‘ರೈತರಿಂದ ಲಂಚ ಕೇಳಿದ್ರೆ ಕಠಿಣ ಕ್ರಮ’
ರೈತರಿಗೆ ಪರಿಹಾರ ಧನ ನೀಡಲು ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು [ಜ.05]: ಕೈಗಾರಿಕಾ ಪ್ರದೇಶಕ್ಕಾಗಿ ಸ್ವಾಧೀನ ಪಡಿಸಿಕೊಂಡ ಜಮೀನಿನ ರೈತರಿಗೆ ಪರಿಹಾರ ಧನ ನೀಡಲು ಲಂಚ ಕೇಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪದ ಹರಲೂರು ಮುದ್ದೇನಹಳ್ಳಿಯಲ್ಲಿನ ರಕ್ಷಣೆ, ಏರೋಸ್ಪೇಸ್, ಹೈಟೆಕ್ ಇಂಡಸ್ಟ್ರಿ ಬಡಾವಣೆಗಳ ಕೈಗಾರಿಕಾ ಪ್ರದೇಶಕ್ಕೆ ಜಗದೀಶ್ ಶೆಟ್ಟರ್ ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಮಾತನಾಡಿ, ರೈತರಿಂದ ಭೂಮಿ ಸ್ವಾಧೀನಪಡಿಸಿಕೊಂಡ ನಂತರ ಅವರಿಗೆ ಪರಿಹಾರ ನೀಡುವುದು ಸರ್ಕಾರದ ಕರ್ತವ್ಯ. ಆದರೆ ಪರಿಹಾರ ಧನ ಬಿಡುಗಡೆ ಮಾಡುವಾಗ ಅಧಿಕಾರಿಗಳು ಹಣ ಕೇಳಿದರೆ ದೂರು ನೀಡಿ. ತಕ್ಷಣವೇ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಸರ್ಕಾರ ನೂತನ ಕೈಗಾರಿಕಾ ಪ್ರದೇಶಕ್ಕಾಗಿ 1,800 ಎಕರೆ ಪ್ರದೇಶವನ್ನು ಸ್ವಾಧಿನಪಡಿಸಿಕೊಂಡಿದ್ದು, ಹಲವು ಬಗೆಯ ಕೈಗಾರಿಕೆಗಳನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ ರೈತರ ಮಕ್ಕಳಿಗೆ ಉದ್ಯೋಗ ಸಿಗುತ್ತದೆ. ರಾಜ್ಯ ಸರ್ಕಾರ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಹೀಗಾಗಿ ರಾಜ್ಯಕ್ಕೆ ವಿದೇಶಿ ಬಂಡವಾಳ ಹರಿದು ಬರಲಿದೆ. ದೇವನಹಳ್ಳಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ಈ ಪ್ರದೇಶ ಹೆಚ್ಚು ಅಭಿವೃದ್ಧಿ ಹೊಂದಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಹರಳೂರು, ಪೋಲನಹಳ್ಳಿ, ಮುದ್ದೇನಹಳ್ಳಿ ಮತ್ತಿತರ ಕಡೆ ಭೇಟಿ ನೀಡಿ ರೈತರ ಜತೆ ಮಾತುಕತೆ ನಡೆಸಿದರು. ಸಿಇಟಿಯುಎಂ, ವಿಪ್ರೋ, ಶೆಲ್ ಹಾಗೂ ಏರೋಸ್ಪೇಸ್ ಕೈಗಾರಿಕೆಗಳಲ್ಲಿನ ಕಾಮಗಾರಿಗಳನ್ನು ಪರಿಶೀಲಿಸಿದರು. ಭೂಮಿ ನೀಡಿದ ರೈತರ ಸಮಸ್ಯೆ ಆಲಿಸಿ ಪರಿಹಾರ ಸೂಚಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.