ಬೆಂಗಳೂರು(ಜು.17):  ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ಜು.31ರವರೆಗೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. 

ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗುವವರು ಮತ್ತು ಕೊರೋನಾ ಕರ್ತವ್ಯಕ್ಕೆ ನಿಯೋಜನೆಯಾಗಿರುವವರನ್ನು ಹೊರತುಪಡಿಸಿ ಉಳಿದೆಲ್ಲ ಶಾಲಾ ಶಿಕ್ಷಕರು, ಸಿಬ್ಬಂದಿ, ಸಂಶೋಧಕರು, ಗುತ್ತಿಗೆ ನೌಕರರು, ಗೌರವ ಶಿಕ್ಷಕರು ಸೇರಿದಂತೆ ಎಲ್ಲ ಸಿಬ್ಬಂದಿಗಳು ಜು.31ರವರೆಗೆ ಮನೆಯಲ್ಲೇ ಕೆಲಸ ನಿರ್ವಹಿಸಬೇಕೆಂದು ಇಲಾಖೆಯ ಸೂಚನೆ ನೀಡಿದೆ.

ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಣೆಗೆ ಸೂಚನೆ

ಈ ಅವಧಿಯನ್ನು ಕರ್ತವ್ಯ ಅವಧಿ ಎಂದು ಪರಿಗಣಿಸಲಾಗುತ್ತದೆ. ಶಿಕ್ಷಕರು ಮತ್ತು ಸಿಬ್ಬಂದಿಗಳು ತುರ್ತು ಸಂದರ್ಭದಲ್ಲಿ ಸಂಪರ್ಕಿಸಲು ತಮ್ಮ ದೂರವಾಣಿ ಸಂಖ್ಯೆ ನೀಡಿರಬೇಕು. ಈ ಅವಧಿಯಲ್ಲಿ ಕೇಂದ್ರ ಸ್ಥಾನವನ್ನು ಬಿಟ್ಟು ಹೋಗಬಾರದು. ಅಗತ್ಯವಿದ್ದಾಗ ಸೇವೆ ಸಲ್ಲಿಸಲು ಸಿದ್ಧರಾಗಿರಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.