ರಾಜ್ಯ ಗೃಹ ಇಲಾಖೆಯಲ್ಲಿ ವರ್ಗಾವಣೆ ಬಾಕಿಯಿರುವ ಹಿನ್ನೆಲೆಯಲ್ಲಿ ಹಾಗೂ ವರ್ಗಾವಣೆ ಪ್ರಕ್ರಿಯೆ ಕುರಿತು ಪಕ್ಷದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಭಾನುವಾರ ರಹಸ್ಯ ಸ್ಥಳದಲ್ಲಿ ಸಭೆ ನಡೆಸಿದ್ದಾರೆ.

ಬೆಂಗಳೂರು (ಜು.31) : ರಾಜ್ಯ ಗೃಹ ಇಲಾಖೆಯಲ್ಲಿ ವರ್ಗಾವಣೆ ಬಾಕಿಯಿರುವ ಹಿನ್ನೆಲೆಯಲ್ಲಿ ಹಾಗೂ ವರ್ಗಾವಣೆ ಪ್ರಕ್ರಿಯೆ ಕುರಿತು ಪಕ್ಷದ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಭಾನುವಾರ ರಹಸ್ಯ ಸ್ಥಳದಲ್ಲಿ ಸಭೆ ನಡೆಸಿದ್ದಾರೆ.

ಈ ವೇಳೆ ಬಾಕಿ ಇರುವ ವರ್ಗಾವಣೆ ಪ್ರಕ್ರಿಯೆ ಮುಗಿಸುವ ಬಗ್ಗೆ ಹಾಗೂ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಪ್ರವಾಸಕ್ಕೆ ತೆರಳಲಿರುವ ಹಿನ್ನೆಲೆಯಲ್ಲಿ ಉಡುಪಿ ಕಾಲೇಜು ಪ್ರಕರಣದ ಬಗ್ಗೆಯೂ ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್‌ ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ; ಮಾಜಿ ಸಿಎಂ ಬೊಮ್ಮಾಯಿ ಟೀಕೆ

ಭಾನುವಾರ ಬೆಳಗ್ಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಡಾ.ಜಿ.ಪರಮೇಶ್ವರ್‌, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಅಲೋಕ್‌ ಮೋಹನ್‌ ಸೇರಿ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಆಗಮಿಸಿ ಚರ್ಚೆ ನಡೆಸಿದರು. ಬಳಿಕ ಪರಮೇಶ್ವರ್‌ ಹಾಗೂ ಸಿದ್ದರಾಮಯ್ಯ ಅವರು ಮಾತ್ರವೇ ಅಜ್ಞಾತ ಸ್ಥಳಕ್ಕೆ ತೆರಳಿದರು. ಈ ವೇಳೆ ಪೊಲೀಸ್‌ ವರ್ಗಾವಣೆ ಪಟ್ಟಿಅಂತಿಮಗೊಳಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಪೊಲೀಸರು ಹಾಗೂ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ ವಿಳಂಬದ ಬಗ್ಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಚುನಾವಣೆಯಲ್ಲಿ ಕಿರುಕುಳ ನೀಡಿದ ಅಧಿಕಾರಿಗಳ ವರ್ಗಾವಣೆಗೆ ಶಿಫಾರಸು ಮಾಡಿದರೂ ಮಾಡಿಲ್ಲ. ಅವರೊಂದಿಗೆ ಹೇಗೆ ಕೆಲಸ ಮಾಡಬೇಕು ಎಂದು ಬೇಸರ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಪ್ರತ್ಯೇಕ ಸಭೆ ಮಹತ್ವ ಪಡೆದುಕೊಂಡಿದೆ.

ಉಡುಪಿ ಘಟನೆ ಬಗ್ಗೆ ಚರ್ಚೆ:

ಇನ್ನು ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಕ್ಯಾಮೆರಾ ಇಟ್ಟಿರುವ ಆರೋಪದ ಬಗ್ಗೆ ನಡೆಯುತ್ತಿರುವ ಬೆಳವಣಿಗೆಗಳನ್ನೂ ಚರ್ಚಿಸಲಾಗಿದೆ. ಪ್ರಕರಣ ಯಾವ್ಯಾವ ಮಜಲಿಗೆ ಹೊರಳುತ್ತಿದೆ, ಇದನ್ನು ಹೇಗೆ ನಿಯಂತ್ರಿಸಬೇಕು ಎಂಬ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.

ಉಡುಪಿ ಕಾಲೇಜು ವಿಡಿಯೋ ವಿವಾದ: ಸಣ್ಣ ಘಟನೆ, ರಾಜಕೀಯ ಬಣ್ಣ ಯಾಕೆ ಎಂದ ಗೃಹ ಸಚಿವ ಪರಮೇಶ್ವರ್‌

ಸಿದ್ದರಾಮಯ್ಯ ಭೇಟಿಯಾದ ಪ್ರಿಯಾಂಕ್‌:

ಇದಕ್ಕೂ ಮೊದಲು ಸಚಿವರಾದ ಪರಮೇಶ್ವರ್‌ ಹಾಗೂ ಪ್ರಿಯಾಂಕ್‌ ಖರ್ಗೆ ಅವರು ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚಿಸಿದರು. ಸೋಮವಾರ ಎಸ್ಸಿಪಿ-ಟಿಎಸ್‌ಪಿ ಸಭೆ ಹಿನ್ನೆಲೆಯಲ್ಲಿ ಪೂರ್ವಭಾವಿ ಚರ್ಚೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.