ಐಪಿಎಲ್‌ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಸ್‌ಸಿಎ ಪದಾಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶಿಸಿದೆ. 

ಬೆಂಗಳೂರು (ಜೂ.7): ಐಪಿಎಲ್‌ ಕ್ರಿಕೆಟ್ ಪ್ರಶಸ್ತಿ ವಿಜೇತ ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಮುಂಭಾಗದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ಸಂಬಂಧ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಪದಾಧಿಕಾರಿಗಳ ವಿರುದ್ಧ ಬಲವಂತ ಕ್ರಮಕೈಗೊಳ್ಳಬಾರದು ಎಂದು ಸರ್ಕಾರಕ್ಕೆ ಹೈಕೋರ್ಟ್‌ ಶುಕ್ರವಾರ ನಿರ್ದೇಶಿಸಿದೆ.

ಕಾಲ್ತುಳಿತ ಪ್ರಕರಣ ಸಂಬಂಧ ತಮ್ಮ ವಿರುದ್ಧ ಕಬ್ಬನ್ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಕೆಎಸ್‌ಸಿಎ ಅಧ್ಯಕ್ಷ ರಘುರಾಮ್‌ ಭಟ್‌, ಕಾರ್ಯದರ್ಶಿ ಎ.ಶಂಕರ್‌, ಖಜಾಂಚಿ ಇ.ಎಸ್‌.ಜಯರಾಂ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣ ಕುಮಾರ್‌ ಅವರ ಪೀಠ ಈ ಸೂಚನೆ ನೀಡಿತು.

ಅಲ್ಲದೆ, ಅರ್ಜಿದಾರರು ಪೂರ್ವಾನುಮತಿಯಿಲ್ಲದೆ ನ್ಯಾಯಾಲಯದ ವ್ಯಾಪ್ತಿ ತೊರೆಯಬಾರದು. ತನಿಖೆಗೆ ಎಲ್ಲಾ ರೀತಿಯ ಸಹಕರಿಸಬೇಕು ಎಂದು ಷರತ್ತು ವಿಧಿಸಿರುವ ಹೈಕೋರ್ಟ್‌, ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿತು. ಅರ್ಜಿಯ ಮುಂದಿನ ವಿಚಾರಣೆ ವೇಳೆಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಜೂ.16ಕ್ಕೆ ಮುಂದೂಡಿತು.

ಇದನ್ನೂ ಓದಿ: ಮೇಲ್ಮನೆಗೆ ಕಾಂಗ್ರೆಸ್‌ನಿಂದ ನಾಲ್ವರ ಹೆಸರು ಫೈನಲ್‌; ಯಾರ್‍ಯಾರ ಹೆಸರು ಶಿಫಾರಸು?

ಇದಕ್ಕೂ ಮುನ್ನ ಅರ್ಜಿದಾರರ ಪರ ವಕೀಲರು, ಒಂದೇ ಆರೋಪಕ್ಕೆ ಸಂಬಂಧಿಸಿ ಆರ್‌ಸಿಬಿ ಫ್ರಾಂಚೈಸಿ ಪದಾಧಿಕಾರಿಗಳು, ಕಾರ್ಯಕ್ರಮ ಆಯೋಜನೆಯ ಜವಾಬ್ದಾರಿ ಹೊತ್ತಿದ್ದ ಡಿಎನ್‌ಎ ಸಂಸ್ಥೆ ವಿರುದ್ಧವೂ ಪ್ರತ್ಯೇಕವಾಗಿ ಎಫ್‌ಐಆರ್‌ ದಾಖಲಿಸಲಾಗಿದೆ. ಮುಖ್ಯಮಂತ್ರಿ ಸೂಚನೆ ಮೇರೆಗೆ ತನಿಖೆ ನಡೆಸಲಾಗುತ್ತಿದೆ. ಕ್ರೀಡಾಂಗಣದ ಗೇಟ್‌ಗಳ ಬಳಿ ನಡೆದ ದುರ್ಘಟನೆಗೆ ಕೆಎಎಸ್‌ಸಿಎ ಪದಾಧಿಕಾರಿಗಳ ವಿರುದ್ಧ ಆರೋಪ ಮಾಡಲಾಗದು. ಇದರಿಂದ ಅವರ ಹಕ್ಕುಗಳಿಗೆ ಹಾನಿಯಾಗಲಿದೆ. ಈ ನಡುವೆ ಎಫ್‌ಐಆರ್‌ ದಾಖಲಿಸಿರುವ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ಅಧಿಕಾರಿಯನ್ನು ಸರ್ಕಾರವೇ ಅಮಾನತು ಮಾಡಿದೆ. ಹೀಗಾಗಿ ಅರ್ಜಿದಾರರ ಬಂಧನಕ್ಕೆ ಅವಕಾಶ ನೀಡಬಾರದು. ಅವರು ಪೊಲೀಸರಿಗೆ ಎಲ್ಲಾ ರೀತಿಯ ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದರು.

ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ, ಪ್ರಕರಣವನ್ನು ಮ್ಯಾಜಿಸ್ಟೀಟ್‌ ವಿಚಾರಣೆಗೆ ಜೊತೆಗೆ ಹೈಕೋರ್ಟ್‌ ನಿವೃತ್ತ ನ್ಯಾ.ಮೈಕೆಲ್‌ ಕುನ್ಹಾ ನೇತೃತ್ವದ ಸಮಿತಿಗೆ ನ್ಯಾಯಾಂಗ ತನಿಖೆಯ ಹೊಣೆ ವಹಿಸಲಾಗಿದೆ. ಅಗತ್ಯವಿಲ್ಲದೆ ಯಾರನ್ನೂ ಬಂಧಿಸುವುದಿಲ್ಲ. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಬೇಕು. ಅರ್ಜಿದಾರರಿಗೆ ಬಂಧನದ ಆತಂಕವಿದ್ದರೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸಬಾರದು ಎಂದು ಸರ್ಕಾರಕ್ಕೆ ಸೂಚಿಸಿತು.