಮಾಹಿತಿ ಇದೆಯಾ? ಹೇಳುವುದು ಒಂದು, ಮಾಡುವುದು ಇನ್ನೊಂದು ಎನ್ನುವ ತನ್ನ ಪರಂಪರಾಗತ ವರ್ತನೆಯನ್ನು ಕಾಂಗ್ರೆಸ್ ಇನ್ನಾದರೂ ಬದಲಿಸಿಕೊಳ್ಳಬೇಕು. ಪ್ರಣಾಳಿಕೆ ಮತ್ತು ಬಜೆಟ್ ನಲ್ಲಿ ಭರವಸೆ ನೀಡಿದಂತೆ ಸರಕಾರಿ ನೌಕರರಿಗೆ OPS ಕೊಡಲೇಬೇಕು. ಅದನ್ನು ಬಿಟ್ಟು ನೌಕರರ ಕಣ್ಣಿಗೆ ಮಣ್ಣೆರಚುವುದು ಸರಿಯಲ್ಲ. ನೌಕರರ ಬದುಕನ್ನು ಚುನಾವಣೆ ಸರಕನ್ನಾಗಿ ಮಾಡಿಕೊಳ್ಳುವುದು ಹೇಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ.

Latest Videos
Follow Us:
Download App:
  • android
  • ios