ಬೆಂಗಳೂರು(ನ.12): ಐಎಂಎ ಕಂಪನಿಯ ಠೇವಣಿದಾರರಿಗೆ ಹಣ ಬಿಡುಗಡೆ ಮಾಡುವ ಸಂಬಂಧ ನ. 25ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದ್ದು, ಕರ್ನಾಟಕ ಒನ್‌, ಬೆಂಗಳೂರು ಒನ್‌ ಹಾಗೂ ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದೆಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಐಎಂಎ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆ ಆಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.

ಐಎಂಎ ಪ್ರಕರಣಕ್ಕೆ ಕ್ಲಿನ್ ಚಿಟ್ ಕೊಟ್ಟ ಅಧಿಕಾರಿಗಳು ಔಟ್!

ಈ ವೇಳೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಹೇಶ್ವರ್‌ ರಾವ್‌ ಅವರ ಪ್ರಮಾಣಪತ್ರವನ್ನು ನ್ಯಾಯಪೀಠಕ್ಕೆ ಸಲ್ಲಿಸಿದ ವಕೀಲರು, ಐಎಂಎ ಪ್ರಕರಣದಲ್ಲಿ ಠೇವಣಿದಾರರ ಆಧಾರ್‌ ದೃಢೀಕರಣಕ್ಕೆ ನ.6ರಂದು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಠೇವಣಿದಾರರ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ನ.25ರಿಂದ ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು. ಅದನ್ನು ದಾಖಲಿಸಿಕೊಂಡ ಪೀಠ, ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿರುವ ಬಗ್ಗೆ ಪತ್ರಿಕೆಗಳಲ್ಲಿ ವ್ಯಾಪಕ ಪ್ರಚಾರ ನೀಡಬೇಕೆಂದು ಸರ್ಕಾರಕ್ಕೆ ನಿರ್ದೇಶಿಸಿತು.

ಜತೆಗೆ, ಪ್ರಕರಣದ ತನಿಖೆಯಲ್ಲಿ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಡಿ.7ರೊಳಗೆ ತನಿಖಾ ಪ್ರಗತಿ ವರದಿ ಸಲ್ಲಿಸಬೇಕು ಎಂದು ಎರಡು ಸಂಸ್ಥೆಗಳಿಗೆ ನಿರ್ದೇಶಿಸಿದ ನ್ಯಾಯಪೀಠ, ವಿಚಾರಣೆಯನ್ನು ಡಿ.9ಕ್ಕೆ ಮುಂದೂಡಿತು.