ಸುಪ್ರೀಂಕೋರ್ಟ್ ಆದೇಶದಂತೆ ಬೆಳ್ತಂಗಡಿಯ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಗೆ ರಾಜ್ಯ ಸರ್ಕಾರವು ಐಜಿಪಿ ಎನ್.ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಿದೆ. ಈ ತಂಡವು ಮೂರು ತಿಂಗಳೊಳಗೆ ಸಮಗ್ರ ತನಿಖೆ ನಡೆಸಿ ಸುಪ್ರೀಂ ಕೋರ್ಟ್ ಹಾಗೂ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಬೇಕಿದೆ.
ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದಂತೆ ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸೌಜನ್ಯ ಕೊಲೆ ಪ್ರಕರಣದ ಸಮಗ್ರ ಮರು ತನಿಖೆಗೆ ಪೊಲೀಸ್ ಮಹಾನಿರೀಕ್ಷಕ ಎನ್.ಶಶಿಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಸೌಜನ್ಯ ಕೊಲೆ ಪ್ರಕರಣದ ಸಮಗ್ರ ಮರು ತನಿಖೆಗೆ ಸಂಬಂಧಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿ ವಿಶೇಷ ತನಿಖಾ ತಂಡ ರಚಿಸುವಂತೆ ಸುಪ್ರೀಂಕೋರ್ಟ್ ಸೆ. 21ರಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಆ ತೀರ್ಪಿನಂತೆ ರಾಜ್ಯ ಸರ್ಕಾರ ಶಶಿಕುಮಾರ್ ನೇತೃತ್ವದಲ್ಲಿ ತನಿಖಾ ತಂಡ ರಚಿಸಲಾಗಿದೆ. ಆ ತಂಡದಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್‌ಕುಮಾರ್ ರೆಡ್ಡಿ, ರಾಜ್ಯ ಗುಪ್ತಚರ ಇಲಾಖೆ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್, ಸಿಐಡಿ ಪೊಲೀಸ್ ಅಧೀಕ್ಷಕ ಲೋಕೇಶ್ ಜಗಲಸಾರ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಅವರನ್ನು ಸದಸ್ಯರನ್ನಾಗಿ ನಿಯೋಜಿಸಲಾಗಿದೆ.
ಈ ತಂಡವು ಪೊಲೀಸ್ ಮಹಾನಿರ್ದೇಶಕರ ಮೇಲ್ವಿಚಾರಣೆಯಲ್ಲಿ ಕಾರ್ಯನಿರ್ವಹಿಸಲಿದೆ. ಅಲ್ಲದೆ, ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಚಾಚೂ ತಪ್ಪದೇ ಪಾಲಿಸಬೇಕು. 3 ತಿಂಗಳೊಳಗೆ ಪ್ರಕರಣ ಸಮಗ್ರ ತನಿಖೆಯನ್ನು ಪೂರ್ಣಗೊಳಿಸಿ, ಅಂತಿಮ ತನಿಖಾ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ಹಾಗೂ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹಿನ್ನೆಲೆ
ಧರ್ಮಸ್ಥಳದ ಸೌಜನ್ಯ ಅ*ತ್ಯಾ*ಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ನಡೆದು 14 ವರ್ಷಗಳ ಬಳಿಕ ಮರು ತನಿಖೆಗೆ ನ್ಯಾಯಾಲಯ ಆದೇಶ ನೀಡಿರುವುದು ಒಂದು ಮಹತ್ವದ ಬೆಳವಣಿಗೆಯಾಗಿದೆ.
2012ರ ಅ. 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪ ಸೌಜನ್ಯ ಅ*ತ್ಯಾ*ಚಾರ ಹಾಗೂ ಕೊಲೆಗೀಡಾಗಿದ್ದರು. ಪ್ರಕರಣದ ತನಿಖೆ ಆರಂಭದಲ್ಲಿ ಸ್ಥಳೀಯ ಪೊಲೀಸರು ನಡೆಸಿದ್ದು, ಬಳಿಕ ಸಿಐಡಿ ಹಾಗೂ ಸಿಬಿಐಗೆ ವಹಿಸಲಾಗಿತ್ತು. ಸಿಬಿಐ ತನಿಖೆಯ ಬಳಿಕ ಸಂತೋಷ್ ರಾವ್ ಎಂಬವರನ್ನು ಆರೋಪಿಯನ್ನಾಗಿ ಮಾಡಲಾಗಿತ್ತು. ಆದರೆ, 2023ರ ಜೂನ್ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ಸಂತೋಷ್ ರಾವ್ ಅವರನ್ನು ಖುಲಾಸೆಗೊಳಿಸಿತ್ತು.
ಖುಲಾಸೆ ಬಳಿಕ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಲು ಮರುತನಿಖೆ ನಡೆಸಬೇಕೆಂಬ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿತ್ತು. ಸೌಜನ್ಯ ಕುಟುಂಬವೂ ಮರುತನಿಖೆಗೆ ಆಗ್ರಹಿಸಿತ್ತು. 2024ರಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ಮರುತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆದಿತ್ತು.
2026ರಲ್ಲಿ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಮರುತನಿಖೆ ನಡೆಸುವ ವಿಧಾನ ಮತ್ತು ಯಾವ ತನಿಖಾ ಸಂಸ್ಥೆಯ ಮೂಲಕ ತನಿಖೆ ನಡೆಸಬೇಕು ಎಂಬ ವಿಚಾರದಲ್ಲಿ ವಾದ-ಪ್ರತಿವಾದಗಳು ನಡೆದಿದ್ದವು. ರಾಜ್ಯ ಸರ್ಕಾರವೂ ಅಗತ್ಯವಿದ್ದಲ್ಲಿ ಎಸ್‌ಐಟಿ ರಚಿಸಲು ಸಿದ್ಧವಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿತ್ತು. ಇದೀಗ ಸುಪ್ರೀಂ ಕೋರ್ಟ್ ಎಸ್‌ಐಟಿ ಮೂಲಕ ಮರುತನಿಖೆಗೆ ಅವಕಾಶ ನೀಡಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿರುವುದು ಪ್ರಕರಣದಲ್ಲಿ ಮಹತ್ವದ ತಿರುವಾಗಿದೆ.


