ಎಐಸಿಸಿ ಕಾರ್ಯದರ್ಶಿ ಹಾಗೂ ದೇವರಾಜ ಅರಸು ಅವರ ಮೊಮ್ಮಗ ಸೂರಜ್ ಹೆಗ್ಡೆ (55) ಅವರು ಹಠಾತ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಇದು ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಬಣ್ಣಿಸಿದ್ದಾರೆ.
ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ದಿವಂಗತ ದೇವರಾಜ ಅರಸು ಅವರ ಮೊಮ್ಮಗರೂ ಆದ ಸೂರಜ್ ಹೆಗ್ಡೆ ಅವರು ಭಾನುವಾರ ರಾತ್ರಿ ಹಠಾತ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ.
ಭಾನುವಾರ ಸೂರಜ್ (55) ಅವರಿಗೆ ಹಠಾತ್ ಹೃದಯ ಸಮಸ್ಯೆ ಕಾಣಿಸಿಕೊಂಡಿದ್ದು ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗಲಿಲ್ಲ ಎಂದು ತಿಳಿದುಬಂದಿದೆ. ಸುಮಾರು ಸೂರಜ್ ವಿದ್ಯಾರ್ಥಿ ಕಾಂಗ್ರೆಸ್, ಯುವ ಕಾಂಗ್ರೆಸ್, ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ಸಿನಲ್ಲಿ ಹಲವು ಜವಾಬ್ದಾರಿ ನಿಭಾಯಿಸಿದ್ದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಾಪ
ಸೂರಜ್ ಅವರ ನಿಧನಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದು, ಸೂರಜ್ ಹೆಗ್ಡೆ ಅವರ ಅಗಲಿಕೆ ಸುದ್ದಿ ಕೇಳಿ ನನ್ನ ಮನಸ್ಸಿಗೆ ಆಘಾತವಾಗಿದೆ. ಚಿಕ್ಕ ವಯಸ್ಸಿಗೆ ಅವರು ನಮ್ಮನ್ನು ಅಗಲಿದ್ದಾರೆ ಎಂಬುದನ್ನು ನಂಬಲೇ ಆಗುತ್ತಿಲ್ಲ. ಸೂರಜ್ ಅವರು ಎಐಸಿಸಿ ಕಾರ್ಯದರ್ಶಿಯಾಗಿ ತಮಿಳುನಾಡು ಹಾಗೂ ಪುದುಚೆರಿ ರಾಜ್ಯದ ಉಸ್ತುವಾರಿಯಾಗಿ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದಿದ್ದಾರೆ.
ಸೂರಜ್ ಹೆಗ್ಡೆ ಅವರು ತಮ್ಮ ತಾತ ದೇವರಾಜ ಅರಸು ಅವರಂತೆ ಹಿಂದುಳಿದ ವರ್ಗಗಳು, ಕಾರ್ಮಿಕರ ಹಕ್ಕು, ಸಾಮಾಜಿಕ ನ್ಯಾಯಕ್ಕಾಗಿ ಶ್ರಮಿಸುತ್ತಿದ್ದರು. ರಾಷ್ಟ್ರೀಯ ಯುವ ಕಾಂಗ್ರೆಸ್ ಉಸ್ತುವಾರಿಗಳಾಗಿ ಪಕ್ಷದ ಸಂಘಟನೆ ಮೂಲಕ ರಾಜಕೀಯಕ್ಕೆ ಪ್ರವೇಶಿಸಿದರು. ಈಗ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೂರಜ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


